ಟಿಕೆಟ್‌ಗಾಗಿ ತೀವ್ರ ಪೈಪೋಟಿ
ಕನ್ನಡಪ್ರಭ ವಾರ್ತೆ, ಮುಂಡರಗಿ, ಸೆ. 14
ಸೆ. 29 ರಂದು ನಡೆಯಲಿರುವ ಹಮ್ಮಿಗಿ ಜಿಲ್ಲಾ ಪಂಚಾಯಿತಿ ಕ್ಷೇತ್ರದ ಉಪ ಚುನಾವಣೆಗೆ ಸ್ಪರ್ಧಿಸಲು ಟಿಕೆಟ್‌ಗಾಗಿ ಆಕಾಂಕ್ಷಿಗಳು ತೀವ್ರ ಪೈಪೋಟಿ ನಡೆಸಿದ್ದಾರೆ.
ಆಡಳಿತಾರೂಢ ಕಾಂಗ್ರೆಸ್, ಬಿಜೆಪಿ ಹಾಗೂ ಜೆಡಿಎಸ್ ಪಕ್ಷಗಳ ಕಾರ್ಯಕರ್ತರು ಟಿಕೆಟ್‌ಗಾಗಿ ಆಯಾ ಪಕ್ಷಗಳ ವರಿಷ್ಠರ ದುಂಬಾಲು ಬಿದ್ದಿದ್ದು, ಯೋಗ್ಯರನ್ನು ಗುರ್ತಿಸಿ ಟಿಕೆಟ್ ನೀಡುವುದೇ ಎಲ್ಲ ಪಕ್ಷಗಳ ವರಿಷ್ಠರಿಗೆ ದೊಡ್ಡ ತಲೆ ನೋವಾಗಿ ಪರಿಣಮಿಸಿದೆ. ಈ ಹಿಂದೆ ಹಮ್ಮಿಗಿ ಜಿಲ್ಲಾ ಪಂಚಾಯ್ತಿ ಕ್ಷೇತ್ರದಿಂದ ಕಾಂಗ್ರೆಸ್‌ನಿಂದ ಆಯ್ಕೆಯಾಗಿದ್ದ ಹೇಮಗಿರೀಶ ಹಾವಿನಾಳ ಕಳೆದ ವಿಧಾನಸಭೆ ಚುನಾವಣೆಯಲ್ಲಿ ಸದಸ್ಯತ್ವ ಸ್ಥಾನಕ್ಕೆ ಹಾಗೂ ಕಾಂಗ್ರೆಸ್ ಪಕ್ಷಕ್ಕೆ ರಾಜಿನಾಮೆ ನೀಡಿದ ಹಿನ್ನೆಲೆಯಲ್ಲಿ ಮತ್ತೆ ಚುನಾವಣೆ ಎದುರಾಗಿದೆ.
ಟಿಕೆಟ್‌ಗಾಗಿ ಪೈಪೋಟಿ: ಚುನಾವಣೆ ದಿನ ನಿಗಧಿಯಾಗುತ್ತಿದ್ದಂತೆ ಎಲ್ಲ ಪಕ್ಷದ ಕಾರ್ಯಕರ್ತರು ಟೆಕೆಟ್‌ಗಾಗಿ ಪೈಪೋಟಿ ಪ್ರಾರಂಭಿಸಿದ್ದಾರೆ. ಆಡಳಿತಾರೂಢ ಕಾಂಗ್ರೆಸ್ ಪಕ್ಷದಿಂದ ಈ ಹಿಂದೆ ನಡೆದ ಜಿಲ್ಲಾ ಪಂಚಾಯಿತಿ ಚುನಾವಣೆಯ ಸಂದರ್ಭದಲ್ಲಿಯೂ ಟಿಕೆಟ್ ಆಕಾಂಕ್ಷಿಯಾಗಿದ್ದ ಕಲಕೇರಿ ಗ್ರಾಮದ ಡಾ.ಬಸವರಾಜ ಮೇಟಿ, ಪ್ರೊ. ವೀರಣ್ಣ ಮೇಟಿ, ಹಮ್ಮಿಗಿ ಗ್ರಾಪಂ ಮಾಜಿ ಅಧ್ಯಕ್ಷ ಇಸ್ಮಾಯಿಲ್‌ಖಾನ್ ತಂಬ್ರಳ್ಳಿ, ಶಿಂಗಟಾಲೂರು ಗ್ರಾಮದ ಹಿರಿಯ ಕಾಂಗ್ರೆಸ್ ಮುಖಂಡ ಶಂಕರಗೌಡ ಪಾಟೀಲ ಅವರ ಪುತ್ರ ರುದ್ರಗೌಡ ಪಾಟೀಲ, ಕೊರ್ಲಹಳ್ಳಿ ಗ್ರಾಮದ ಕಾಂಗ್ರೆಸ್ ಕಾರ್ಯಕರ್ತ ಲಕ್ಷ್ಮಣ ಕಾಗನೂರ ಹೆಸರುಗಳು ಪ್ರಮುಖವಾಗಿ ಕೇಳಿ ಬರುತ್ತಿವೆ.
