ಯೋಜನೆಗಳ ಅನುಷ್ಠಾನದಲ್ಲಿ ರಾಜ್ಯ ವಿಫಲ
ಗದಗ: ಸಂವಿಧಾನಾತ್ಮಕ ಅನುಮೋದನೆ ಹೊಂದಿದ ಜಿಲ್ಲಾ ಯೋಜನಾ ಸಮಿತಿಯ ನಿರ್ಲಕ್ಷ್ಯದಿಂದಾಗಿ ಕೆಳಹಂತದಲ್ಲಿ ಯೋಜನೆಗಳನ್ನು ಅನುಷ್ಠಾನಗೊಳಿಸುವಲ್ಲಿ ರಾಜ್ಯ ವಿಫಲವಾಗಿದೆ ಎಂದು ಆರ್ಥಿಕ ಮತ್ತು ಸಾಂಖ್ಯಿಕ ಇಲಾಖೆಯ ನಿವೃತ್ತ ಜಂಟಿ ನಿರ್ದೇಶಕ ವೀರಾಶಿವಶಂಕರ ರೆಡ್ಡಿ ಹೇಳಿದರು.
ಅವರು ಬುಧವಾರ ನಗರದ ಕೆ.ಎಚ್. ಪಾಟೀಲ ಸಭಾಭವನದಲ್ಲಿ ಜಿಲ್ಲಾಪಂಚಾಯತ್, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ಇಲಾಖೆ ಸಹಯೋಗದಲ್ಲಿ ಸ್ಥಳೀಯ ಸಂಸ್ಥೆಗಳ ಅಧ್ಯಕ್ಷ, ಉಪಾಧ್ಯಕ್ಷ ಹಾಗೂ ಸದಸ್ಯರು ಮತ್ತು ಗ್ರಾಪಂ ಅಭಿವೃದ್ಧಿ ಅಧಿಕಾರಿಗಳಿಗಾಗಿ ಏರ್ಪಡಿಸಿದ್ದ ಗ್ರಾಮ ಯೋಜನೆ ತಯಾರಿಕೆ ಕುರಿತು 1 ದಿನದ ಕಾರ್ಯಾಗಾರದಲ್ಲಿ ಪ್ರಾತ್ಯಕ್ಷಿಕೆಯ ಮೂಲಕ ತರಬೇತಿ ನೀಡಿದರು. ಜನರ ಜೀವನಮಟ್ಟ ಸುಧಾರಿಸುವ ಯೋಜನೆಗಳು ಜನತೆಯ ಸಹಭಾಗಿತ್ವದಲ್ಲಿ ಜಾರಿಗೊಳಿಸುವ ಕಾರ್ಯ ಪ್ರಾಮಾಣಿಕವಾಗಿ ಜರುಗಬೇಕಾದ ಹಿನ್ನೆಲೆಯಲ್ಲಿ ಪ್ರಕ್ರಿಯೆ ಯಶಸ್ಸಿಗೆ ಯೋಜನಾ ಸಮಿತಿಗಳು ಸಕ್ರಿಯವಾಗಿ ಕಾರ್ಯನಿರ್ವಹಿಸಬೇಕಿದೆ. ಗ್ರಾಮೀಣ ಭಾಗದ ಸಮಸ್ಯೆಗಳಿಂದಾಗಿ ಜನತೆ ವಲಸೆ ಹೋಗುತ್ತಿದ್ದು, ಇದರಿಂದಾಗಿ ಪಟ್ಟಣ ಪ್ರದೇಶಗಳಲ್ಲಿ ಹಲವಾರು ಸಮಸ್ಯೆ ಉದ್ಭವಿಸುತ್ತಿವೆ.
