ಗದಗ

ಬಳ್ಳಾರಿ ಗೇಟ್ ರಸ್ತೆ ದುರಸ್ತಿಗೆ ವಾರ ಗಡುವು

Published On :

ಕನ್ನಡಪ್ರಭ ವಾರ್ತೆ, ಗದಗ, ಸೆ. 4
ಗದಗ-ಬೆಟಗೇರಿ ಅವಳಿ ನಗರಕ್ಕೆ ಸಂಪರ್ಕ ಕಲ್ಪಿಸುವ ಬಳ್ಳಾರಿ ಗೇಟಿನ ರಸ್ತೆ ಅಭಿವೃದ್ಧಿ ಕಾಮಗಾರಿ ಕಳೆದ ತಿಂಗಳು ಕೈಗೊಳ್ಳಲಾಗಿತ್ತು. ಆದರೆ, ಕಾಮಗಾರಿ ಅಪೂರ್ಣಗೊಂಡಿದ್ದು ಮತ್ತೆ ಮಳೆ ಬಂದಾಗ ಅಪಾರ ಪ್ರಮಾಣದಲ್ಲಿ ನೀರು ಸಂಗ್ರಹಗೊಂಡು ಸಂಚಾರಕ್ಕೆ ತೀವ್ರ ತೊಂದರೆಯಾಗುತ್ತಿದೆ. ಆದ್ದರಿಂದ ಒಂದು ವಾರದೊಳಗಾಗಿ ರಸ್ತೆ ಸಮಸ್ಯೆ ಪರಿಹರಿಸದಿದ್ದರೆ ಉಗ್ರ ಹೋರಾಟ ಮಾಡಬೇಕಾಗುತ್ತದೆ ಎಂದು ಸ್ಥಳೀಯ ನಿವಾಸಿಗಳು ಹಾಗೂ ಸಾಮಾಜಿಕ ಕಾರ್ಯಕರ್ತ ಮಹೇಶ ಕರಿಬಿಷ್ಠಿ ತಿಳಿಸಿದ್ದಾರೆ.
ಈ ಕುರಿತು ಪ್ರಕಟಣೆ ನೀಡಿರುವ ಅವರು, ಬಳ್ಳಾರಿ ಗೇಟ್ ರಸ್ತೆ ಸಮಸ್ಯೆ ಇಂದು ನಿನ್ನೆಯದಲ್ಲ, ಕಳೆದ ಕೆಲ ವರ್ಷಗಳಿಂದ ಈ ರಸ್ತೆ ಸಂಪೂರ್ಣ ಹದಗೆಟ್ಟು ಹೋಗಿತ್ತು. ಆಗಾಗ ತೇಪೆ ಹಾಕುವ ಕೆಲಸ ನಡೆಯಿತೆ ಹೊರತು ರಸ್ತೆ ಮಳೆಗಾಲ ಸಂದರ್ಭದಲ್ಲಿ ಆಗುವ ತೊಂದರೆ ತಪ್ಪಿಸಲು ಯಾರು ಪ್ರಾಮಾಣಿಕ ಪ್ರಯತ್ನ ಮಾಡುತ್ತಿಲ್ಲ. ಮಳೆ ಬಂದಾಗ ಕೆಳ ಸೇತುವೆಯ ಕೆಳಗೆ ಅಪಾರ ಪ್ರಮಾಣದ ನೀರು ಸಂಗ್ರಹಗೊಳ್ಳತ್ತಿದೆ. ಇದರಿಂದ ಸಂಪರ್ಕ ಕಡಿತಗೊಂಡು ವಿದ್ಯಾರ್ಥಿಗಳು ಹಾಗೂ ಎಪಿಎಂಸಿಗೆ ತೆರಳುವ ರೈತರಿಗೆ ತೊಂದರೆಯಾಗುತ್ತಿದೆ. ಕೇವಲ ಕೆಲ ಮೀಟರ್‌ಗಳಷ್ಟಿರುವ ಈ ರಸ್ತೆ ಕಾಮಗಾರಿ ಪೂರ್ಣಗೊಂಡಿಲ್ಲ. ಈ ರಸ್ತೆಯ ಬಗ್ಗೆ ದಿವ್ಯ ನಿರ್ಲಕ್ಷ್ಯ ತೋರಿಸುತ್ತಿರುವುದು ಈ ಭಾಗದ ಜನರ ಆಕ್ರೋಶಕ್ಕೆ ಕಾರಣಾವಾಗಿದೆ.
ಮಸಾರಿ ಭಾಗದಲ್ಲಿ ಹೆಚ್ಚಾಗಿ ಆಸ್ಪತ್ರೆಗಳಿವೆ. ಬೆಟಗೇರಿಯಿಂದ ರೋಗಿಗಳು, ಗರ್ಭಿಣಿಯರು ಆಸ್ಪತ್ರೆಗೆ ತೆರಳಲು ಇದೇ ಮಾರ್ಗವನ್ನು ಹೆಚ್ಚಾಗಿ ಬಳಸುತ್ತಾರೆ. ಆದರೆ ರಸ್ತೆಯ ದುಃಸ್ಥಿತಿಯಿಂದ ರೋಗಿಗಳಿಗೆ ತೊಂದರೆಯಾಗುತ್ತಿದೆ. ಇನ್ನು ಈ ರಸ್ತೆಯಲ್ಲಿ ನೀರು ನಿಂತಾಗ ಜನರು ಹಾಗೂ ವಿದ್ಯಾರ್ಥಿಗಳು ರೇಲ್ವೆ ಕಂಬಿಗಳನ್ನು ದಾಟಿಕೊಂಡು ಹೋಗುತ್ತಾರೆ. ಈ ರೀತಿ ಹಳಿ ದಾಟುವಿಕೆ ಕೆಲವರ ಜೀವಕ್ಕೆ ಮುಳುವಾಗಿದೆ ಹಾಗೂ ಪದೇ ಪದೇ ಅಪಾರ ಪ್ರಮಾಣದ ಕೊಳಚೆ ನೀರು ನಿಲ್ಲುವುದರಿಂದ ಸುತ್ತಲಿನ ಪರಿಸರದಲ್ಲಿ ಅನಾರೋಗ್ಯಕರ ವಾತಾವರಣ ನಿರ್ಮಾಣವಾಗುತ್ತಿದೆ. ಕೆಲ ತಿಂಗಳ ಹಿಂದೆ ಜಿಲ್ಲಾ ಉಸ್ತುವಾರಿ ಸಚಿವರೆ ಭೇಟಿ ನೀಡಿ ಕ್ರಮಕೈಗೊಳ್ಳಲು ಸೂಚಿಸಿದರು ಪ್ರಯೋಜನವಾಗಿಲ್ಲ.
ಈ ಕುರಿತು ಈಗಲಾದರೂ ನಗರಸಭೆ ಹಾಗೂ ಜಿಲ್ಲಾಡಳಿತ ಎಚ್ಚೆತ್ತುಕೊಂಡು 1 ವಾರದಲ್ಲಿ ದುರಸ್ತಿ ಕಾರ್ಯ ಕೈಗೊಳ್ಳಬೇಕು. ಇಲ್ಲದೆ ಹೋದರೆ ಉಗ್ರಹೋರಾಟ ಮಾಡಲಾಗುವುದು ಎಂದು ಪ್ರಕಟಣೆಯ ಮೂಲಕ ಎಚ್ಚರಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.