ಬಿಜೆಪಿಯಿಂದ ಈ ಹಿಂದೆ ಪ್ರಗತಿಪರ ಜನತಾದಳ, ಕಾಂಗ್ರೆಸ್ ಹಾಗೂ ಬಿಜೆಪಿಯಿಂದ ಮೂರು ಬಾರಿ ಈ ಕ್ಷೇತ್ರದಲ್ಲಿ ಸ್ಪರ್ಧಿಸಿ ಸೋಲು ಅನುಭವಿಸಿರುವ ಬೆಣ್ಣಿಹಳ್ಳಿ ಗ್ರಾಮದ ಬಿಜೆಪಿ ಮುಖಂಡ ಹಾಗೂ ಮಾಜಿ ತಾಲೂಕು ಪಂಚಾಯಿತಿ ಅಧ್ಯಕ್ಷ ರಂಗಪ್ಪ ಕ್ಯಾದಿಗಿಹಳ್ಳಿ, ಕೊರ್ಲಹಳ್ಳಿ ಗ್ರಾಪಂ ಮಾಜಿ ಅಧ್ಯಕ್ಷ ಮದರ್‌ಸಾಬ್ ಸಿಂಗನಮಲ್ಲಿ, ಬಿದರಳ್ಳಿ ಗ್ರಾಮದ ಬಸವರಾಜ ಪಲ್ಲೇದ ಹಾಗೂ ಈಗ ನಡೆಯುತ್ತಿರುವ ಉಪಚುನಾವಣೆಗೆ ಕಾರಣೀಕರ್ತರಾಗಿರುವ ಮಾಜಿ ಜಿಪಂ ಸದಸ್ಯ ಹೇಮಗಿರೀಶ ಹಾವಿನಾಳ ಹೆಸರೂ ಬಿಜೆಪಿ ಪಕ್ಷದ ಅಭ್ಯರ್ಥಿಗಳಾಗುವ ಆಕಾಂಕ್ಷಿಗಳ ಪಟ್ಟಿಯಲ್ಲಿ ಮುಂಚೂಣಿಯಲ್ಲಿವೆ.
ಹಮ್ಮಿಗಿ ಕ್ಷೇತ್ರದಿಂದ ಈ ಹಿಂದೆ ಜೆಡಿಎಸ್ ಸದಸ್ಯನಾಗಿ ಆಯ್ಕೆಯಾಗಿದ್ದ ಮಾಜಿ ಜಿಪಂ ಸದಸ್ಯ ವಿರೂಪಾಕ್ಷಪ್ಪ ಜೋಗೇರ ಜೆಡಿಎಸ್‌ದಿಂದ ತಾವೇ ಅಧಿಕೃತ ಅಭ್ಯರ್ಥಿ ಎಂದು ಈಗಾಗಲೇ ನಾಮಪತ್ರ ಸಲ್ಲಿಸಿದ್ದಾರೆ. ಕೆಲವರು ಪಕ್ಷೇತರ ಅಭ್ಯರ್ಥಿಗಳಾಗಿ ಕಣಕ್ಕಿಳಿಯುವ ಮಾತುಗಳೂ ಕೇಳಿಬರುತ್ತಿವೆ. ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿರುವ ರಂಗಪ್ಪ ಕ್ಯಾದಿಗಿಹಳ್ಳಿಯವರಿಗೆ ಬಿಜೆಪಿ ವರಿಷ್ಠರು ಟಿಕೆಟ್ ನಿರಾಕರಿಸಿದರೆ ಅವರು ಸ್ವತಂತ್ರ ಅಭ್ಯರ್ಥಿಯಾಗಿ ಕಣಕ್ಕಿಳಿಯಲು ತಯಾರಿ ನಡೆಸಿದ್ದಾರೆ ಎನ್ನಲಾಗುತ್ತಿದೆ.
ಮಾಜಿ ಸದಸ್ಯ ಹೇಮಗಿರೀಶ ಹಾವಿನಾಳ ಅವರಿಗೆ ಬಿಜೆಪಿ ಮುಖಂಡರು, ಮಾಜಿ ಶಾಸಕರು ಹಾಗೂ ಹಮ್ಮಿಗಿ ಕ್ಷೇತ್ರದ ಮತದಾರರು ಸ್ಪರ್ಧಿಸುವಂತೆ ಒತ್ತಾಯಿಸುತ್ತಿದ್ದು, ಈ ಕುರಿತು ಹಾವಿನಾಳ ನಿರ್ಧಾರ ಪ್ರಕಟಿಸಿಲ್ಲ. ಕಾಂಗ್ರೆಸ್‌ನಲ್ಲಿಯೂ ಟಿಕೆಟ್ ಆಕಾಂಕ್ಷಿಗಳು ಹೆಚ್ಚಿದ್ದು, ಟಿಕೆಟ್ ದೊರೆಯದಿದ್ದಲ್ಲಿ ಕೆಲವರು ಪಕ್ಷೇತರರಾಗಿ ನಿಲ್ಲುವ ಸಾಧ್ಯತೆಗಳನ್ನೂ ಅಲ್ಲಗಳೆಯುವಂತಿಲ್ಲ.
- ಶರಣು ಸೊಲಗಿ
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