ಕೊಳಚೆ ಪ್ರದೇಶಗಳು ಬೆಳೆಯುತ್ತಾ ಸಾಗಿದ್ದು, ಶೇ. 23 ರಷ್ಟು ಜನರು ಪಟ್ಟಣ ಪ್ರದೇಶದ ಕೊಳಚೆ ಪ್ರದೇಶ ವಾಸಿಗಳಾಗಿದ್ದಾರೆ. ತಲಾ ಆದಾಯ ಆಧರಿಸಿ ಅಭಿವೃದ್ಧಿ ಅಳೆಯುವುದು ಸರಿಯಲ್ಲ. ಜನರ ಆಯ್ಕೆಗಳನ್ನು ವಿಶಾಲಗೊಳಿಸುವ ನಿಟ್ಟಿನಲ್ಲಿ ಶಿಕ್ಷಣ ಮತ್ತು ಆರೋಗ್ಯಕ್ಕೆ ಪ್ರಾಮುಖ್ಯ ನೀಡಿದಾಗ ಮಾನವನ ಅಭಿವೃದ್ಧಿ ಸಾಧ್ಯವಾಗಲಿದೆ. ಮಾನವನ ಅಭಿವೃದ್ಧಿಯಲ್ಲಿ ಗದಗ ಜಿಲ್ಲೆ ಶೇ. 13 ನೇ ಸ್ಥಾನದಲ್ಲಿ ಹಾಗೂ ಶೈಕ್ಷಣಿಕ ಅಭಿವೃದ್ಧಿಯಲ್ಲಿ 23ನೇ ಸ್ಥಾನದಲ್ಲಿದೆ. ಈ ನಿಟ್ಟಿನಲ್ಲಿ ಮಾನವ ಅಭಿವೃದ್ಧಿ ಸೂಚ್ಯಾಂಕದಲ್ಲಿ ಹೆಚ್ಚಳ, ಸಾರ್ವಜನಿಕ ಸೇವೆಗಳ ಗುಣಮಟ್ಟದ ಸುಧಾರಣೆ ಹಾಗೂ ಮೂಲ ಸೌಲಭ್ಯಗಳನ್ನು ಮೇಲ್ದರ್ಜೆಗೇರಿಸುವ ಪ್ರಕ್ರಿಯೆ ನಿರಂತರವಾಗಿ ಜರುಗಬೇಕಿದೆ. ದೂರದೃಷ್ಟಿತ್ವದ ಯೋಜನಾ ಪ್ರಕ್ರಿಯೆಯಿಂದ ಗುರಿ ಸಾಧನೆ ಸಾಧ್ಯವಾಗಲಿದ್ದು, ಶೇ. 40ರಷ್ಟು ಜನರು ಬಡತನ ರೇಖೆಗಿಂತ ಕೆಳಗಿನ ಸ್ಥಿತಿಯಲ್ಲಿ ಬದುಕು ಸಾಗಿಸುತ್ತಿದ್ದು, ಜೀವನಮಟ್ಟ ಸುಧಾರಿಸಲು ಜನಪ್ರತಿನಿಧಿಗಳು, ಅಧಿಕಾರಿಗಳು ಹಾಗೂ ಗ್ರಾಮಸ್ಥರು ಕೈಜೋಡಿಸಬೇಕಿದೆ ಎಂದರು. ರಾಜೀವಗಾಂಧಿ ಗ್ರಾಮೀಣಾಭಿವೃದ್ಧಿ ಸಮಿತಿಯ ಅಧ್ಯಕ್ಷ ಡಿ.ಆರ್.ಪಾಟೀಲ ಪ್ರಾಸ್ತಾವಿಕವಾಗಿ ಮಾತನಾಡಿದರು. ಸಚಿವ ಎಚ್.ಕೆ. ಪಾಟೀಲ, ಶಾಸಕರಾದ ಬಿ.ಆರ್. ಯಾವಗಲ್, ಜಿ.ಎಸ್. ಪಾಟೀಲ, ರಾಮಕೃಷ್ಣ ದೊಡ್ಡಮನಿ, ವಿಪ ಸದಸ್ಯ ಶ್ರೀನಿವಾಸ ಮಾನೆ, ಜಿಪಂ ಅಧ್ಯಕ್ಷ ಎಂ.ಎಸ್. ಪಾಟೀಲ, ರಾಜ್ಯ ಹಿಂದುಳಿದ ವರ್ಗಗಳ ಕೆಪಿಸಿಸಿ ಅಧ್ಯಕ್ಷ ಟಿ. ಈಶ್ವರ, ಜಿಲ್ಲಾಧಿಕಾರಿ ಎನ್.ಎಸ್. ಪ್ರಸನ್ನಕುಮಾರ ಪಾಲ್ಗೊಂಡಿದ್ದರು. ಜಿಲ್ಲೆಯ ಜಿಪಂ ಅಧಿಕಾರಿಗಳು, ಸದಸ್ಯರು, ಸ್ಥಳೀಯ ಸಂಸ್ಥೆಯ ಸದಸ್ಯರು, ಪಿಡಿಒಗಳು ಇದ್ದರು. ಜಿಪಂ ಸಿಇಒ ವೀರಣ್ಣ ತುರಮರಿ ಸ್ವಾಗತಿಸಿದರು. ಗೀತಾಂಜಲಿ ಗೌಡರ ನಿರೂಪಿಸಿದರು.
