ಕಡಲೆಗೆ ಬೆಂಬಲ ಬೆಲೆ ಘೋಷಿಸಿ
ಕನ್ನಡಪ್ರಭ ವಾರ್ತೆ, ಗದಗ, ಜ. 7
ಗದಗ ಜಿಲ್ಲೆಯಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಬೆಳೆದ ಕಡಲೆ ಬೆಳೆಗೆ ಕೂಡಲೇ ಬೆಂಬಲ ಬೆಲೆ ಘೋಷಿಸಿ ಸರ್ಕಾರ ಖರೀದಿ ಮಾಡಿಕೊಳ್ಳಲು ವ್ಯವಸ್ಥೆ ಕಲ್ಪಿಸಬೇಕೆಂದು ಒತ್ತಾಯಿಸಿ ಸೋಮವಾರ ಗದಗ ಜಿಲ್ಲಾ ಬಿಜೆಪಿ ರೈತ ಮೋರ್ಚಾಯಿಂದ ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿಗೆ ಮನವಿ ಸಲ್ಲಿಸಲಾಯಿತು.
ಗದಗ ಜಿಲ್ಲೆಯ ರೋಣ, ನರಗುಂದ ಹಾಗೂ ಗದಗ ತಾಲೂಕುಗಳಲ್ಲಿ ರೈತರು ಶೇ. 60ರಷ್ಟು ಕಡಲೆ ಬೆಳೆ ಬಿತ್ತನೆ ಮಾಡಿದ್ದಾರೆ. ಈಗಾಗಲೇ ರೈತರು ಮಾರುಕಟ್ಟೆಗೆ ಕಡಲೆ ತರಲು ಪ್ರಾರಂಭಿಸಿದ್ದು, ಮಾರುಕಟ್ಟೆ ಬೆಲೆ ತೀವ್ರ ಕುಸಿತ ಕಂಡಿರುವುದು ರೈತರಿಗೆ ದಿಕ್ಕು ತೋಚದಂತಾಗಿದೆ.
ರೈತರು ಸಾಲ ಮಾಡಿ ಹೆಚ್ಚಿನ ಬೆಲೆಕೊಟ್ಟು ಬಿತ್ತನೆ ಬೀಜ ಹಾಗೂ ಗೊಬ್ಬರ ತಂದು ಬಿತ್ತಿದ ನಂತರ ಮಾರುಕಟ್ಟೆಗೆ ತರುವಷ್ಟರಲ್ಲಿ ಕಡಲೆ ಬೆಳೆ ಬೆಲೆ ಧಿಡೀರ್ ಪಾತಾಳಕ್ಕೆ ಇಳಿದಿರುತ್ತದೆ. ಇದರಿಂದ ರೈತನಿಗೆ ಗಾಯದ ಮೇಲೆ ಬರೆ ಎಳದಂತಾಗುತ್ತದೆ.
ಆದ್ದರಿಂದ ಕಡಲೆ ಬೆಳೆಗೆ ಪ್ರತಿ ಕ್ವಿಂಟಲ್ಗೆ ರು. 8 ಸಾವಿರ ನಿಗದಿ ಮಾಡಿ ಬೆಂಬಲ ಬೆಲೆ ಘೋಷಿಸಿ ಖರೀದಿ ಮಾಡುವ ಪ್ರಕ್ರಿಯೆ ಕೂಡಲೇ ಪ್ರಾರಂಭಿಸಿ ರೈತರಿಗೆ ಅನುಕೂಲ ಮಾಡಿಕೊಡಬೇಕು.
ಒಣಮೆಣಸಿನಕಾಯಿ ಬೆಲೆಯೂ ತೀವ್ರ ಕುಸಿತ ಕಂಡಿದ್ದು, ಈ ಬೆಳೆಗೂ ಬೆಂಬಲ ಬೆಲೆ ಘೋಷಿಸಿದಲ್ಲಿ ರೈತರಿಗೆ ಅನುಕೂಲ ಕಲ್ಪಿಸಿದಂತಾಗುತ್ತದೆ. ಅದೇ ರೀತಿ ಮಾರುಕಟ್ಟೆಯಲ್ಲಿ ಅಸ್ಥಿರತೆಯಲ್ಲಿರುವ ರೈತರ ಉತ್ಪನ್ನಗಳ ಧಾರಣೆಯಲ್ಲಿ ಸ್ಥಿರತೆ ಕಾಪಾಡಿಕೊಳ್ಳುವಲ್ಲಿ ಸೂಕ್ತ ಕ್ರಮ ಕೈಗೊಳ್ಳಬೇಕು. ಇಲ್ಲದಿದ್ದರೆ ರೈತರು ಬೀದಿಗಳಿದು ಪ್ರತಿಭಟನೆ ಮಾಡುವ ಪರಿಸ್ಥಿತಿ ನಿರ್ಮಾಣವಾಗುವುದರಲ್ಲಿ ಸಂದೇಹವಿಲ್ಲ ಎಂದು ಮನವಿಯಲ್ಲಿ ತಿಳಿಸಿದೆ.
ಈ ಸಂದರ್ಭದಲ್ಲಿ ಗದಗ ಜಿಲ್ಲೆ ಬಿಜೆಪಿ ರೈತ ಮೋರ್ಚಾದ ಅಧ್ಯಕ್ಷ ಬಿ.ಎಸ್. ಚಿಂಚಳ್ಳಿ, ಪ್ರಧಾನ ಕಾರ್ಯದರ್ಶಿ ನಿಂಗಪ್ಪ ಗದಗ, ನರಗುಂದ ಹಾಗೂ ರೋಣ ತಾಲೂಕಿನ ರೈತರು ಪಾಲ್ಗೊಂಡಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

