ಅಸಮರ್ಪಕ ಕುಡಿವ ನೀರು: ಅಧಿಕಾರಿ ತರಾಟೆಗೆ
ಕನ್ನಡಪ್ರಭ ವಾರ್ತೆ, ನರಗುಂದ, ಅ. 6
ತಾಲೂಕಿನ ಭೈರನಹಟ್ಟಿ ಗ್ರಾಮದ ಮಾರುತಿ ದೇವಸ್ಥಾನದಲ್ಲಿ ಶನಿವಾರ ನಡೆದ ಜನಸ್ಪಂದನ ಸಭೆಯಲ್ಲಿ ಗ್ರಾಮದ ಕೆರೆಯಲ್ಲಿ ಶುದ್ಧ ಕುಡಿವ ನೀರು ಇಲ್ಲ. ಇದರಿಂದ ಗ್ರಾಮಸ್ಥರು ಅನೇಕ ರೋಗಗಳಿಗೆ ತುತ್ತಾಗಬೇಕಾಗಿದ್ದು, ಸಮರ್ಪಕ ಕುಡಿವ ನೀರು ಪೂರೈಕೆಗೆ ಅಗತ್ಯ ಕ್ರಮ ಕೈಗೊಳ್ಳುವಂತೆ ಗ್ರಾಪಂ ಅಧಿಕಾರಿ ಮತ್ತು ಆಡಳಿತ ಮಂಡಳಿಯವರನ್ನು ಸಾರ್ವಜನಿಕರು ತರಾಟೆಗೆ ತಗೆದುಕೊಂಡ ಘಟನೆ ಜರುಗಿತು.
ಗ್ರಾಮದಲ್ಲಿ ಸಾರ್ವಜನಿಕರಿಗೆ ಬೇಕಾದ ಶುದ್ಧ ನೀರು ಇಲ್ಲದೇ ಸಂಕಷ್ಟ ಎದುರಿಸುವ ಪರಿಸ್ಥಿತಿ ನಿರ್ಮಾಣವಾಗಿದೆ. ಈ ಕುರಿತು ಹಲವು ಬಾರಿ ಗ್ರಾಪಂ ಸಿಬ್ಬಂದಿಗೆ ತಿಳಿಸಿದರೂ ಕೂಡ ಇಲ್ಲಿಯವರೆಗೆ ಯಾವುದೇ ರೀತಿ ಪರಿಹಾರ ಕಾರ್ಯ ಕೈಗೊಳ್ಳಲಾಗಿಲ್ಲ. ಕಳೆದ 1 ವರ್ಷದ ಹಿಂದೆ ಗ್ರಾಮದಲ್ಲಿ ನಿರ್ಮಾಣವಾಗಿರುವ ಶುದ್ಧ ನೀರಿನ ಘಟಕ ಪ್ರಾರಂಭಿಸದಿರುವುದರಿಂದ ಲಕ್ಷಾಂತರ ಹಣ ಖರ್ಚು ಮಾಡಲಾಗಿರುವ ಶುದ್ಧ ನೀರಿನ ಯಂತ್ರಗಳು ಇಂದು ತುಕ್ಕು ಹಿಡಿದಿದೆ. ಈ ಕುರಿತು ಹಲವು ಬಾರಿ ಮನವಿ ಸಲ್ಲಿಸಿದರೂ ಪ್ರಯೋಜನವಾಗಿಲ್ಲ. ಈ ಕುರಿತು ಗ್ರಾಪಂ ಸಿಬ್ಬಂದಿಗಳನ್ನು ಕೇಳಿದರೆ ಗ್ರಾಮದಲ್ಲಿ ಕಾಂಕ್ರೀಟ್ ರಸ್ತೆ ಕಾಮಗಾರಿಯಾದ ಬಳಿಕ ನಲ್ಲಿಗಳಿಗೆ ಸಮರ್ಪಕ ನೀರು ಪೂರೈಕೆ ಮಾಡಲಾಗುವುದು ಎಂದು ಹೇಳಿಕೆ ನೀಡುತ್ತಿದ್ದಾರೆ. ಈ ಕುರಿತು ಸೂಕ್ತ ಕ್ರಮ ಕೈಗೊಳ್ಳಬೇಕು. ಇಲ್ಲದಿದ್ದಲ್ಲಿ ಮುಂದಿನ ದಿನಗಳಲ್ಲಿ ಉಗ್ರ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು ಎಂದು ಗ್ರಾಮಸ್ಥರು ಎಚ್ಚರಿಸಿದರು.
ಗ್ರಾಮದಲ್ಲಿ ಮಹಿಳೆಯರು ಹಾಗೂ ಪುರುಷರಿಗೆ ಅಗತ್ಯ ಪ್ರಮಾಣದಲ್ಲಿ ಒಂದೂ ಶೌಚಾಲಯವಿಲ್ಲ. ಈಚೆಗೆ ಗ್ರಾಮದಲ್ಲಿ 1 ಸಾರ್ವಜನಿಕ ಶೌಚಾಲಯ ನಿರ್ಮಿಸಲಾಗಿದ್ದು, ಅದೂ ಈಗ ದುರಸ್ತಿಯಾಗಿದೆ. ಇದೇ ರೀತಿ ಗ್ರಾಮದಲ್ಲಿ ಹಲವು ಮೂಲ ಸೌಲಭ್ಯಗಳ ಕೊರತೆ ಹೆಚ್ಚಾಗಿದ್ದು, ಶೀಘ್ರ ದುರಸ್ತಿ ಕಾರ್ಯ ಕೈಗೊಳ್ಳುವಂತೆ ಸೂಚಿಸಿದರು. ಬಳಿಕ ಉಪ ತಹಸೀಲ್ದಾರ್ ಪಿ.ಎಂ. ದೊಡ್ಡಮನಿ ಮಾತನಾಡಿ, ಗ್ರಾಮದಲ್ಲಿನ ಮೂಲ ಸೌಲಭ್ಯಗಳ ಪೂರೈಕೆಗೆ ಆದ್ಯತೆ ನೀಡಲಾಗುವುದು ಎಂದು ಭರವಸೆ ನೀಡಿದರು. ಈ ಸಂದರ್ಭ ಗ್ರಾಪಂ ಅಧ್ಯಕ್ಷೆ ಹನುಮವ್ವ ಮಾದರ, ಉಪಾಧ್ಯಕ್ಷೆ ಪರವ್ವ ಐನಾಪುರ, ಸದಸ್ಯ ಹನುಮಂತ ಐನಾಪುರ, ವೈ.ಬಿ. ಮೊರಬದ, ಹನಮಂತ ಸಂಗಿಟಿ, ರೇಣವ್ವ ಮೇಟಿ, ಶಿರಸ್ತೇದಾರ್ ಪಿ.ಎಸ್. ಉಳ್ಳಾಗಡ್ಡಿ, ಎಪಿಎಂಸಿ ಕಾರ್ಯದರ್ಶಿ ಬಿ.ಆರ್. ಬುರಡಿ, ಹೆಸ್ಕಾಂ ಅಧಿಕಾರಿ ಸಂಗ್ರಿ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಹಾಗೂ ಗ್ರಾಮಸ್ಥರು ಪಾಲ್ಗೊಂಡಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