ಅವೈಜ್ಞಾನಿಕ ಯೋಜನೆ ಮಾರಕ: ಯಾವಗಲ್
ಗದಗ: ಸ್ಥಳೀಯ ಜನರ ಅಗತ್ಯತೆ ಅರಿಯದೇ ಅವೈಜ್ಞಾನಿಕ ಯೋಜನೆಗಳ ಜಾರಿಯಿಂದ ಜನತೆಯ ಆಶೋತ್ತರಗಳಿಗೆ ಮಾರಕವಾಗುತ್ತಿದೆ ಎಂದು ನರಗುಂದ ಶಾಸಕ ಬಿ.ಆರ್. ಯಾವಗಲ್ ಹೇಳಿದರು.
ಸರ್ಕಾರ ಒತ್ತಾಯ ಪೂರ್ವಕವಾಗಿ ಯೋಜನೆಗಳನ್ನು ಜನರ ಮೇಲೆ ಹೇರಿದಂತಾಗುತ್ತಿದೆ. ಹಾಗಾಗಿ ಜನರಿಗಾಗಿ ಯೋಜನೆಗಳನ್ನು ಜಾರಿಗೆ ತರುವುದಕ್ಕಿಂತ ಜನರನ್ನೇ ಯೋಜನೆಯನ್ನಾಗಿ ಮಾಡುವ ಉದ್ದೇಶದಿಂದ ಗ್ರಾಮ ಯೋಜನೆ ತಯಾರಿಸುವ ಕುರಿತು ಕಾರ್ಯಾಗಾರ ಹಮ್ಮಿಕೊಳ್ಳಲಾಗಿದೆ. ಗ್ರಾಮೀಣ ಭಾಗದ ಜನರಿಗೆ ಹೆಚ್ಚಿನ ಸೌಲಭ್ಯಗಳನ್ನು ಒದಗಿಸುವ ನಿಟ್ಟಿನಲ್ಲಿ ಈ ಯೋಜನೆ ಜಾರಿಗೊಳಿಸಲಾಗುತ್ತಿದೆ. ಈ ನಿಟ್ಟಿನಲ್ಲಿ ಎಲ್ಲ ಅಧಿಕಾರಿಗಳು ಪ್ರಾಮಾಣಿಕ ಸೇವೆ ಮಾಡಬೇಕು. ಗ್ರಾಮೀಣ ಭಾಗದ ಜನರ ಆರೋಗ್ಯ ಹಾಗೂ ಆರ್ಥಿಕ ಚಟುವಟಿಕೆ ಸುಧಾರಣೆಯಾದಾಗ ಮಾತ್ರ ಗ್ರಾಮಗಳ ಅಭಿವೃದ್ಧಿ ಸಾಧ್ಯವಾಗುತ್ತದೆ.
