ಕನ್ನಡ ಭಾಷೆಗೆ ಆದ್ಯತೆ ನೀಡಿ: ಲಕ್ಕುಂಡಿ
ಕನ್ನಡಪ್ರಭ ವಾರ್ತೆ, ಶಿರಹಟ್ಟಿ, ನ. 1
ಕನ್ನಡ ಕಲಿಸಬೇಕು, ಉಳಿಸಬೇಕು, ಪ್ರೀತಿಸಬೇಕು ಎಂಬುದು ಬರೀ ಮಾತಿನಲ್ಲಿ ಆಗಬಾರದು. ಕನ್ನಡ ಭಾಷೆ ಆಡಳಿತ ಭಾಷೆ ಆಗಬೇಕು. ಸರ್ಕಾರ ಪ್ರಾಧಿಕಾರ ರಚನೆ ಮಾಡಿ, ಕಡ್ಡಾಯವಾಗಿ ಇದನ್ನು ಜಾರಿಗೆ ತರಬೇಕು ಎಂದು ಪಟ್ಟಣ ಪಂಚಾಯಿತಿ ಅಧ್ಯಕ್ಷ ನಾಗರಾಜ ಲಕ್ಕುಂಡಿ ಹೇಳಿದರು.
ಅವರು ಶುಕ್ರವಾರ ತಹಸೀಲ್ದಾರ್ ಕಚೇರಿ ಸಭಾಂಗಣದಲ್ಲಿ ತಾಲೂಕು ಆಡಳಿತದ ವತಿಯಿಂದ ಜರುಗಿದ 58ನೇ ಕರ್ನಾಟಕ ರಾಜ್ಯೋತ್ಸವ ದಿನಾಚರಣೆ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಪಾಲ್ಗೊಂಡು ಮಾತನಾಡಿದರು.
ತಾಲೂಕು ಆಡಳಿತದ ವತಿಯಿಂದ ಜರುಗಿದ ಈ ಕಾರ್ಯಕ್ರಮಕ್ಕೆ ಅಧಿಕಾರಿ ವರ್ಗದವರು ಪಾಲ್ಗೊಳ್ಳದೇ ಇರುವ ಬಗ್ಗೆ ಬೇಸರ ವ್ಯಕ್ತಪಡಿಸಿದ ಅವರು, ಸಭೆಯಲ್ಲಿ ಬೆರಳೆಣಿಕೆಯಷ್ಟಿದ್ದ ಅಧಿಕಾರಿಗಳನ್ನು ನೋಡಿ ತಾಲೂಕು ಆಡಳಿತದ ವಿರುದ್ಧ ಹರಿಹಾಯ್ದರು. ಜನಪ್ರತಿನಿಧಿಗಳನ್ನು ದೂರವಿಡುವ ಕೆಲಸಕ್ಕೆ ಅಧಿಕಾರಿಗಳು ಮುಂದಾಗಿದ್ದಾರೆ ಎಂದು ಆರೋಪಿಸಿದರು. ನಾಡಹಬ್ಬಕ್ಕೆ ಅಗೌರವ ಬರುವಂತೆ ನಡೆದುಕೊಂಡ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ತಾಕೀತು ಮಾಡಿದರು. ತಹಸೀಲ್ದಾರ್ ಆರ್.ಬಿ. ನಿಂಗನಗೌಡ್ರ ಧ್ವಜಾರೋಹಣ ನೆರವೇರಿಸಿ ಮಾತನಾಡಿ, ಕನ್ನಡ ನಾಡಿಗೆ ಸಾವಿರಾರು ವರ್ಷಗಳಷ್ಟು ಗತ ವೈಭವದ ಸುಧೀರ್ಘ ಇತಿಹಾಸವಿದೆ. ಅತಿ ಹೆಚ್ಚು ಜ್ಞಾನಪೀಠ ಪ್ರಶಸ್ತಿ ಪಡೆದ ಹೆಮ್ಮೆ ಕನ್ನಡ ಭಾಷೆಗೆ ಇದೆ ಎಂದು ಬಣ್ಣಿಸಿದರು.
ಮಾಜಿ ಶಾಸಕ ಎಸ್.ಎನ್. ಪಾಟೀಲ, ಬಿಇಒ ಆರ್.ಎಸ್. ಬುರಡಿ, ಪುರಸಭೆ ಅಧ್ಯಕ್ಷೆ ಗಂಗಮ್ಮ ಫಕ್ಕೀರಸ್ವಾಮಿಮಠ ಮುಂತಾದವರು ಮಾತನಾಡಿದರು. ತಾಪಂ ಅಧ್ಯಕ್ಷೆ ಸುನಂದಾ ಬಿದರಳ್ಳಿ, ಪಪಂ ಉಪಾಧ್ಯಕ್ಷೆ ಮಿನಾಕ್ಷಿ ತಳವಾರ, ಗೂಳಪ್ಪ ಕರಿಗಾರ, ಸಂತೋಷ ಕುರಿ, ಬುಡನಶ್ಯಾ ಮಕಾನದಾರ, ತಾಲೂಕು ಕಸಾಪ ಅಧ್ಯಕ್ಷ ಕೆ.ಎ. ಬಳಿಗೇರ, ಸುರೇಶ ಅಕ್ಕಿ, ಮುತ್ತು ಮಜ್ಜಗಿ, ಯಲ್ಲಪ್ಪ ಇಂಗಳಗಿ, ಮಹಾಂತೇಶ ಕಲ್ಲಪ್ಪನವರ, ತಾಪಂ ಕಾರ್ಯನಿರ್ವಾಹಕ ಅಧಿಕಾರಿ, ಪಿಡಬ್ಲ್ಯುಡಿ, ಜಿಪಂ, ಸಮಾಜ ಕಲ್ಯಾಣ, ಶಿಶು ಅಭಿವೃದ್ಧಿ ಮತ್ತಿತರ ಇಲಾಖೆ ಅಧಿಕಾರಿಗಳು ಇದ್ದರು. ಎಸ್.ಬಿ. ಕೋರಿಶೆಟ್ಟರ ಸ್ವಾಗತಿಸಿದರು. ಎಂ.ಕೆ. ಲಮಾಣಿ ನಿರೂಪಿಸಿ, ವಂದಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

