ಗದಗ

ಗದಗ ಜಿಲ್ಲಾದ್ಯಂತ ಶಾಂತಿಯುತ ಮತದಾನ

Published On :

ಗದಗ: ಹಾವೇರಿ ಲೋಕಸಭೆ ಕ್ಷೇತ್ರದ ಚುನಾವಣೆಯ ಮತದಾನವು ಗುರುವಾರ ಜಿಲ್ಲಾದ್ಯಂತ ಸಣ್ಣ ಪುಟ್ಟ ಘಟನೆ ಹೊರತುಪಡಿಸಿದಲ್ಲಿ ಶಾಂತಿಯುತವಾಗಿ ನಡೆಯಿತು. ಬೆಳಗ್ಗೆ ವಿವಿಧೆಡೆ ಮತಯಂತ್ರಗಳು ಕೈಕೊಟ್ಟ ಹಿನ್ನೆಲೆಯಲ್ಲಿ 1ಗಂಟೆಗೂ ಹೆಚ್ಚು ಕಾಲ ಮತದಾನ ವಿಳಂಬವಾಗಿ ಪ್ರಾರಂಭವಾದ ಘಟನೆ ಜರುಗಿದೆ.
ಜಿಲ್ಲೆಯಲ್ಲಿಯೇ ಅತ್ಯಂತ ತುರುಸಿನ ರಾಜಕೀಯಕ್ಕೆ ಹೆಸರಾದ ನರಗುಂದ ಪಟ್ಟಣದ ಲಾಯನ್ಸ್ ಹಾಗೂ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿನ ಮತಗಟ್ಟೆಯಲ್ಲಿ ಮತದಾನ ನಡೆಯುವ ವೇಳೆ, ಕ್ಷುಲ್ಲಕ ಕಾರಣಕ್ಕಾಗಿ ಕಾಂಗ್ರೆಸ್ ಮತ್ತು ಬಿಜೆಪಿ ಕಾರ್ಯಕರ್ತ ಮಧ್ಯೆ ತೀವ್ರ ವಾಗ್ವಾದ ನಡೆದು ಕೈ ಕೈ ಮಿಲಾಯಿಸುವ ಹಂತಕ್ಕೆ ತಲುಪಿದ ಹಿನ್ನೆಲೆಯಲ್ಲಿ ಪೊಲೀಸರು ಲಘು ಲಾಠಿ ಪ್ರಹಾರ ನಡೆಸಿ, ಗುಂಪು ಚದುರಿಸಿ ಪರಿಸ್ಥಿತಿ ಹತೋಟಿಗೆ ತಂದಿದ್ದರೂ ಸಂಜೆಯವರೆಗೂ ಅಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಯಿತು.
ಗಜೇಂದ್ರಗಡ ಪಟ್ಟಣದಲ್ಲಿ ಶ್ರೀಕಾಂತ ಎನ್ನುವ ವ್ಯಕ್ತಿ ಬೇರೊಬ್ಬರ ಹೆಸರಿನಲ್ಲಿ ಮತದಾನಕ್ಕೆ ಬಂದ ವೇಳೆಯಲ್ಲಿ ಬೂತ್‌ನಲ್ಲಿದ್ದ ವಿವಿಧ ಪಕ್ಷಗಳ ಏಜೆಂಟರು ಆಕ್ಷೇಪ ವ್ಯಕ್ತಪಡಿಸಿದ್ದು, ಈ ವೇಳೆ ಮಾಜಿ ಸಚಿವ ಕಳಕಪ್ಪ ಬಂಡಿ ಹಾಗೂ ಚುನಾವಣಾಧಿಕಾರಿಯ ಮಧ್ಯೆ ತೀವ್ರ ಮಾತಿನ ಚಕಮಕಿ ನಡೆದ ಘಟನೆಯೂ ಜರುಗಿದೆ. ನಂತರ ನಕಲಿ ಮತದಾನಕ್ಕೆ ಯತ್ನಿಸಿದ ಶ್ರೀಕಾಂತನನ್ನು ಬಂಧಿಸಿದ ಪೊಲೀಸರು ವಿಚಾರಣೆ ಪೂರ್ಣಗೊಳಿಸುವವರೆಗೂ ಮತದಾನ ಸ್ಥಗಿತಗೊಂಡು ನಂತರ ಪ್ರಾರಂಭವಾದ ಘಟನೆ ಜರುಗಿದೆ.
ಜಿಲ್ಲೆಯ ಲಕ್ಷ್ಮೇಶ್ವರ ಸಮೀಪದ ಬಾಲೇಹೊಸೂರು ಗ್ರಾಮದ 70 ಜನರು ಬೆಳಗ್ಗೆ ನಾವು ಮತದಾನ ಮಾಡುವುದಿಲ್ಲ, ಕೆರೆ ಒತ್ತುವರಿ ವಿಷಯವಾಗಿ ಕೆಲ ಅಧಿಕಾರಿಗಳ ಧೋರಣೆ ಖಂಡಿಸಿ ಮತದಾನ ಬಹಿಷ್ಕರಿಸಿದ್ದರು. ಇದನ್ನು ಗಮನಿಸಿದ ಮಾಜಿ ಶಾಸಕ ಜಿ.ಎಸ್. ಗಡ್ಡದೇವರಮಠ ಅವರ ಮಧ್ಯೆಸ್ಥಿಕೆಯಲ್ಲಿ ಬಗೆಹರಿಸಿದ ನಂತರ ಮತದಾನ ಮಾಡಿದರು.  ಗದಗ ಬೆಟಗೇರಿ ಅವಳಿ ನಗರದ ದಾಸರ ಓಣಿಯಲ್ಲಿಯೂ ಮತದಾನಕ್ಕೆ ಬರುವ ವಿಷಯವಾಗಿಯೇ ಕೆಲಹೊತ್ತು ಗೊಂದಲದ ವಾತಾವರಣ ನಿರ್ಮಾಣವಾಗಿತ್ತು. ನಂತರ ಮಧ್ಯೆ ಪ್ರವೇಶಿಸಿದ ಪೊಲೀಸರು ಪರಿಸ್ಥಿತಿ ತಿಳಿಗೊಳಿಸಿದ ನಂತರ ಮತದಾನ ಪ್ರಾರಂಭವಾಯಿತು. ಬೆಟಗೇರಿಯ ನರಸಾಪುರ ಭಾಗದಲ್ಲಿ ಮತದಾರರಿಗೆ ಹಣ ಹಂಚುತ್ತಾರೆ ಎನ್ನುವ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ ಚುನಾವಣಾಧಿಕಾರಿಗಳು ಪರಿಶೀಲನೆ ನಡೆಸಿದ ಘಟನೆ ಜರುಗಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.