ವಸತಿ ನಿಲಯಕ್ಕೆ ವಿದ್ಯಾರ್ಥಿಗಳ ಆಯ್ಕೆಯಲ್ಲಿ ಗೊಂದಲ
ಕನ್ನಡಪ್ರಭ ವಾರ್ತೆ, ಗದಗ, ಸೆ. 12
ವಸತಿ ನಿಲಯಕ್ಕೆ ವಿದ್ಯಾರ್ಥಿಗಳ ಆಯ್ಕೆ ಸಂದರ್ಭದಲ್ಲಿ ಗೊಂದಲ ಉಂಟಾಗುತ್ತಿದ್ದು, ಇದರಿಂದ ವಿದ್ಯಾರ್ಥಿಗಳ ಭವಿಷ್ಯಕ್ಕೆ ತೊಂದರೆಯಾಗುತ್ತಿದೆ ಎಂದು ಜಿಪಂ ಅಧ್ಯಕ್ಷ ಎಂ.ಎಸ್. ಪಾಟೀಲ ಹೇಳಿದರು.
ಅವರು ಬುಧವಾರ ಜಿಪಂ ಸಭಾಭವನದಲ್ಲಿ ನಡೆದ ಅಭಿವೃದ್ಧಿ ಕಾಮಗಾರಿಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಜಿಲ್ಲಾ ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳೊಂದಿಗೆ ಈ ವಿಷಯವಾಗಿ ಚರ್ಚಿಸುವ ವೇಳೆ ಮಾತನಾಡಿದರು. ಸಾರ್ವಜನಿಕರು ತಮ್ಮ ಮಕ್ಕಳ ಆಯ್ಕೆಯಾಗಿ ಜನಪ್ರತಿನಿಧಿಗಳಿಂದ ಒತ್ತಾಯ ತರುತ್ತಿದ್ದು, ಇದರಿಂದ ನೈಜ ವಿದ್ಯಾರ್ಥಿಗಳಿಗೆ ತೊಂದರೆಯಾಗುವ ಸಾಧ್ಯತೆ ಇದೆ ಎಂದು ಬೇಸರ ವ್ಯಕ್ತಪಡಿಸಿದರು. ವಸತಿ ನಿಲಯಕ್ಕೆ ವಿದ್ಯಾರ್ಥಿಗಳ ಆಯ್ಕೆಯನ್ನು ಸಂಪೂರ್ಣ ಮೆರಿಟ್ ಮೇಲೆ ಮಾಡಿ, ಇಲ್ಲವೇ ಜನಪ್ರತಿನಿಧಿಗಳು ಸೂಚಿಸಿದವರನ್ನು ಆಯ್ಕೆ ಮಾಡಿ ಎಂದರು.
ಈ ಸಂದರ್ಭದಲ್ಲಿ ಜಿಪಂ ಸದಸ್ಯ ಎಂ.ಎಸ್. ದೊಡ್ಡಗೌಡ್ರ ಮಧ್ಯೆ ಪ್ರವೇಶಿಸಿ ಪೂರ್ಣ ಪ್ರಮಾಣದಲ್ಲಿ ಮೆರಿಟ್ ಮೂಲಕ ಆಯ್ಕೆ ಮಾಡಿದಲ್ಲಿ ಕೆಲ ಬಡ ವಿದ್ಯಾರ್ಥಿಗಳು ಸೌಲಭ್ಯ ವಂಚಿತರಾಗುತ್ತಾರೆ. ಮೆರಿಟ್ ಮೂಲಕ ಆಯ್ಕೆಯಾಗುವ ವಿದ್ಯಾರ್ಥಿಗಳಲ್ಲಿ ಬಡ ಹಾಗೂ ಶ್ರೀಮಂತ ವಿದ್ಯಾರ್ಥಿಗಳಿಬ್ಬರೂ ಇರುತ್ತಾರೆ. ಹಾಗಾಗಿ ಕೆಲ ವಿದ್ಯಾರ್ಥಿಗಳನ್ನು ಜನಪ್ರತಿನಿಧಿಗಳು ಸೂಚಿಸಿದವರನ್ನು ಆಯ್ಕೆ ಮಾಡಿಕೊಳ್ಳಬೇಕು ಎಂದರು. ಇಲಾಖೆ ನಿಯಮದ ಪ್ರಕಾರ ಮೆರಿಟ್ ಆಧಾರದ ಮೇಲೆ ವಿದ್ಯಾರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಬೇಕಿರುವುದರಿಂದಾಗಿ ಮುಂದಿನ ವರ್ಷದಿಂದ ಶೇ. 100 ರಷ್ಟು ಮೆರಿಟ್ ಆಧಾರದ ಮೇಲೆ ವಿದ್ಯಾರ್ಥಿಗಳ ಆಯ್ಕೆ ಮಾಡಿಕೊಳ್ಳಲಾಗುವುದೆಂದು ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ ಅಂಗಡಿ ಸಮರ್ಥಿಸಿಕೊಂಡರು.
