ಗದಗ

ಗ್ರಾಮೀಣ ಪ್ರದೇಶದ ಅಭಿವೃದ್ಧಿಗೆ ಆದ್ಯತೆ

Published On :

ರೋಣ: ರಸ್ತೆ, ಕುಡಿಯುವ ನೀರು, ವಿದ್ಯುತ್, ಚರಂಡಿ ಸೇರಿದಂತೆ ಅಗತ್ಯ ಮೂಲ ಸೌಲಭ್ಯಗಳನ್ನು ಸಮರ್ಪಕವಾಗಿ ದೊರಕಿಸುವುದರ ಮೂಲಕ ಗ್ರಾಮೀಣ ಪ್ರದೇಶದ ಸಮಗ್ರ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ ನೀಡಲಾಗುವುದು ಎಂದು ಶಾಸಕ ಜಿ.ಎಸ್. ಪಾಟೀಲ ಹೇಳಿದರು.
ಅವರು ಶನಿವಾರ ಸಂಜೆ ತಾಲೂಕಿನ ಹಿರೇಹಾಳ ಗ್ರಾಮದಲ್ಲಿ ಭೂಸೇನಾ ನಿಗಮ, ನಾಗಾರ್ಜುನ ಕಂಪನಿ, ಶಿಕ್ಷಣ ಇಲಾಖೆ ಇವರುಗಳ ಆಶ್ರಯದಲ್ಲಿ ಜರುಗಿದ ವಿವಿಧ ಕಾಮಗಾರಿಗಳಿಗೆ ಭೂಮಿಪೂಜೆ ಹಾಗೂ ಅಭಿನಂದನಾ ಸಮಾರಂಭದಲ್ಲಿ ಮಾತನಾಡಿದರು.
ರಾಷ್ಟ್ರೀಯ ಮಾಧ್ಯಮಿಕ ಶಿಕ್ಷಣ ಅಭಿಯಾನ ಯೋಜನೆ ಅನುದಾನದಲ್ಲಿ ರೋಣ ಮತಕ್ಷೇತ್ರ ವ್ಯಾಪ್ತಿಯ ವಿವಿಧ ಗ್ರಾಮಗಳಲ್ಲಿ ನೂತನ ಶಾಲಾ ಕೊಠಡಿ ನಿರ್ಮಾಣಕ್ಕೆ ಈಗಾಗಲೇ ರು. 37 ಕೋಟಿ ಬಿಡುಗಡೆ ಮಾಡಿಸಲಾಗಿದೆ. ಸದ್ಯದಲ್ಲಿಯೇ ಅಗತ್ಯವಿದ್ದ ಗ್ರಾಮಗಳಲ್ಲಿ ಶಾಲಾ ಕೊಠಡಿಗಳನ್ನು ನಿರ್ಮಿಸಲಾಗುವುದು. ಪ್ರತಿಯೊಬ್ಬರಿಗೂ ಶಿಕ್ಷಣ ದೊರಕಬೇಕು ಎಂಬ ಉದ್ದೇಶದಿಂದ ಹಾಗೂ ಶೈಕ್ಷಣಿಕ ಕ್ಷೇತ್ರದ ಪ್ರಗತಿಗೆ ಅನೇಕ ಯೋಜನೆಗಳನ್ನು ಹಮ್ಮಿಕೊಳ್ಳಲಾಗಿದ್ದು, ಅವುಗಳನ್ನು ಹಂತ ಹಂತವಾಗಿ ಅನುಷ್ಠಾನಗೊಳಿಸಲಾಗುವುದು ಎಂದರು.  ರೋಣ ತಾಲೂಕಿನ ಮಗಳಿ ಗ್ರಾಮದಲ್ಲಿ ರಾಷ್ಟ್ರೀಯ ಮಾಧ್ಯಮಿಕ ಶಿಕ್ಷಣ ಅಭಿಯಾನ ಯೋಜನೆಯಲ್ಲಿ ರು. 