ಗದಗ

ಕಾಮಗಾರಿ ಕಳಪೆ: ಭೂಸೇನಾ ನಿಗಮಕ್ಕೆ ಎಚ್ಚರಿಕೆ

Published On :

ಕನ್ನಡಪ್ರಭ ವಾರ್ತೆ, ಶಿರಹಟ್ಟಿ, ಮೇ 27
ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿಯೂ ಭೂಸೇನಾ ನಿಗಮದ ವತಿಯಿಂದ ನಡೆಯುತ್ತಿರುವ ಕಾಮಗಾರಿಗಳು ಸಂಪೂರ್ಣ ಕಳಪೆಯಿಂದ ಕೂಡಿವೆ ಎಂಬ ಆರೋಪ ಸಾರ್ವಜನಿಕರಿಂದ ಕೇಳಿ ಬರುತ್ತಿದೆ. ಜತೆಗೆ ನಿಗದಿತ ಅವಧಿಯಲ್ಲಿ ಕಾಮಗಾರಿಯೂ ಮುಗಿಯುವುದಿಲ್ಲ ಎಂಬ ದೂರುಗಳಿದ್ದು, ಇನ್ನು ಮುಂದೆ ಅಧಿಕಾರಿಗಳು ಎಚ್ಚರವಹಿಸಿ ಕೆಲಸ ಮಾಡಬೇಕು ಎಂದು ಶಾಸಕ ರಾಮಕೃಷ್ಣ ದೊಡ್ಡಮನಿ ತಾಕೀತು ಮಾಡಿದರು.
ಸೋಮವಾರ ತಾಲೂಕು ಪಂಚಾಯಿತಿ ಸಭಾಭವನದಲ್ಲಿ ನಡೆದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷೆ ವಹಿಸಿ ಮಾತನಾಡಿದ ಅವರು, ಜಿಲ್ಲಾಧಿಕಾರಿಗಳಿಂದ ಕಾಮಗಾರಿಯ ಅನುಮತಿ ಪತ್ರ ಸಿಗುವ ಮೊದಲೇ ಗುದ್ದಲಿ ಪೂಜೆ ಮಾಡುವುದು. ಕಾಮಗಾರಿ ಪ್ರಾರಂಭವಾದ ಬಳಿಕ ಗುಣಮಟ್ಟವನ್ನು ಪರೀಕ್ಷಿಸಲು ಸಂಬಂಧಪಟ್ಟ ಅಧಿಕಾರಿಗಳು ಬರದಿರುವ ಬಗ್ಗೆಯೂ ದೂರುಗಳು ಬಂದಿವೆ. ಇದೇ ನಿಧಾನಗತಿಯ ಧೋರಣೆ ಮುಂದುವರೆಸಿದರೆ ಭೂ ಸೇನಾ ನಿಗಮಕ್ಕೆ ಕಾಮಗಾರಿಗಳನ್ನು ನೀಡದಂತೆ ಸರ್ಕಾರದ ಗಮನ ಸೆಳೆಯುವುದಾಗಿ ಶಾಸಕರು ತಿಳಿಸಿದರು. ಇದೇ ಸಂದರ್ಭದಲ್ಲಿ ತಾ.ಪಂ. ಸದಸ್ಯರಾದ ಚನ್ನಪ್ಪ ಜಗಲಿ, ನಿಂಬಣ್ಣ ಮಡಿವಾಳರ ಕೂಡ ಅಧಿಕಾರಿಯನ್ನು ತರಾಟೆಗೆ ತೆಗೆದುಕೊಂಡರು.