ಸ್ಥಗಿತಗೊಂಡ ಶುದ್ಧ ನೀರಿನ ಘಟಕಗಳು:ಜಿಲ್ಲೆಯಲ್ಲಿ ಸ್ಮಾರ್ಟ್ ಆಕ್ವಾ ಟೆಕ್ನಾಲಜಿ ವತಿಯಿಂದ ಪ್ರಾರಂಭಿಸಲಾದ ಶುದ್ಧ ನೀರಿನ ಘಟಕಗಳು ತೃಪ್ತಿಕರ ಸೇವೆಯನ್ನು ಸಲ್ಲಿಸುತ್ತಿಲ್ಲ. ಕೆಲವು ಗ್ರಾಮಗಳಲ್ಲಿ ಸ್ಥಗಿತಗೊಂಡಿವೆ. ಇನ್ನು ಕೆಲವು ಗ್ರಾಮಗಳಲ್ಲಿ ಘಟಕದ ನಿರ್ಮಾಣ ಕಾಮಗಾರಿ ಪೂರ್ಣಗೊಂಡರೂ ಉದ್ಘಾಟನೆ ಭಾಗ್ಯ ಕಾಣದಂತಾಗಿದೆ. ಶಿರಹಟ್ಟಿ ತಾಲೂಕಿನ ಆದ್ರಳ್ಳಿ ಗ್ರಾಮದಲ್ಲಿ ಘಟಕ ನಿರ್ಮಾಣವಾಗಿ 2 ವರ್ಷಗಳಾಗುತ್ತ ಬಂದಿದೆ. ಆದರೂ ಇಲ್ಲಿಯವರೆಗೂ ಉದ್ಘಾಟನೆಯ ಭಾಗ್ಯ ಕಂಡಿಲ್ಲ. ಘಟಕ ಸ್ಥಾಪನೆಯ ಗುತ್ತಿಗೆ ಪಡೆದ ಕಂಪನಿಯ ಮೇಲೆ ಕ್ರಮ ತೆಗೆದುಕೊಳ್ಳಬೇಕು ಎಂದು ಒತ್ತಾಯಿಸಲಾಯಿತು. ಇದಕ್ಕೆ ಪ್ರತಿಕ್ರಿಯೆ ನೀಡಿದ ಜಿಪಂ ಸಿಇಓ ವೀರಣ್ಣ ತುರಮರಿ, ಈಗಾಗಲೇ ಒಂದು ವರ್ಷದಿಂದಲೂ ಸರ್ಕಾರಕ್ಕೆ ಹಾಗೂ ಜಿಲ್ಲೆಯ ಸಚಿವರಿಗೆ ಈ ಕುರಿತು ಮನವಿ ಮಾಡಿಕೊಳ್ಳಲಾಗಿದೆ. ಕಂಪನಿಗೆ ಕೊಡಬೇಕಾದ ಅಂತಿಮ ಹಣವನ್ನು ಕೂಡಾ ಈ ತನಕ ಬಿಡುಗಡೆ ಮಾಡಿಲ್ಲ. ಸರ್ಕಾರದಿಂದ ಆದೇಶ ಬಂದ ತಕ್ಷಣ ಕಂಪನಿ ವಿರುದ್ಧ ಕ್ರಮ ತೆಗೆದುಕೊಳ್ಳಲಾಗುವುದು ಎಂದರು.
