ಕಾಂಗ್ರೆಸ್, ಜೆಡಿಎಸ್ ಮರೆತುಬಿಡಿ: ಬಿಎಸ್ವೈ
ಕನ್ನಡಪ್ರಭ ವಾರ್ತೆ, ಹಾವೇರಿ, ಮಾ. 30
ನರೇಂದ್ರ ಮೋದಿ ಅವರನ್ನು ಪ್ರಧಾನಿಯನ್ನಾಗಿಸಲು ಎಲ್ಲರೂ ಬಿಜೆಪಿಯೊಂದಿಗೆ ಕೈಜೋಡಿಸಬೇಕಿದ್ದು, ಈ ಬಾರಿ ಕಾಂಗ್ರೆಸ್ ಹಾಗೂ ಜೆಡಿಎಸ್ಗಳನ್ನು ಮರೆತುಬಿಡಬೇಕು ಎಂದು ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಕರೆ ನೀಡಿದರು.
ತಾಲೂಕಿನ ಯಲಗಚ್ಚಿ ಗ್ರಾಮದಲ್ಲಿ ಭಾನುವಾರ ಏರ್ಪಡಿಸಿದ್ದ ಬಿಜೆಪಿ ಪ್ರಚಾರ ಸಭೆಯಲ್ಲಿ ಅಭ್ಯರ್ಥಿ ಶಿವಕುಮಾರ ಉದಾಸಿ ಪರ ಮತ ಯಾಚಿಸಿ ಅವರು ಮಾತನಾಡಿದರು. 50 ವರ್ಷ ಅಧಿಕಾರ ನಡೆಸಿದ ಕಾಂಗ್ರೆಸ್ ಸಾಕಷ್ಟು ಅವಕಾಶ ಇದ್ದರೂ ದೇಶದ ಅಭಿವೃದ್ಧಿ ಮಾಡಲಿಲ್ಲ. ಜನ ಈಗ ಬದಲಾವಣೆ ಬಯಸಿದ್ದಾರೆ. ದೇಶಾದ್ಯಂತ ಬಿಜೆಪಿ ಗಾಳಿ ಬೀಸುತ್ತಿದ್ದು, ಕಾಂಗ್ರೆಸ್ನ್ನು ಜನ ತಿರಸ್ಕರಿಸುತ್ತಿದ್ದಾರೆ. ಇದನ್ನು ಮನಗಂಡ ಕಾಂಗ್ರೆಸ್ ನಾಯಕರು ಚುನಾವಣೆಯಲ್ಲಿ ಸ್ಪರ್ಧಿಸಲು ಹಿಂದೇಟು ಹಾಕುತ್ತಿದ್ದಾರೆ. ಮೋದಿ ಪ್ರಧಾನಿಯಾಗುವುದನ್ನು ಇಡೀ ವಿಶ್ವವೇ ಎದುರು ನೋಡುತ್ತಿದೆ. ಆದ್ದರಿಂದ ಕಾಂಗ್ರೆಸ್ ಹಾಗೂ ಜೆಡಿಎಸ್ ಎರಡನ್ನೂ ಈ ಬಾರಿ ಮತದಾರರು ದೂರವಿಡಬೇಕು ಎಂದು ಕರೆ ನೀಡಿದರು.
ಮೂಗಿಗೆ ತುಪ್ಪ ಸವರುವಂಥ ಯೋಜನೆಗಳನ್ನು ಕಾಂಗ್ರೆಸ್ ಘೋಷಿಸಿ ವೋಟ್ ಬ್ಯಾಂಕ್ ರಾಜಕೀಯ ಮಾಡುತ್ತಿದೆ. ಆದರೆ, ನಾವು ಪ್ರತ್ಯೇಕ ಕೃಷಿ ಬಜೆಟ್ ಮಂಡಿಸಿ, ರೈತರ ಸಾಲ ಮನ್ನಾ, ಶೂನ್ಯ ಬಡ್ಡಿದರದಲ್ಲಿ ಸಾಲ ಮುಂತಾದ ಯೋಜನೆ ಜಾರಿಗೆ ತಂದಿದ್ದೇವೆ. ದೇಶದಲ್ಲೂ ಪ್ರತ್ಯೇಕ ಕೃಷಿ ಬಜೆಟ್ ಮಂಡಿಸಬೇಕು ಎಂದು ಮೋದಿ ಅವರಲ್ಲಿ ಹೇಳಿದ್ದೇನೆ. ರೈತರಿಗೆ ನಿರಂತರ ನೀರಾವರಿ ಸೌಲಭ್ಯ ಕಲ್ಪಿಸಲು ಮೋದಿ ಪ್ರಧಾನಿಯಾಗುವುದು ಅಗತ್ಯವಿದೆ ಎಂದರು.
