ಗದಗ

ಇರುವ ಅಧಿಕಾರವನ್ನೇ ಸಮರ್ಥವಾಗಿ ನಿರ್ವಹಿಸುವೆ

Published On :

ಕನ್ನಡಪ್ರಭ ವಾರ್ತೆ, ಗದಗ, ಸೆ. 16
ಲೋಕಾಯುಕ್ತಕ್ಕೆ ಸದ್ಯ ಇರುವ ಅಧಿಕಾರವನ್ನೇ ಸಮರ್ಥವಾಗಿ ನಿರ್ವಹಿಸಿ, ಸಾರ್ವಜನಿಕರ ಸಮಸ್ಯೆಗೆ ಸೂಕ್ತವಾಗಿ ಸ್ಪಂದಿಸುವುದೇ ನನ್ನ ಮುಖ್ಯ ಗುರಿ ಎಂದು ರಾಜ್ಯ ಲೋಕಾಯುಕ್ತ ನ್ಯಾಯಮೂರ್ತಿ ಡಾ. ವೈ. ಭಾಸ್ಕರ್‌ರಾವ್ ಹೇಳಿದರು.
ಅವರು ನಗರದ ಸ್ವಾಮಿ ವಿವೇಕಾನಂದ ಸಭಾಭವನದಲ್ಲಿ ಸೋಮವಾರ ಸಾರ್ವಜನಿಕರ ಅಹವಾಲು ಸ್ವೀಕಾರ ಕಾರ್ಯಕ್ರಮದ ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. ಲೋಕಾಯುಕ್ತರಿಗೆ ಪರಮಾಧಿಕಾರ ನೀಡುವ ವಿಷಯವಾಗಿ ಸರ್ಕಾರವನ್ನು ಕೇಳುತ್ತೀರಾ ಎನ್ನುವ ಪ್ರಶ್ನೆಗೆ ಅವರು ಈ ರೀತಿ ಉತ್ತರಿಸಿದ್ದು ಗಮನಾರ್ಹವಾಗಿತ್ತು.
ರಾಜ್ಯದ ಇನ್ನುಳಿದ ಜಿಲ್ಲೆಗಳಿಗೆ ಹೋಲಿಕೆ ಮಾಡಿದಲ್ಲಿ ಗದಗ ಜಿಲ್ಲೆಯಲ್ಲಿ ಕೇವಲ 38 ಅರ್ಜಿಗಳು ಮಾತ್ರ ಬಂದಿದ್ದು, ಬಂದಿರುವ ಎಲ್ಲ ಅರ್ಜಿಗಳನ್ನು ನಿಗದಿತ ಕಾಲ ಮಿತಿಯಲ್ಲಿ ಇತ್ಯರ್ಥ ಪಡಿಸಲು ಜಿಲ್ಲೆಯ ಎಲ್ಲ ಹಿರಿಯ ಅಧಿಕಾರಿಗಳಿಗೆ ಸೂಚಿಸಿದ್ದೇನೆ. ಮೂರು ಅಂಗವಿಕಲರು ನೌಕರಿ ವಿಷಯವಾಗಿ ಅರ್ಜಿ ಸಲ್ಲಿಸಿದ್ದು, ಅವರ ವಿದ್ಯಾರ್ಹತೆ ಹಾಗೂ ಸರ್ಕಾರದ ನಿಯಮಾವಳಿಗಳ ಅಧಿಕಾರದಲ್ಲಿ ಸೂಕ್ತ ಕ್ರಮ ಜರುಗಿಸುವಂತೆ ತಿಳಿಸಿದ್ದೇನೆ. ಇನ್ನು ಜಿಲ್ಲೆಯ ಕೆಲ ತಾಲೂಕುಗಳಲ್ಲಿ ಕಲ್ಲು ಗಣಿಗಾರಿಕೆಯ ಬಗ್ಗೆಯೂ ಮನವಿಗಳು ಬಂದಿದ್ದು, ಕೂಡಲೇ ಅವುಗಳಿಂದ ಸಾರ್ವಜನಿಕರ ಜೀವನದ ಮೇಲಾಗುತ್ತಿರುವ ಪರಿಣಾಮ ಮತ್ತು ಅವುಗಳ ಪರವಾನಗಿಯ ವಿಷಯವನ್ನು ಪರಿಶೀಲಿಸಲು ತಿಳಿಸಿದ್ದೇನೆ.
ನಿರ್ದಾಕ್ಷಿಣ್ಯ ಕ್ರಮ: ಲೋಕಾಯುಕ್ತದಲ್ಲಿರುವ ಕೆಲ ಅಧಿಕಾರಿಗಳೇ ಅಕ್ರಮದಲ್ಲಿ ಶಾಮೀಲಾಗುತ್ತಿದ್ದಾರೆ ಎನ್ನುವ ಪ್ರಶ್ನೆಗೆ, ಅಂತಹ ಪ್ರಕರಣಗಳಲ್ಲಿ ಈಗಾಗಲೇ ನಿರ್ದಾಕ್ಷಿಣ್ಯ ಕ್ರಮ ತೆಗೆದುಕೊಳ್ಳಲಾಗಿದೆ. ಲೋಕಾಯುಕ್ತದಲ್ಲಿ ಬಾಕಿ ಉಳಿದಿರುವ ಪ್ರಕರಣಗಳ ಕುರಿತ ಪ್ರಶ್ನೆಗೆ ಉತ್ತರಿಸಿದ ಅವರು, ಈಗಾಗಲೇ ಹಿಂದಿನ ವರ್ಷಗಳಲ್ಲಿ ಬಾಕಿ ಇರುವ ಪ್ರಕರಣಗಳನ್ನು ಸಾಧ್ಯವಾದಷ್ಟು ಕಾಲ ಮಿತಿಯಲ್ಲಿ ಇತ್ಯರ್ಥ ಮಾಡಲಾಗುತ್ತಿದೆ. ಈಗಾಗಲೇ ಹಲವಾರು ಪ್ರಕರಣಗಳು ಅಂತಿಮ ಹಂತದಲ್ಲಿವೆ ಎಂದರು. ಗದಗ ಜಿಲ್ಲೆಯಲ್ಲಿ ಗಾಳಿ ವಿದ್ಯುತ್ ಯಂತ್ರ ಸ್ಥಾಪನೆಯಲ್ಲಿ ಆಗಿರುವ ಲೋಪಗಳ ಕುರಿತು ಯಾರಾದರೂ ಲಿಖಿತ ರೂಪದಲ್ಲಿ ದೂರು ಸಲ್ಲಿಸಿದಲ್ಲಿ ಕ್ರಮ ತೆಗೆದುಕೊಳ್ಳಲಾಗುವುದು ಎಂದರು. ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಎನ್.ಎಸ್. ಪ್ರಸನ್ನಕುಮಾರ, ಜಿಪಂ ಸಿಇಓ ವೀರಣ್ಣ ತುರಮರಿ, ಎಸ್ಪಿ ಡಾ. ಎಸ್.ಡಿ. ಶರಣಪ್ಪ. ಲೋಕಾಯುಕ್ತ ಎಸ್ಪಿ ಕೆ. ಪರಶುರಾಮ, ಲೋಕಾಯುಕ್ತ ಇಲಾಖೆಯ ಹಿರಿಯ ಅಧಿಕಾರಿಗಳು ಹಾಜರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.