76 ಲಕ್ಷಗಳ ಅನುದಾನದಲ್ಲಿ 10 ಕೊಠಡಿ ಹಾಗೂ ಸುಸಜ್ಜಿತ ಮೈದಾನ ನಿರ್ಮಿಸಲಾಗುವುದು. ಶಾಲಾ ಕೊಠಡಿ ನಿರ್ಮಾಣ ಕಾಮಗಾರಿಯು ಉತ್ತಮ ಗುಣಮಟ್ಟದಿಂದ ಕೂಡಿರಬೇಕು ಎಂದು ಸ್ಥಳದಲ್ಲಿಯೇ ಅಭಿಯಂತರಿಗೆ ಸೂಚಿಸಿದರು. ತಾಲೂಕಿನ ಹಿರೇಹಾಳ ಗ್ರಾಮದಿಂದ ಮಾಡಲಗೇರಿ ಗ್ರಾಮದ ರಸ್ತೆಯನ್ನು ಅಭಿವೃದ್ಧಿಪಡಿಸಿ ಡಾಂಬರೀಕರಣ ಮಾಡಲು ರು. 25ಲಕ್ಷ ಮಂಜೂರು ಮಾಡಲಾಗಿದ್ದು, ಸದ್ಯದಲ್ಲಿಯೇ ಕಾಮಗಾರಿ ಪ್ರಾರಂಭವಾಗಲಿದೆ. ಹಿರೇಹಾಳ ಗ್ರಾಮದ ಪರಿಶಿಷ್ಟ ಪಂಗಡದ ಕಾಲೋನಿಯಲ್ಲಿ ರು. 10 ಲಕ್ಷಗಳಲ್ಲಿ ಸಿಸಿ ರಸ್ತೆ ನಿರ್ಮಿಸಲಾಗುವುದು. ಈ ಕಾಮಗಾರಿಯನ್ನು ಭೂಸೇನಾ ನಿಗಮದವರಿಗೆ ನೀಡಲಾಗಿದೆ. ಹಿರೇಹಾಳದಿಂದ ಹೊಳೆಆಲೂರಿಗೆ ಬಸರಕೋಡ ಮಾರ್ಗವಾಗಿ ಹೋಗುವ ರಸ್ತೆ ಹದಗೆಟ್ಟಿದ್ದು, ಕೂಡಲೇ ರಸ್ತೆ ದುರಸ್ತಿಗೆ ಅನುದಾನ ಮಂಜೂರು ಮಾಡಲಾಗುವುದು ಎಂದರು.  ಬಸವ ಯೋಜನೆಯ ಫಲಾನುಭವಿಗಳಿಗೆ ಆಶ್ರಯ ಮನೆಯ ಪಟ್ಟಾ ಪುಸ್ತಕವನ್ನು ವಿತರಿಸಲಾಯಿತು. ಕೊತಬಾಳ ಅಡವಿಸಿದ್ಧೇಶ್ವರ ಮಠದ ಗಂಗಾಧರ ಶ್ರೀಗಳು ಸಾನ್ನಿಧ್ಯವಹಿಸಿ ಮಾತನಾಡಿದರು.  ಪರಶುರಾಮ ಅಳಗವಾಡಿ, ದಶರಥ ಗಾಣಿಗೇರ, ಪ್ರಭು ಮೇಟಿ, ನಿಂಗಪ್ಪ ಕೆಂಗಾರ, ವಿ.ಆರ್. ಗುಡಿಸಾಗರ, ಅಂದಪ್ಪ ವೀರಾಪುರ, ಗ್ರಾಪಂ ಅಧ್ಯಕ್ಷೆ ಗೀತಾ ಗೌಡರ, ಕಾಸಿಮಸಾಬ್ ಪಿಂಜಾರ, ಭೀಮನಗೌಡ ಗೌಡರ, ವೀರಣ್ಣ ಹರದಾರಿ, ವೀರಣ್ಣ ಶೆಟ್ಟರ, ತಾಪಂ ಸದಸ್ಯ ಬಸನಗೌಡ ಶಿರಗುಂಪಿ, ಬಿಇಒ ಕೆ.ವಿ. ಪಾಟೀಲ, ಅಭಿಯಂತರ ರಮೇಶ ಪತ್ತಾರ, ಶರಣಪ್ಪ ರಾಮನಗೌಡ್ರ ಮುಂತಾದವರು ಉಪಸ್ಥಿತರಿದ್ದರು. ಅಮೃತಗೌಡ ಗೌಡರ ಸ್ವಾಗತಿಸಿದರು. ಸಿದ್ಧನಗೌಡ ಗೌಡರ ನಿರೂಪಿಸಿ, ವಂದಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.