ಬಿಜೆಪಿ ಅಭ್ಯರ್ಥಿ ಶಿವಕುಮಾರ ಉದಾಸಿ ಮಾತನಾಡಿ, ಕಾಂಗ್ರೆಸ್ ನಾಯಕರು ಹತಾಶ ಸ್ಥಿತಿಯಲ್ಲಿದ್ದಾರೆ. ಸಂಸತ್ತಿನಲ್ಲಿ ಪ್ರಶ್ನೆ ಕೇಳಿದ್ದೇ ದೊಡ್ಡ ಸಾಧನೆಯಲ್ಲ ಎಂದು ಕಾಂಗ್ರೆಸ್ ಅಭ್ಯರ್ಥಿ ತಮ್ಮ ವಿರುದ್ಧ ಟೀಕಿಸುತ್ತಿದ್ದಾರೆ. ಕಾಂಗ್ರೆಸ್ನವರು ಸುಳ್ಳು ಹೇಳುತ್ತಲೇ ಇಷ್ಟು ವರ್ಷಗಳ ಕಾಲ ಅಧಿಕಾರ ನಡೆಸಿದ್ದಾರೆ. ಇದು ಮಾಹಿತಿ ತಂತ್ರಜ್ಞಾನ ಯುಗ. ಸುಳ್ಳು ಹೇಳಿ ಜನರನ್ನು ಮೋಸ ಮಾಡಲು ಸಾಧ್ಯವಿಲ್ಲ. ಕಾಂಗ್ರೆಸ್ ಸರ್ಕಾರ ರೈತರ ಬಗ್ಗೆ ಕಿಂಚಿತ್ತೂ ಕಾಳಜಿ ತೋರಿಸಿಲ್ಲ. ಇಂಥ ಸರ್ಕಾರಕ್ಕೆ ಧಿಕ್ಕಾರವಿರಲಿ ಎಂದರು.
ಮಾಜಿ ಸಚಿವ ಸಿ.ಎಂ. ಉದಾಸಿ ಮಾತನಾಡಿ, ಒಂದು ನಿಮಿಷದ ಮತದಾನ 5 ವರ್ಷದ ದೇಶದ ಭವಿಷ್ಯ ನಿರ್ಧರಿಸುತ್ತದೆ. ಯೋಚಿಸಿ, ಸಮರ್ಥರಿಗೆ ಮತ ಹಾಕಬೇಕು. ಮೋದಿ ಪ್ರಧಾನಿಯಾಗುವುದು ನಿಶ್ಚಿತವಾಗಿದ್ದು, ಕ್ಷೇತ್ರದಲ್ಲಿ ಶಿವಕುಮಾರ ಉದಾಸಿಯವರನ್ನು ಬೆಂಬಲಿಸಬೇಕು ಎಂದರು.
ಮಾಜಿ ಶಾಸಕರಾದ ನೆಹರು ಓಲೇಕಾರ, ಶಿವರಾಜ ಸಜ್ಜನರ, ಜಿಪಂ ಅಧ್ಯಕ್ಷ ರಾಜೇಂದ್ರ ಹಾವೇರಣ್ಣನವರ, ಪ್ರಧಾನ ಕಾರ್ಯದರ್ಶಿ ಸಿದ್ದರಾಜ ಕಲಕೋಟಿ, ಬಿ.ಎಸ್. ಅಕ್ಕಿಹೊಳಿ, ವಿರೂಪಣ್ಣ ಬಳ್ಳಾರಿ, ಭಾರತಿ ಜಂಬಗಿ, ಜ್ಯೋತಿ ಸಾತೇನಹಳ್ಳಿ, ಪ್ರಭು ಹಿಟ್ನಳ್ಳಿ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