ಗುಣಮಟ್ಟದ ಬೀಜ ಕೊಡಿ: ಮುಂಗಾರು ಮಳೆ ಪ್ರಾರಂಭವಾಗುತ್ತಿದ್ದು, ರೈತರಿಗೆ ಪೂರೈಸಲು ಗುಣಮಟ್ಟದ ಬಿತ್ತನೆ ಬೀಜ, ರಸಗೊಬ್ಬರ ದಾಸ್ತಾನು ಬಗ್ಗೆ ಕೃಷಿ ಇಲಾಖೆ ಅಧಿಕಾರಿ ಕ್ರಮ ಕೈಗೊಳ್ಳಬೇಕು. ಯಾವುದೇ ಹಂತದಲ್ಲಿಯೂ ಕಳಪೆ ಬೀಜ ಪೂರೈಕೆಯಾಗದಂತೆ ಮುಂಜಾಗ್ರತಾ ಕ್ರಮ ಕೈಗೊಳ್ಳಬೇಕು ಎಂದರು. ಶಾಸಕರಾಗಲಿ, ಅಧಿಕಾರಿಗಳಾಗಲಿ ಜನ ಸಾಮಾನ್ಯರಿಗೆ ಯಾವುದೇ ತೊಂದರೆಗಳಾಗದಂತೆ ತ್ವರಿತಗತಿಯಿಂದ ಕಾರ್ಯನಿರ್ವವಹಿಸಬೇಕು. ಸರ್ಕಾರದ ಯೋಜನೆಗಳನ್ನು ಅನುಷ್ಠಾನಗೊಳಿಸುವಲ್ಲಿ ಅಧಿಕಾರಿಗಳ ಪಾತ್ರ ಬಹಳ ಮಹತ್ವದ್ದಾಗಿದ್ದು, ಅಧಿಕಾರಿಗಳು ವಿಳಂಬಧೋರಣೆ ಮಾಡಕೂಡದು ಎಂದು ಎಚ್ಚರಿಸಿದರು.
ಬಹುತೇಕ ಕಡೆಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಕಾಡುತ್ತಿದೆ. ಪುರಸಭೆ ಮತ್ತು ಪಟ್ಟಣ ಪಂಚಾಯಿತಿಗಳಿಗೆ ಸಮರ್ಪಕ ಕುಡಿಯುವ ನೀರು ಪೂರೈಕೆಗೆ ಹಾಗೂ ಸ್ವಚ್ಛತೆ ಕೈಗೊಳ್ಳಲು ಸಾಕಷ್ಟು ಅನುದಾನ ಹರಿದು ಬಂದರೂ ಅಧಿಕಾರಿಗಳ ಬೇಜವಾಬ್ದಾರಿತನದಿಂದಾಗಿ ಸಾಮಾನ್ಯ ಜನರು ತೊಂದರೆ ಅನುಭವಿಸುತ್ತಿದ್ದು, ಅಧಿಕಾರಿಗಳು ನಿಗಾವಹಿಸಬೇಕು ಎಂದರು.
ತಹಸೀಲ್ದಾರ್ ಆರ್.ಡಿ. ಉಪ್ಪಿನ, ತಾ.ಪಂ. ಕಾರ್ಯನಿರ್ವಾಹಕ ಅಧಿಕಾರಿ ವೈ.ಎಲ್. ಹಂಪಣ್ಣ ಮಾತನಾಡಿದರು. ತಾ.ಪಂ. ಅಧ್ಯಕ್ಷೆ ಸುನಂದಾ ಬಿದರಳ್ಳಿ, ಉಪಾಧ್ಯಕ್ಷೆ ಶಾರದಾ ಕವಲೂರ, ಜಿ.ಪಂ. ಸದಸ್ಯರಾದ ಕಮಲವ್ವ ಸಜ್ಜನರ, ನಿರ್ಮಲಾ ಬರದೂರ, ತಾ.ಪಂ. ಸದಸ್ಯ ಕೋಟೆಪ್ಪ ವರ್ದಿ, ತಿಮ್ಮರಡ್ಡಿ ಅಳವಂಡಿ, ಸಿಪಿಐ ಪ್ರಕಾಶಬಾಬು ನಾಯ್ಡು ಮತ್ತಿತರರು ವೇದಿಕೆ ಮೇಲೆ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.