ಜಿಲ್ಲೆಯಲ್ಲಿ ಆಗುತ್ತಿರುವ ಮಳೆಯಿಂದಾಗಿ ಜನರ ಆರೋಗ್ಯದ ಮೇಲೆ ಬೀರುವ ಪರಿಣಾಮದ ಮುನ್ನೆಚ್ಚರಿಕೆ ಕ್ರಮದ ಕುರಿತು ಜಿಪಂ ಅಧ್ಯಕ್ಷರು ಜಿಲ್ಲಾ ಆರೋಗ್ಯ ಇಲಾಖೆ ಅಧಿಕಾರಿ ಡಾ. ಡಿ.ಬಿ. ಚೆನ್ನಶೆಟ್ಟಿ ಅವರನ್ನು ವಿಚಾರಿಸಿದರು. ಜಿಲ್ಲೆಯಲ್ಲಾಗುತ್ತಿರುವ ಮಳೆಯ ಕಾರಣಗಳಿಂದಾಗಿ ಸಾಂಕ್ರಾಮಿಕ ಕಾಯಿಲೆಗಳು ಹರಡುವ ಸಾಧ್ಯತೆಗಳು ಹೆಚ್ಚಿದೆ. ಕೆಲವು ಗ್ರಾಮಗಳಲ್ಲಿ ವಾಂತಿ, ಭೇದಿಯಂತಹ ಪ್ರಕರಣಗಳು ಕಂಡು ಬಂದಿವೆ. ಹಾಗಾಗಿ ಈಗಾಗಲೇ ಜಿಲ್ಲೆಯಲ್ಲಿ ಫಾಗಿಂಗ್ ಕಾರ್ಯ, ಲಾರ್ವಾ ಸರ್ವೇ ಮಾಡಿಸಲಾಗಿದ್ದು, ಹೆಚ್ಚಿನ ಪ್ರಮಾಣದಲ್ಲಿ ಔಷಧಿ ವಿತರಣೆ ಮಾಡುವ ಬಗ್ಗೆ ಕ್ರಮ ಕೈಗೊಳ್ಳಲಾಗುವುದು. ಈಗಾಗಲೇ 9 ಪ್ರಾಥಮಿಕ ಆರೋಗ್ಯ ಕೇಂದ್ರದ ಕಟ್ಟಡ ಕಾಮಗಾರಿ ಸಂಪೂರ್ಣ ಪೂರ್ಣಗೊಂಡಿವೆ. ಕೆಲವು ಆಸ್ಪತ್ರೆಗಳಲ್ಲಿ ಡಿ ಶ್ರೇಣಿಯ ನೌಕರರ ಸಮಸ್ಯೆಯಿದಾಗಿ ಆಸ್ಪತ್ರೆಯಲ್ಲಿ ಸ್ವಚ್ಛತೆ ಕಾಪಾಡಿಕೊಳ್ಳಲು ಅನಾನುಕೂಲತೆಗಳಾಗುತ್ತಿವೆ ಎಂದು ಚೆನ್ನಶೆಟ್ಟಿ ಮಾಹಿತಿ ನೀಡಿದರು. ಈ ಸಂದರ್ಭದಲ್ಲಿ ಜಿಪಂ ಸಿಇಓ ತುರಮರಿ ಮಾತನಾಡಿ, ಸಚಿವ ಎಚ್.ಕೆ. ಪಾಟೀಲ ಜನಸಾಮಾನ್ಯರಿಗೆ, ರೈತರಿಗೆ ಅನುಕೂಲವಾಗುವಂತಹ ಅನೇಕ ಯೋಜನೆಗಳನ್ನು ಜಾರಿಗೆ ತಂದಿದ್ದಾರೆ. ಇದರಲ್ಲಿ ಕೆರೆಗಳ ಪುನಶ್ಚೇತನ, ನಮ್ಮ ಹೊಲ-ನಮ್ಮ ರಸ್ತೆ, ನಿರ್ಮಲ ಭಾರತದಂತಹ ಅನೇಕ ಯೋಜನೆಗಳನ್ನು ಜಾರಿಗೆ ತರಲಾಗಿದೆ ಜಿಲ್ಲೆಯ ಜನರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದರು. ನಂತರ ವಿವಿಧ ಇಲಾಖೆ ಅಧಿಕಾರಿಗಳು ತಮ್ಮ ಇಲಾಖೆಯ ಪ್ರಗತಿಯ ಕುರಿತು ಮಾಹಿತಿ ನೀಡಿದರು. ಈ ಸಂದರ್ಭದಲ್ಲಿ ಜಿಪಂ ಉಪಾಧ್ಯಕ್ಷ ರಮೇಶ ಮುಂದಿನಮನಿ ಹಾಗೂ ವಿವಿಧ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

