ರಕ್ತದಾನ: ಯುವಕರಿಗೆ ಕರೆ
ಕನ್ನಡಪ್ರಭ ವಾರ್ತೆ, ಗದಗ, ಅ. 1
ದಾನಗಳಲ್ಲಿಯೇ ರಕ್ತದಾನ ಬಹಳಷ್ಟು ಪವಿತ್ರದಾನವಾಗಿದೆ. ಈ ನಿಟ್ಟಿನಲ್ಲಿ ಯುವ ಪೀಳಿಗೆ ಸ್ವಯಂ ಪ್ರೇರಿತವಾಗಿ ರಕ್ತದಾನ ಮಾಡಲು ಮುಂದಾಗಬೇಕು ಎಂದು ಜಿಲ್ಲಾಧಿಕಾರಿ ಎನ್.ಎಸ್. ಪ್ರಸನ್ನಕುಮಾರ ಹೇಳಿದರು.
ಅವರು ಜಿಲ್ಲಾ ಆಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಏಡ್ಸ್ ತಡೆಗಟ್ಟುವಿಕೆ ಮತ್ತು ನಿಯಂತ್ರಣ ಘಟಕ, ಜಿಲ್ಲಾ ವಾರ್ತಾ ಇಲಾಖೆ, ಜಿಲ್ಲಾ ರೆಡ್ಕ್ರಾಸ್, ಐಎಂಎ ರಕ್ತಭಂಡಾರ ಹಾಗೂ ವಿವಿಧ ಸಂಘಟನೆಗಳ ಸಂಯುಕ್ತ ಆಶ್ರಯದಲ್ಲಿ ಮಂಗಳವಾರ ನಗರದ ಎಚ್.ಸಿ.ಇ.ಎಸ್. ಕಲಾ, ವಾಣಿಜ್ಯ ಮತ್ತು ವಿಜ್ಞಾನ ಮಹಾವಿದ್ಯಾಲಯದಲ್ಲಿ ನಡೆದ ಜಿಲ್ಲಾ ಮಟ್ಟದ ಸ್ವಯಂ ಪ್ರೇರಿತ ರಕ್ತದಾನ ದಿನಾಚರಣೆಯನ್ನು ಉದ್ಘಾಟಿಸಿ ಮಾತನಾಡಿದರು.
ಸಮಾಜದಲ್ಲಿ ರಕ್ತದ ಮಹತ್ವ ಸಾರುವ ಕಾರ್ಯ ನಿರಂತರವಾಗಿ ಸಾಗಬೇಕಿದ್ದು, ಕೃತಕ ರಕ್ತ ಸೃಷ್ಟಿಗೆ ಸಾಧ್ಯತೆಗಳಿಲ್ಲ ಎನ್ನುವುದು ಜನಸಾಮಾನ್ಯನಲ್ಲಿ ಮನವರಿಕೆಯಾಗಬೇಕಿದೆ. ವಿದ್ಯಾರ್ಥಿಗಳು ರಕ್ತದಾನ ಹಾಗೂ ಅದರ ಅವಶ್ಯಕತೆಯ ಬಗ್ಗೆ ಜನಸಾಮಾನ್ಯರಲ್ಲಿ ಜಾಗೃತಿ ಮೂಡಿಸುವ ಕಾರ್ಯಕ್ಕೆ ಮುಂದಾಗಬೇಕು. ನಮ್ಮ ಆರೋಗ್ಯಕ್ಕೆ ಪೂರಕವಾಗಿ ಮೂಲಭೂತ ಅವಶ್ಯಕತೆಗಳನ್ನು ಈಡೇರಿಸುತ್ತಿರುವ ಪ್ರಕೃತಿದತ್ತ ಕೊಡುಗೆಗಳಾದ ಸೂರ್ಯ, ಭೂಮಿ, ಜಲದಂತಹ ಅಮೂಲ್ಯ ಸಂಪತ್ತಿನ ಉಳಿವಿಕೆಗೆ ಹಾಗೂ ಸದ್ಬಳಕೆಗೆ ಎಲ್ಲರೂ ಪ್ರಾಮುಖ್ಯತೆ ನೀಡಬೇಕು ಎಂದರು.
ಇದೇ ಸಂದರ್ಭದಲ್ಲಿ ರಕ್ತದಾನಿಗಳನ್ನು ಸನ್ಮಾನಿಸಲಾಯಿತು. ರಕ್ತದಾನ ದಿನಾಚರಣೆ ಅಂಗವಾಗಿ ವಿದ್ಯಾರ್ಥಿಗಳಿಗೆ ಹಮ್ಮಿಕೊಂಡ ವಿವಿಧ ಸ್ಪರ್ಧೆಯ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಿಸಲಾಯಿತು. ಬೆಳಗ್ಗೆ ನಗರದ ಮುನಸಿಪಲ್ ಕಾಲೇಜು ಮೈದಾನದಿಂದ ಆಯೋಜಿಸಲಾದ ಜಾಗೃತಿ ಜಾಥಾಕ್ಕೆ ಗದಗ-ಬೆಟಗೇರಿ ನಗರಸಭೆ ಸದಸ್ಯ ಶ್ರೀನಿವಾಸ ಹುಯಿಲಗೋಳ ಚಾಲನೆ ನೀಡಿದರು. ಜಾಗೃತಿ ಘೋಷಣೆಯೊಂದಿಗೆ ಜಾಥಾ ನಗರದ ಪ್ರಮುಖ ಬೀದಿಗಳಲ್ಲಿ ಸಂಚರಿಸಿ ರಕ್ತದಾನ ಜಾಗೃತಿಯನ್ನುಂಟು ಮಾಡಿತು.
ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಆರ್.ಕೆ. ಹಬೀಬ ಅಧ್ಯಕ್ಷತೆ ವಹಿಸಿದ್ದರು. ಅತಿಥಿಗಳಾಗಿ ಡಾ. ಆರ್.ಟಿ. ಪವಾಡಶೆಟ್ಟರ, ಜಿಲ್ಲಾ ವೈದ್ಯಾಧಿಕಾರಿ ಡಾ. ಡಿ.ಬಿ.ಚನ್ನಶೆಟ್ಟಿ ಸೇರಿದಂತೆ ಆರೋಗ್ಯ ಇಲಾಖೆ ಅಧಿಕಾರಿಗಳು, ಮಹಾವಿದ್ಯಾಲಯದ ಸಿಬ್ಬಂದಿ ಹಾಗೂ ವಿದ್ಯಾರ್ಥಿ, ವಿದ್ಯಾರ್ಥಿನಿಯರು ಪಾಲ್ಗೊಂಡಿದ್ದರು. ಪ್ರಾ. ಉಮೇಶ ಬಾರಕೇರ ಸ್ವಾಗತಿಸಿದರು. ಡಿ.ಜಿ.ಜೋಗಣ್ಣವರ ನಿರೂಪಿಸಿ, ವಂದಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

