ಸಮೃದ್ಧ ಕನ್ನಡ ನಾಡು ಕಟ್ಟಲು ಸನ್ನದ್ಧ
ಗದಗ: ರಾಜ್ಯದ ಸರ್ವತೋಮುಖ ಅಭಿವೃದ್ಧಿಯ ಮೂಲಕ ಚಲುವ ಕನ್ನಡ ನಾಡು ಕಟ್ಟಲು ಸರ್ಕಾರ ಸನ್ನದ್ಧವಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಚ್.ಕೆ. ಪಾಟೀಲ ಹೇಳಿದರು.
ಅವರು ಶುಕ್ರವಾರ ಜಿಲ್ಲಾ ಕ್ರೀಡಾಂಗಣದಲ್ಲಿ ಜಿಲ್ಲಾಡಳಿತದ ವತಿಯಿಂದ ಆಯೋಜಿಸಲಾಗಿದ್ದ 58ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಧ್ವಜಾರೋಹಣ ನೆರವೇರಿಸಿ, ಗೌರವ ರಕ್ಷೆ ಸ್ವೀಕರಿಸಿ ಮಾತನಾಡಿದರು. ಹಸಿವು ಮುಕ್ತ ರಾಜ್ಯ ನಿರ್ಮಾಣಕ್ಕೆ ಸರ್ಕಾರ ಈಗಾಗಲೇ ಅನ್ನಭಾಗ್ಯ ಯೋಜನೆ, ವಿದ್ಯಾರ್ಥಿಗಳಿಗಾಗಿ ಕ್ಷೀರಭಾಗ್ಯ, ಸಾಲ ಮುಕ್ತ ಯುವ ಸಮಾಜ ನಿರ್ಮಾಣಕ್ಕೆ ಆದ್ಯತೆ, ಯುವಕರಲ್ಲಿ ಸ್ವಯಂ ಉದ್ಯೋಗ ಸೃಷ್ಟಿಗೆ ವಿಶೇಷ ಒತ್ತು, ಗ್ರಾಮೀಣ ಭಾಗದಲ್ಲಿ 2 ಲಕ್ಷ ಉದ್ಯೋಗ ಸೃಷ್ಟಿಗೆ ಸರ್ಕಾರ ರು. 105 ಕೋಟಿ ಯೋಜನೆ ರೂಪಿಸಿದೆ. ಶೋಷಿತ ವರ್ಗದ ವಿದ್ಯಾರ್ಥಿಗಳು ಹಾಸ್ಟೆಲ್ ಸೌಲಭ್ಯಗಳಿಂದ ವಂಚಿತರಾದ ವಿದ್ಯಾರ್ಥಿಗಳಿಗೆ ಪ್ರತಿ ತಿಂಗಳು ರು. 1500 ನೀಡುವ ವಿನೂತನ ಯೋಜನೆ ಜಾರಿಗೆ ತರುವ ಮೂಲಕ ಗ್ರಾಮೀಣ ಬದುಕಿನ ಗುಣಮಟ್ಟ ಹೆಚ್ಚಿಸಲು ಸರ್ಕಾರ ಗಂಭೀರ ಚಿಂತನೆ ನಡೆಸಿದೆ. ರಾಜ್ಯದ 56 ಲಕ್ಷ ಕುಟುಂಬಗಳು ಇಂದಿಗೂ ಶೌಚಾಲಯ ವ್ಯವಸ್ಥೆಯಿಂದ ದೂರ ಉಳಿದಿದ್ದು, ಸರ್ಕಾರ ಆದ್ಯತೆಯ ಮೇರೆಗೆ ಎಲ್ಲಾ ಕುಟುಂಬಗಳಿಗೆ ಶೌಚಾಲಯ ಸಹಿತ ಉತ್ತಮ ಗುಣಮಟ್ಟ ಸ್ನಾನಗೃಹ ವ್ಯವಸ್ಥೆ ಕಲ್ಪಿಸಲು ಸರ್ಕಾರ ಚಿಂತನೆ ನಡೆಸಿದೆ. ಗ್ರಾಮೀಣ ಜನರ ದೈನಂದಿನ ಜೀವನ ಸುಗಮಗೊಳಿಸುವ ನಿಟ್ಟಿನಲ್ಲಿ ಮೂಲಭೂತ ಸೌಕರ್ಯ ಒದಗಿಸಲು ಪ್ರಾಧಾನ್ಯತೆ ನೀಡಿದ್ದು, ಅದಕ್ಕಾಗಿ 15 ಅಂಶಗಳನ್ನು ಒಳಗೊಂಡಿರುವ ಯೋಜನೆಯನ್ನು ಸದ್ಯದಲ್ಲಿಯೇ ರಾಜ್ಯದಲ್ಲಿ ಪರಿಚಯಿಸಲಾಗುತ್ತಿದೆ. ರಾಜ್ಯ ಸರ್ಕಾರ ಈಗಾಗಲೇ ಮಹಾಜನ ವರದಿಯೇ ಅಂತಿಮ, ಇಲ್ಲವೇ ಸದ್ಯದ ಸ್ಥಿತಿಯೇ ಮುಂದುವರಿಯಬೇಕು ಎಂಬ ಆಗ್ರಹವನ್ನು ಕೇಂದ್ರ ಸರ್ಕಾರಕ್ಕೆ ಮಾಡಿದ್ದು, ಕನ್ನಡಿಗರ ಭಾವನೆಗಳಿಗೆ ಯಾವುದೇ ಧಕ್ಕೆ ಬರದ ರೀತಿಯಲ್ಲಿ ನಮ್ಮ ಸರ್ಕಾರ ಕಾರ್ಯ ನಿರ್ವಹಿಸಲಿದೆ ಎಂದರು.