ಗ್ರಾಮೀಣ ಪ್ರದೇಶದ ಜನರ ಅಭಿವೃದ್ಧಿಯ ದೃಷ್ಟಿಯಿಂದ ಸರ್ಕಾರ ಸಾಕಷ್ಟು ಅನುದಾನ ನೀಡುತ್ತಿದೆ. ಇನ್ನೂ ಹೆಚ್ಚಿನ ಪ್ರಮಾಣದಲ್ಲಿ ಗ್ರಾಮಗಳ ಅಭಿವೃದ್ಧಿ ಅವಶ್ಯಕತೆಯಿದೆ. ಈ ನಿಟ್ಟಿನಲ್ಲಿ ಜಿಲ್ಲಾ ಹಾಗೂ ತಾಲೂಕು ಮಟ್ಟದಲ್ಲಿ ಕಾರ್ಯಾಗಾರವನ್ನು ಹಮ್ಮಿಕೊಳ್ಳುವ ಮೂಲಕ ಅಭಿಪ್ರಾಯ ಸಂಗ್ರಹಿಸಿ ಗ್ರಾಮಗಳಲ್ಲಿ ಹಮ್ಮಿಕೊಳ್ಳುವ ಅಭಿವೃದ್ಧಿ ಕಾರ್ಯಗಳ ರೂಪುರೇಷೆ ತಯಾರಿಸಲು ಇದು ಸಹಕಾರಿಯಾಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಶಿರಹಟ್ಟಿ ಶಾಸಕ ರಾಮಕೃಷ್ಣ ದೊಡ್ಡಮನಿ ಮಾತನಾಡಿ, ಗ್ರಾಮೀಣ ಭಾಗದಲ್ಲಿನ ಜನರು ಈ ಬಗ್ಗೆ ಜಾಗೃತರಾಗಿ ಸರ್ಕಾರದ ಸೌಲಭ್ಯಗಳನ್ನು ಸದುಪಯೋಗ ಪಡಿಸಿಕೊಂಡು ಆರ್ಥಿಕ, ಸಾಮಾಜಿಕ ಬೆಳವಣಿಗೆಗೆ ಮುಂದಾಗಬೇಕು ಎಂದರು. ವಿಪ ಸದಸ್ಯ ಶ್ರೀನಿವಾಸ ಮಾನೆ ಮಾತನಾಡಿ, ಸ್ಥಳೀಯ ಸಂಸ್ಥೆಗಳಿಗೆ ಶಕ್ತಿ ತುಂಬುವ ಕೆಲಸವನ್ನು ಸಂವಿಧಾನ ಮಾಡಿದೆ. ಈ ಮೂಲಕ ಅಭಿವೃದ್ಧಿ ದೃಷ್ಟಿಯಿಂದ ಕಾರ್ಯಯೋಜನೆಗಳನ್ನು ಹಮ್ಮಿಕೊಳ್ಳುವಲ್ಲಿ ಸ್ಥಳೀಯ ಸಂಸ್ಥೆಗಳಿಗೆ ಹೆಚ್ಚಿನ ಅಧಿಕಾರ ನೀಡಲಾಗಿದೆ. ಆದರೂ ಗ್ರಾಮೀಣ ಪ್ರದೇಶಗಳು ತೃಪ್ತಿಕರ ರೀತಿಯಲ್ಲಿ ಅಭಿವೃದ್ಧಿ ಹೊಂದಲು ಸಾಧ್ಯವಾಗಿಲ್ಲ ಎಂದು ವಿಷಾದ ವ್ಯಕ್ತ ಪಡಿಸಿದರು.
ಜಿಪಂ ಅಧ್ಯಕ್ಷ ಎಂ.ಎಸ್. ಪಾಟೀಲ, ಮಾಜಿ ಶಾಸಕ ಡಿ.ಆರ್. ಪಾಟೀಲ ಮತನಾಡಿದರು. ಆರ್ಥಿಕ ಮತ್ತು ಸಾಂಖ್ಯಿಕ ಇಲಾಖೆಯ ನಿವೃತ್ತ ಜಂಟಿ ನಿರ್ದೇಶಕ ವೀರಾಶಿವಶಂಕರ ರೆಡ್ಡಿ ಗ್ರಾಮ ಯೋಜನಾ ತಯಾರಿಕೆಯ ಕುರಿತು ಪ್ರಾತ್ಯಕ್ಷಿಕೆ ನೀಡಿದರು. ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಚ್.ಕೆ. ಪಾಟೀಲ ಅಧ್ಯಕ್ಷತೆ ವಹಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

