ಗಲಭೆ ನಿಯಂತ್ರಿಸುವಲ್ಲಿ ಜಿಲ್ಲಾಡಳಿತ ಸಂಪೂರ್ಣ ವಿಫಲ
ಕನ್ನಡಪ್ರಭ ವಾರ್ತೆ, ಗದಗ, ಸೆ. 25
ಗಣೇಶ ವಿಸರ್ಜನೆಯ ವೇಳೆಯಲ್ಲಿ ಉಂಟಾದ ಘರ್ಷಣೆ ನಿಯಂತ್ರಣ ಮಾಡುವಲ್ಲಿ ಜಿಲ್ಲಾಡಳಿತ ಸಂಪೂರ್ಣ ವಿಫಲವಾಗಿದೆ ಎಂದು ಜಿಲ್ಲಾ ಬಿಜೆಪಿ ಅಧ್ಯಕ್ಷ, ಮಾಜಿ ಸಚಿವ ಕಳಕಪ್ಪ ಬಂಡಿ ಹೇಳಿದರು.
ಅವರು ನಗರದ ಪ್ರವಾಸಿ ಮಂದಿರದಲ್ಲಿ ಬುಧವಾರ ಸಂಜೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. 5ನೇ ದಿನ ಗಣೇಶ ವಿಸರ್ಜನೆಯ ಸಂದರ್ಭದಲ್ಲಿ ಜರುಗಿದ ಅಹಿತಕರ ಘಟನೆಗಳಿಂದ ಎಚ್ಚೆತ್ತುಕೊಳ್ಳದ ಜಿಲ್ಲಾಡಳಿತ, ಜಿಲ್ಲಾ ಪೊಲೀಸ್ ಇಲಾಖೆ ನಿರ್ಲಕ್ಷ್ಯ ಭಾವ ತಾಳಿದ್ದೇ ಇಂದು ಪ್ರಕರಣ ಇಷ್ಟೊಂದು ಪ್ರಮಾಣದಲ್ಲಿ ಬೆಳೆಯಲು ಕಾರಣವಾಗಿದೆ. ಈ ಘಟನೆ ಕುರಿತು ಕೇವಲ ಹಿಂದೂಗಳನ್ನೇ ಗುರಿಯಾಗಿಸಿಕೊಂಡು ಕ್ರಮ ಜರುಗಿಸುತ್ತಿರುವುದು ಖಂಡನೀಯ. ಇದರಿಂದಾಗಿ ಲಕ್ಷ್ಮೇಶ್ವರ ಪಟ್ಟಣದ ಜನತೆ ಭಯಭೀತರಾಗಿದ್ದು, ಊರು ಬಿಡುವಂತಹ ವಾತಾವರಣ ನಿರ್ಮಾಣವಾಗಿದೆ.
ಪೊಲೀಸ್ ಅಧಿಕಾರಿಗಳು ಕೇವಲ ಒಂದು ಸಮುದಾಯಕ್ಕೆ ಸೇರಿದವರನ್ನು ಮಾತ್ರ ಬಂಧಿಸುತ್ತಿದ್ದು, ತಕ್ಷಣವೇ ಇದನ್ನು ನಿಲ್ಲಿಸಬೇಕು. ಘಟನೆ ನಡೆದು ನಾಲ್ಕೈದು ದಿನ ಗತಿಸಿದರೂ ಜಿಲ್ಲಾ ಉಸ್ತುವಾರಿ ಸಚಿವರು ಭೇಟಿ ನೀಡದೇ, ಪ್ರಕರಣವನ್ನು ಸಂಪೂರ್ಣವಾಗಿ ನಿರ್ಲಕ್ಷಿಸಿದ್ದಾರೆ. ಇದೇ ಪ್ರವೃತ್ತಿ ಮುಂದುವರಿಸಿದಲ್ಲಿ ಸದ್ಯದಲ್ಲಿಯೇ ಜಿಲ್ಲೆಯಾದ್ಯಂತ ಬಿಜೆಪಿ ವತಿಯಿಂದ ಪ್ರತಿಭಟನೆ ಹಾಗೂ ಲಕ್ಷ್ಮೇಶ್ವರ ಠಾಣೆಗೆ ಮುತ್ತಿಗೆ ಹಾಕಲಾಗುವುದು. ಕಳೆದ 5 ವರ್ಷಗಳ ಬಿಜೆಪಿ ಅಧಿಕಾರಾವಧಿಯಲ್ಲಿ ಜಿಲ್ಲೆಯಲ್ಲಿ ಒಂದೇ ಒಂದು ಸೌಹಾರ್ದತೆ ಕದಡುವ ಘಟನೆಗಳು ನಡೆದಿರಲಿಲ್ಲ. ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಕೇವಲ 6 ತಿಂಗಳಲ್ಲಿ ಜಿಲ್ಲೆಯಲ್ಲಿ ಸೌಹಾರ್ದತೆ ಕದಡುವ ಪ್ರಯತ್ನ ನಡೆಯುತ್ತಿದ್ದು, ಇದನ್ನು ಕೂಡಲೇ ನಿಲ್ಲಿಸಬೇಕು. ಇಲ್ಲವಾದಲ್ಲಿ ಉಗ್ರ ಹೋರಾಟ ಎದುರಿಸಬೇಕಾಗುತ್ತದೆ. ಈ ಘಟನೆಯನ್ನು ಸೂಕ್ಷ್ಮವಾಗಿ ಅವಲೋಕಿಸಿದಲ್ಲಿ ಜಿಲ್ಲಾ ಪೊಲೀಸ್ ಇಲಾಖೆ, ಜಿಲ್ಲಾಡಳಿತ ವಿಫಲವಾಗಿದೆ ಎನ್ನುವುದು ಸ್ಪಷ್ಟವಾಗುತ್ತದೆ. ಜಿಲ್ಲಾ ಉಸ್ತುವಾರಿ ಸಚಿವ ಎಚ್.ಕೆ. ಪಾಟೀಲ ಇನ್ನಾದರೂ ಎಚ್ಚೆತ್ತುಕೊಳ್ಳಲಿ ಎಂದು ಟೀಕಿಸಿದರು. ಮಾಜಿ ಶಾಸಕ ಶ್ರೀಶೈಲಪ್ಪ ಬಿದರೂರ, ಚಂದ್ರಶೇಖರ ಕವಟಗಿ, ಎಂ.ಎಸ್. ದೊಡ್ಡಗೌಡ್ರ, ಎಂ.ಎಸ್. ಕರಿಗೌಡ್ರ, ಎಂ.ಎಂ. ಹಿರೇಮಠ, ಎಸ್.ಎಂ.ಪಾಟೀಲ, ಛಗನ್ ರಾಜಪುರೋಹಿತ, ಸಂಗಮೇಶ ದುಂದೂರ, ಲಿಂಗನಗೌಡ ಹರ್ತಿ ಮುಂತಾದವರು ಹಾಜರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