ಕಾರ್ಯಕ್ರಮ ಪೂರ್ವದಲ್ಲಿ ಜಿಲ್ಲಾ ಪೊಲೀಸ್ ಇಲಾಖೆ ವಿವಿಧ ಶಾಲಾ ಕಾಲೇಜು ವಿದ್ಯಾರ್ಥಿಗಳಿಂದ ಪಥ ಸಂಚಲನದ ವಂದನೆ ಸ್ವೀಕರಿಸಿದರು. ನಂತರ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸಾಧಕರನ್ನು ಸನ್ಮಾನಿಸಲಾಯಿತು. ಮಾಜಿ ಸಚಿವ ಎಸ್.ಎಸ್. ಪಾಟೀಲ, ಮಾಜಿ ಶಾಸಕ ಡಿ.ಆರ್.ಪಾಟೀಲ, ಜಿಪಂ ಉಪಾಧ್ಯಕ್ಷ ರಮೇಶ ಮುಂದಿನಮನಿ, ತಾಪಂ ಅಧ್ಯಕ್ಷ ಹನುಮಪ್ಪ ಇಂಗಳಹಳ್ಳಿ, ಜಿಲ್ಲಾಧಿಕಾರಿ ಎನ್.ಎಸ್. ಪ್ರಸನ್ನಕುಮಾರ, ಎಸ್ಪಿ ಡಾ. ಎಸ್.ಡಿ. ಶರಣಪ್ಪ, ಜಿಪಂ ಸಿಇಒ ವೀರಣ್ಣ ತುರಮರಿ, ಉಪವಿಭಾಗಾಧಿಕಾರಿ ಐ.ಜಿ. ಗದ್ಯಾಳ, ತಹಸೀಲ್ದಾರ್ ಜಯಶ್ರೀ ಶಿಂತ್ರೆ ಸೇರಿದಂತೆ ಹಿರಿಯ ಅಧಿಕಾರಿಗಳು ಸ್ಥಳೀಯ ಸಂಸ್ಥೆಗಳ ಸದಸ್ಯರು ನಗರದ ಗಣ್ಯರು ಪಾಲ್ಗೊಂಡಿದ್ದರು. ಶಿವಾನಂದ ಗಿಡ್ನಂದಿ, ಗೀತಾಂಜಲಿ ಗೌಡರ ನಿರೂಪಿಸಿದರು.
ಆಕರ್ಷಕ ಮರವಣಿಗೆ: ಶುಕ್ರವಾರ ಬೆಳಗ್ಗೆ ನಗರಸಭೆ ಕಾಲೇಜು ಮೈದಾನದಿಂದ ತಾಯಿ ಭುವನೇಶ್ವರಿಯ ಭಾವಚಿತ್ರದ ಮೆರವಣಿಗೆಗೆ ಚಾಲನೆ ನೀಡಲಾಯಿತು. ಶಾಲಾ ಕಾಲೇಜು ವಿದ್ಯಾರ್ಥಿಗಳು ಹಾಗೂ ವಿವಿಧ ಸ್ತದ್ಧ ಚಿತ್ರಗಳು ಹಾಗೂ ಕಲಾ ತಂಡಗಳು ಪಾಲ್ಗೊಂಡಿದ್ದ ಮೆರವಣಿಗೆ ನಗರದ ಪ್ರಮುಖ ಬೀದಿಗಳಲ್ಲಿ ಸಂಚರಿಸಿ ಜಿಲ್ಲಾ ಕ್ರೀಡಾಂಗಣಕ್ಕೆ ತಲುಪಿತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

