ಗದಗ

ವಿದ್ಯಾರ್ಥಿಗಳಿಗೆ ವಿನಯವೇ ಭೂಷಣ: ಶಾಸಕ ದೊಡ್ಡಮನಿ

Published On :

ಶಿರಹಟ್ಟಿ: ವಿದ್ಯಾರ್ಥಿಗಳು ನಿರಂತರ ಅಧ್ಯಯನ ಶೀಲರಾಗಬೇಕು. ವಿದ್ಯೆ ಜತೆಗೆ ವಿನಯ ಬೆಳೆಸಿಕೊಂಡಲ್ಲಿ ಜೀವನದಲ್ಲಿ ಉನ್ನತ ಗುರಿ ಹೊಂದಲು ಸಾಧ್ಯ ಎಂದು ಶಾಸಕ ರಾಮಕೃಷ್ಣ ದೊಡ್ಡಮನಿ ಅಭಿಪ್ರಾಯ ಪಟ್ಟರು.
ಪಟ್ಟಣದ ಜ. ಫಕೀರೇಶ್ವರ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಆವರಣದಲ್ಲಿ ಶನಿವಾರ ಏರ್ಪಡಿಸಿದ್ದ 2013-14ನೇ ಸಾಲಿನ ಕ್ರೀಡಾ, ಸಾಂಸ್ಕೃತಿಕ ಹಾಗೂ ಎನ್ನೆಸ್ಸೆಸ್ ಚಟುವಟಿಕೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ವಿದ್ಯಾರ್ಥಿಗಳ ಶೈಕ್ಷಣಿಕ ಅಭಿವೃದ್ಧಿ ಹಾಗೂ ಉನ್ನತ ಶಿಕ್ಷಣಕ್ಕಾಗಿ ಸರ್ಕಾರ ಹತ್ತು ಹಲವು ಯೋಜನೆಗಳನ್ನು ಜಾರಿಗೆ ತಂದಿದೆ. ಸಕಲ ಸೌಕರ್ಯಗಳ ಹಾಗೂ ಯೋಜನೆಗಳ ಲಾಭ ಪಡೆದು ವಿದ್ಯಾರ್ಥಿಗಳು ಮುಂದೆ ಬರಬೇಕು. ರಾಜ್ಯದ ಬಹುತೇಕ ಗ್ರಾಮೀಣ ಪ್ರದೇಶಗಳಲ್ಲಿ ಬಡತನ ರೇಖೆಗಿಂತ ಕೆಳಗಿರುವ ಹಾಗೂ ರೈತರ ಮಕ್ಕಳು ಸೇರಿ ಶೇ. 40ರಷ್ಟು ಜನ ಅನಕ್ಷರಸ್ಥರಾಗಿದ್ದಾರೆ. ಇಂದಿನ ಮಕ್ಕಳೇ ನಾಡಿನ ಭವಿಷ್ಯದ ರೂವಾರಿಗಳು. ಅಂಥ ಮಕ್ಕಳನ್ನು ತಾತ್ಕಾಲಿಕವಾದ ತೊಂದರೆ ನಿವಾರಿಸಿಕೊಳ್ಳಲು ದುಡಿಮೆಗೆ ನೂಕಿ ಶಿಕ್ಷಣದಿಂದ ವಂಚಿತರನ್ನಾಗಿ ಮಾಡುವುದು ಅಕ್ಷಮ್ಯ ಅಪರಾಧ. ಮಕ್ಕಳಿಗೆ ಉತ್ತಮ ಶಿಕ್ಷಣ ನೀಡಲು ಎಲ್ಲರೂ ಪಣ ತೊಡಬೇಕು ಎಂದರು.
ಜಿಲ್ಲಾ ನೋಡಲ್ ಅಧಿಕಾರಿ ಎಸ್.ಎಫ್. ಸಿದ್ನೆಕೊಪ್ಪ ಮಾತನಾಡಿ, ಕೇವಲ ಅಂಕಪಟ್ಟಿ, ಪ್ರಮಾಣ ಪತ್ರ ಹೊಂದುವ ಉದ್ದೇಶದಿಂದ ಶಿಕ್ಷಣ ಪಡೆಯಬಾರದು. ಸರ್ವಾಂಗೀಣ ವ್ಯಕ್ತಿತ್ವ ರೂಪಿಸಿಕೊಳ್ಳುವ ಶಿಕ್ಷಣ ಪಡೆಯಲು ವಿದ್ಯಾರ್ಥಿಗಳು ಮುಂದಾಗಬೇಕು. ವಿದ್ಯಾರ್ಥಿಗಳು ನಿರ್ದಿಷ್ಟ ಗುರಿ ಹೊಂದಿ ಅಭ್ಯಸಿಸುವುದರಿಂದ ಜೀವನದಲ್ಲಿ ಮಹತ್ತರ ಸಾಧನೆ ಮಾಡಲು ಸಾಧ್ಯ. ಪದವಿ ಜತೆಗೆ ಕಂಪ್ಯೂಟರ್ ಜ್ಞಾನ ಪಡೆಯುವುದು ಇಂದಿನ ಅಗತ್ಯವಾಗಿದೆ ಎಂದರು.
ಪಪಂ ಸದಸ್ಯ ಗೂಳಪ್ಪ ಕರಿಗಾರ, ಸಂತೋಷ ಕುರಿ, ಕಾಲೇಜಿನ ಪ್ರಾಚಾರ್ಯ ವಿ.ಪಿ. ಸಮೋರೆಕರ ಮಾತನಾಡಿದರು. ಪಪಂ ಅಧ್ಯಕ್ಷ ನಾಗರಾಜ ಲಕ್ಕುಂಡಿ, ಸದಸ್ಯ ಚಾಂದಸಾಬ ಮುಳಗುಂದ, ಜಿಲ್ಲಾ ಕಾಂಗ್ರೆಸ್ ಪಕ್ಷದ ಉಪಾಧ್ಯಕ್ಷ ವೈ.ಎಸ್. ಪಾಟೀಲ, ಮಂಜುನಾಥ ಘಂಟಿ, ದೇವಪ್ಪ ಲಮಾಣಿ, ಬಸವರಾಜ ಮುಂಡವಾಡ ಉಪಸ್ಥಿತರಿದ್ದರು. ಸಾಂಸ್ಕೃತಿಕ ವಿಭಾಗದ ಸಂಚಾಲಕಿ ಅನುಪಮಾ ಭಾತಖಂಡೆ ಸ್ವಾಗತಿಸಿದರು. ಎನ್‌ಎಸ್‌ಎಸ್ ಅಧಿಕಾರಿ ಎಸ್.ಎಚ್. ಬಡೇಖಾನ್ನವರ ನಿರೂಪಿಸಿದರು. ಕ್ರೀಡಾ ವಿಭಾಗದ ಸಂಚಾಲಕ ಪಂಪಾಪತಿರೆಡ್ಡಿ ಪಾಟೀಲ ವಂದಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.