ಗದಗ

ನಾಳೆ ಬೃಹತ್ ಸಾಮೂಹಿಕ ವಿವಾಹ

Published On :

ಗದಗ: ಶ್ರೀರಾಮುಲು ಅಭಿಮಾನಿ ಬಳಗದ ಆಶ್ರಯದಲ್ಲಿ ಅ. 23ರಂದು 555 ಜೋಡಿ ಉಚಿತ ಸಾಮೂಹಿಕ ವಿವಾಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಶ್ರೀರಾಮುಲು ಅಭಿಮಾನಿ ಬಳಗದ ಕಾರ್ಯದರ್ಶಿ ಎಸ್.ಎಚ್. ಶಿವನಗೌಡ್ರ ಹೇಳಿದರು.
ಸೋಮವಾರ ವಿದ್ಯಾದಾನ ಸಮಿತಿ ಮೈದಾನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. 6 ವರ್ಷಗಳಿಂದ ಉಚಿತ ಸರ್ವಧರ್ಮ ಸಾಮೂಹಿಕ ವಿವಾಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗುತ್ತಿದ್ದು, ಈಗಾಗಲೇ 7 ಸಾವಿರಕ್ಕೂ ಅಧಿಕ ಜೋಡಿಗಳ ವಿವಾಹ ಮಾಡಲಾಗಿದೆ. ಪ್ರಸಕ್ತ ವರ್ಷ 555 ಜೋಡಿ ವಿವಾಹವಾಗಲಿದ್ದು, ಇದರಲ್ಲಿ ಅ. 22 ರಂದು 15 ಜೋಡಿ ಮುಸ್ಲಿಂ, ಉಳಿದ 540 ಜೋಡಿ ವಿವಾಹವನ್ನು ಅ. 23ರಂದು ಹಮ್ಮಿಕೊಳ್ಳಲಾಗಿದೆ ಎಂದರು.
ಬಾಲ್ಯ ವಿವಾಹ ತಡೆಗಟ್ಟುವ ನಿಟ್ಟಿನಲ್ಲಿ ತಿಂಗಳಿಂದ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ, ಶಿಶು ಅಭಿವೃದ್ಧಿ ಯೋಜನಾಧಿಕಾರಿ ಪರಿಶೀಲಿಸಿದ ಅರ್ಹರಿರುವ ಹಾಗೂ ತಹಸೀಲ್ದಾರ್ ಅನುಮತಿ ಕೊಟ್ಟಿರುವ ಜೋಡಿಗಳಿಗೆ ಮಾತ್ರ ವಿವಾಹ ಮಾಡಲಾಗುತ್ತಿದೆ ಎಂದು ಹೇಳಿದರು.
ಉತ್ತರ ಕರ್ನಾಟಕದ ಎಲ್ಲ ಜಿಲ್ಲೆಗಳಿಂದ ವಧು-ವರರು ಸಾಮೂಹಿಕ ವಿವಾಹದಲ್ಲಿ ಹೆಸರು ನೋಂದಾಯಿಸಿದ್ದಾರೆ. ಸುಮಾರು 2 ಲಕ್ಷ ಜನ ಸೇರುವ ನಿರೀಕ್ಷೆ ಇದೆ. ಕಾರ್ಯಕ್ರಮದಲ್ಲಿ ಜ.ಡಾ. ತೋಂಟದ ಸಿದ್ಧಲಿಂಗ ಶ್ರೀಗಳು, ಬಳಗಾನೂರಿನ ಚಿಕೇನಕೊಪ್ಪ ಶಿವಶಾಂತವೀರ ಶರಣರು, ಶಿರಹಟ್ಟಿ ಜ. ಫಕ್ಕಿರೇಶ್ವರ ಶ್ರೀಗಳು, ಹೊಸಳ್ಳಿ ಬೂದೀಶ್ವರ ಶ್ರೀಗಳು, ವೀರೇಶ್ವರ ಪುಣ್ಯಾಶ್ರಮದ ಕಲ್ಲಯ್ಯಜ್ಜನವರು, ಸೊರಟೂರ ಫಕ್ಕಿರೇಶ್ವರ ಶ್ರೀಗಳು ಸಾನ್ನಿಧ್ಯ ವಹಿಸಲಿದ್ದಾರೆ. ಸಚಿವರು, ಸಂಸದರು, ಶಾಸಕರು, ಗಣ್ಯವ್ಯಕ್ತಿಗಳು ಭಾಗವಹಿಸಲಿದ್ದಾರೆ. ವಿವಾಹಕ್ಕಾಗಿ ವಿದ್ಯಾದಾನ ಸಮಿತಿ ಮೈದಾನದಲ್ಲಿ 1 ಲಕ್ಷ ಚದರ ಅಡಿಯಲ್ಲಿ ಪೆಂಡಾಲ್ ಹಾಕಲಾಗಿದೆ.
ಅ. 22 ರಂದು ಸಂಜೆ 5 ಗಂಟೆಗೆ ವಿದ್ಯಾದಾನ ಸಮಿತಿ ಮೈದಾನದಲ್ಲಿ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಏರ್ಪಡಿಸಲಾಗಿದೆ. ದೂರದ ಊರಿನಿಂದ ಬರುವ ವಧು, ವರರ ಪಾಲಕರಿಗೆ ಎಪಿಎಂಸಿ ದಲಾಲರ ಅಂಗಡಿಗಳಲ್ಲಿ ವಸತಿ ವ್ಯವಸ್ಥೆ ಮಾಡಲಾಗಿದೆ. ಆ ದಿನದಂದು ಊಟದ ವ್ಯವಸ್ಥೆಯನ್ನು ಕೆ.ಎಚ್. ಪಾಟೀಲ ಸಭಾಭವನದಲ್ಲಿ ಏರ್ಪಡಿಸಲಾಗಿದೆ. ಅ. 23 ರಂದು ವಿವಿಧೆಡೆ ಮೂರು ಕಡೆಗಳಲ್ಲಿ ಊಟದ ವ್ಯವಸ್ಥೆ ಮಾಡಲಾಗಿದ್ದು, ಕಾರ್ಯಕ್ರಮದ ಯಶಸ್ಸಿಗೆ 2 ಸಾವಿರ ಸ್ವಯಂ ಸೇವಕರು ಶ್ರಮಿಸಲಿದ್ದಾರೆ ಎಂದು ಹೇಳಿದರು. ಈ ಸಂದರ್ಭದಲ್ಲಿ ನಗರಸಭೆ ಸದಸ್ಯ ಮಂಜುನಾಥ ಮುಳಗುಂದ, ರಾಘವೇಂದ್ರ ಯಳವತ್ತಿ ಮುಂತಾದವರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.