ಸಿಎಂರಿಂದ ಮೌಲ್ಯಗಳಿಗೆ ಚ್ಯುತಿ ತರುವ ಯತ್ನ
ಕನ್ನಡಪ್ರಭ ವಾರ್ತೆ, ಗದಗ, ಜ. 12
ಪ್ರಗತಿಪರತೆಯ ಮುಖವಾಡ ಹೊತ್ತ ಮುಖ್ಯಮಂತ್ರಿ ಸಿದ್ದರಾಮಯ್ಯ ಕಾರ್ಮಿಕ ವಿರೋಧಿ ಕರಾಳ ಎಸ್ಮಾ ಜಾರಿಯ ಮೂಲಕ ಪ್ರಜಾಸತ್ತಾತ್ಮಕ ಮೌಲ್ಯಗಳಿಗೆ ಚ್ಯುತಿ ತರುವ ಪ್ರಯತ್ನ ನಡೆಸುತ್ತಿದ್ದಾರೆ ಎಂದು ಸಿಐಟಿಯುನ ರಾಜ್ಯ ಕಾರ್ಯಕಾರಿಣಿ ಮಂಡಳಿಯ ಸದಸ್ಯೆ ಎಸ್. ವರಲಕ್ಷ್ಮೀ ದೂರಿದರು.
ಅವರು ಭಾನುವಾರ ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಜ. 23ರಂದು ಕಾರ್ಮಿಕ ವಿರೋಧಿ ಕರಾಳ ಎಸ್ಮಾ, ಅಗತ್ಯ ವಸ್ತುಗಳ ಬೆಲೆ ಏರಿಕೆ ವಿರೋಧಿಸಿ ಮತ್ತು ಕನಿಷ್ಠ ರು. 10 ಸಾವಿರ ವೇತನಕ್ಕಾಗಿ ಆಗ್ರಹಿಸಿ ಮತ್ತು 45ನೇ ಭಾರತೀಯ ಕಾರ್ಮಿಕ ಸಮ್ಮೇಳನದ ಶಿಫಾರಸುಗಳ ಸಮರ್ಪಕ ಜಾರಿಗೆ ಆಗ್ರಹಿಸಿ ವಿಧಾನಸೌಧ ಮುತ್ತಿಗೆ, ಬೃಹತ್ ಕಾರ್ಮಿಕರ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ. ಜಾಗತೀಕರಣ ಹಾಗೂ ಉದಾರೀಕರಣ ನೀತಿಗಳ ಭಾಗವಾಗಿ ಸಂಘಟಿತ ಮತ್ತು ಅಸಂಘಟಿತ ವಲಯಗಳ ಕಾರ್ಮಿಕರ ಕಾನೂನುಗಳನ್ನು ನಿಯಮಾನುಸಾರ ಜಾರಿಮಾಡಲು ಸರ್ಕಾರಗಳು ಹಿಂದೇಟು ಹಾಕುತ್ತಿವೆ. ಕಾರ್ಮಿಕ ವರ್ಗದ ಶೋಷಣೆ ನಿರಂತರವಾಗಿ ನಡೆಯುತ್ತಿದೆ. ರಾಜ್ಯದಲ್ಲಿ 3 ಕೋಟಿ 50 ಲಕ್ಷ ಕಾರ್ಮಿಕರು ಕಾರ್ಯನಿರ್ವಹಿಸುತ್ತಿದ್ದು, ಇದರಲ್ಲಿ 3 ಕೋಟಿ ಕಾರ್ಮಿಕರು ಅಸಂಘಟಿತ ವಲಯದಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ.
ಶ್ರಮಿಕ ವರ್ಗದ ಸ್ವರೂಪ ಇತ್ತೀಚೆಗೆ ವಿಭಜನೆಯಾಗುತ್ತಿದ್ದು, ಸರ್ಕಾರದ ವಿವಿಧ ಇಲಾಖೆಗಳಲ್ಲಿ ಶೇ. 70ರಷ್ಟು ಗುತ್ತಿಗೆ ಆಧಾರದಲ್ಲಿ ಕಾರ್ಯ ನಡೆಸಲಾಗುತ್ತಿದೆ. ಖಾಸಗಿ ವಲಯದಲ್ಲಿ ಶೇ. 50ರಷ್ಟು ಗುತ್ತಿಗೆ ಆಧಾರಿತ ಕಾರ್ಮಿಕರು ಕಾರ್ಯ ಕೈಗೊಳ್ಳುತ್ತಿದ್ದು, ಇದು ಮೂಲಮಾಲೀಕರು ಮತ್ತು ಶ್ರಮಿಕ ವರ್ಗದ ಜನರಲ್ಲಿ ಅಂತರಕ್ಕೆ ಕಾರಣವಾಗಿದೆ. ಈ ರೀತಿ ಕಾರ್ಯನಿರ್ವಹಿಸುವ ಕಾರ್ಮಿಕರಿಗೆ ಯಾವುದೇ ರೀತಿಯ ಕಾನೂನು ಅನ್ವಯವಾಗುತ್ತಿಲ್ಲ. ಅಗತ್ಯ ವಸ್ತುಗಳು ಸೇರಿದಂತೆ ಪೆಟ್ರೋಲ್, ಡೀಸೆಲ್, ಅಡುಗೆ ಅನಿಲ ದರಗಳು ನಿರಂತರವಾಗಿ ಏರುತ್ತಿದ್ದು, ಸೇವಾ ಭದ್ರತೆ, ಕನಿಷ್ಠ ಕೂಲಿ ಇಲ್ಲದೇ ಕಾರ್ಮಿಕ ವರ್ಗ ಶೋಷಣೆಗೊಳ್ಳುತ್ತಿದೆ. ರಾಜ್ಯದಲ್ಲಿ ಕಾರ್ಯನಿರ್ವಹಿಸುತ್ತಿರುವ 1.5 ಲಕ್ಷ ಅಂಗನವಾಡಿ ಕೇಂದ್ರಗಳನ್ನು ಖಾಸಗೀಕರಣಕ್ಕೆ ಸರ್ಕಾರ ಚಿಂತನೆ ನಡೆಸಿದ್ದು, ಗದಗ ಸೇರಿದಂತೆ ರಾಜ್ಯದ 12 ಜಿಲ್ಲೆಗಳನ್ನು ಈಗಾಗಲೇ ಈ ಕುರಿತು ಗುರುತಿಸಲಾಗಿದೆ. ಇದರಿಂದಾಗಿ ಸುಮಾರು 55 ಲಕ್ಷ ಅಂಗನವಾಡಿ ಕಾರ್ಯಕರ್ತೆಯರು ತೊಂದರೆಗೊಳಪಡಿಸಿದ್ದಾರೆ. ಈ ಬೆಳವಣಿಗೆ ಆತಂಕಕಾರಿಯಾಗಿದೆ. ಕಾಂಗ್ರೆಸ್ ಸರ್ಕಾರ ಸರ್ವಾಧಿಕಾರಿ ಧೋರಣೆಯ ಮೂಲಕ ಬೆಳಗಾವಿ ಅಧಿವೇಶನದಲ್ಲಿ ಕರಾಳ ಎಸ್ಮಾಗೆ ಒಪ್ಪಿಗೆ ನೀಡಿದೆ. ಈ ಎಲ್ಲ ಕಾರಣಗಳನ್ನು ಗಮನದಲ್ಲಿಟ್ಟುಕೊಂಡು ಸಂಘಟನೆ ಕಾರ್ಮಿಕರೊಂದಿಗೆ ಬೃಹತ್ ಪ್ರತಿಭಟನೆ ನಡೆಸಲು ನಿರ್ಧರಿಸಿದ್ದು, ವಿಧಾನಸೌಧಕ್ಕೆ ಮುತ್ತಿಗೆ ಹಾಕುವ ಮೂಲಕ ಸರ್ಕಾರಕ್ಕೆ ಶ್ರಮಿಕ ವರ್ಗದ ಅನಾನುಕೂಲತೆಗಳ ಕುರಿತು ಮನನ ಮಾಡುವ ಕಾರ್ಯ ನಡೆಯಲಿದೆ ಎಂದರು. ಸಿಐಟಿಯು ಜಿಲ್ಲಾಧ್ಯಕ್ಷ ಎಂ.ಎಸ್. ಹಡಪದ, ಬಸವರಾಜ ಮಂತೂರ, ಮಾಗುಂಡಪ್ಪ ಅಂಗಡಿ, ಮಾರುತಿ ಚಿಟಗಿ, ಯಶೋದಾ ಬೆಟಗೇರಿ, ಪುಷ್ಪಾ ಚವ್ಹಾಣ, ಶಾಂತಾ ಜಾವೂರ, ಪೀರು ರಾಠೋಡ ಮುಂತಾದವರು ಉಪಸ್ಥಿತರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

