ಮಹಿಳೆ, ಮಕ್ಕಳ ಅಕ್ರಮ ಸಾಗಾಟ ತಡೆಯಿರಿ
ಕನ್ನಡಪ್ರಭ ವಾರ್ತೆ, ಮುಂಡರಗಿ, ಜ. 25
ಇತ್ತೀಚಿನ ದಿನಗಳಲ್ಲಿ ಮಾನವ ಸಾಗಾಣಿಕೆ ಹೆಚ್ಚಿನ ಪ್ರಮಾಣದಲ್ಲಿ ನಡೆಯುತ್ತಿದ್ದು, ಮಹಿಳೆಯರನ್ನು ಹಾಗೂ ಮಕ್ಕಳನ್ನು ಹೆಚ್ಚು ಮಾರಾಟ ಮಾಡಲಾಗುತ್ತಿದೆ. ಇದನ್ನು ತಡೆಗಟ್ಟುವಲ್ಲಿ ಎಲ್ಲರೂ ಒಂದಾಗಿ ಹೋರಾಟ ಮಾಡಬೇಕು ಎಂದು ಶಿರಹಟ್ಟಿ ಶಾಸಕ ರಾಮಕೃಷ್ಣ ದೊಡ್ಡಮನಿ ಹೇಳಿದರು.
ಅವರು ಶನಿವಾರ ಪಟ್ಟಣದ ಗಾಂಧಿ ಭವನದಲ್ಲಿ ಮಹಿಳಾ ಮತ್ತ ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆ ಮುಂಡರಗಿ ಇವುಗಳ ಆಶ್ರಯದಲ್ಲಿ ಮಹಿಳೆಯರು ಹಾಗೂ ಮಕ್ಕಳ ಅಕ್ರಮ ಸಾಗಾಣಿಕೆ ತಡೆ ಬೃಹತ್ ಆಂದೋಲನ ಉದ್ಘಾಟಿಸಿ ಮಾತನಾಡಿದರು.
ಜಿಪಂ ಸದಸ್ಯ ಹೇಮಗಿರೀಶ ಹಾವಿನಾಳ ಮಾತನಾಡಿ, ಇಂದು ಮಹಿಳೆಯರು ಎಲ್ಲ ರಂಗದಲ್ಲಿಯೂ ಪುರುಷರಷ್ಟೇ ಸಮನಾಗಿ ಕಾರ್ಯನಿರ್ವಹಿಸುತ್ತಿದ್ದು, ತೊಟ್ಟಿಲು ತೂಗುವ ಕೈ ಜಗತ್ತನ್ನು ಆಳಬಲ್ಲದು ಎಂಬುದನ್ನು ಸಾಬೀತು ಮಾಡಿದ್ದಾರೆ. ವಿವಿಧ ಸರ್ಕಾರಿ ಇಲಾಖೆಗಳಲ್ಲಿ ಮಹಿಳೆಯರಿಗಾಗಿ, ಹಿಂದುಳಿದ ಹಾಗೂ ಅಲ್ಪಸಂಖ್ಯಾತ ಮಹಿಳೆಯರಿಗಾಗಿ ಅನೇಕ ಸಹಾಯ, ಸೌಲಭ್ಯಗಳಿದ್ದು, ಅವುಗಳು ಸರಿಯಾಗಿ ತಲುಪದೇ ಇದ್ದಲ್ಲಿ ತಮ್ಮ ಹಾಗೂ ಶಾಸಕರ ಗಮನಕ್ಕೆ ತರಬೇಕು. ಗರ್ಭಿಣಿಯರಿಗೆ ನೀಡುವ ಆಹಾರದಲ್ಲಿ ಗುಣಮಟ್ಟದ ಕೊರತೆ ಕಂಡುಬಂದಲ್ಲಿ ಹಾಗೂ ಯಾರಿಂದಲಾದರೂ ದಬ್ಬಾಳಿಕೆ ದೌರ್ಜನ್ಯಗಳಾದಲ್ಲಿ ಕೂಡಲೇ ತಮ್ಮ ಗಮನಕ್ಕೆ ತರುವಂತೆ ತಿಳಿಸಿದರು.
ತಾಪಂ ಸದಸ್ಯ ರಾಮಾಂನೇಯರಾಜು ಪೆನ್ಮತ್ಸ, ಶೆಟ್ಟರ, ಕೆ.ಎ.ಅಕ್ಕಮಹಾದೇವಿ, ತಾಲೂಕು ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಎ. ರಡ್ಡೇರ, ಜಯಮ್ಮ ಯಲಭೋವಿ, ಹನುಮಮ್ಮ ಕರಿಗಾರ, ಶರಣು ಗೋಗೇರಿ ಮುಂತಾದವರು ಉಪಸ್ಥಿತರಿದ್ದರು.
ಕೊತಬಾಳದ ಅರುಣೋದಯ ಕಲಾತಂಡದಿಂದ ಮಹಿಳೆ ಮತ್ತು ಮಕ್ಕಳ ಸಾಗಾಣಿಕೆಯನ್ನು ತಡೆಗಟ್ಟುವ ಕುರಿತು ಜಾಗೃತಿ ಗೀತೆಗಳನ್ನು ಪ್ರಸ್ತುತ ಪಡಿಸಲಾಯಿತು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ನಡೆಸಿದ ಕಾರ್ಯಕ್ರಮಗಳಲ್ಲಿ ವಿಜೇತರಾದ ವಿದ್ಯಾರ್ಥಿ, ವಿದ್ಯಾರ್ಥಿನಿಯರಿಗೆ ಬಹುಮಾನ ವಿತರಿಸಲಾಯಿತು. ಸಿಡಿಪಿಒ ಶಾರದಮ್ಮ ವಾರದ ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿದರು. ಅವಿನಾಶ ಗೋಡಕಿಂಡಿ ನಿರೂಪಿಸಿದರು. ಬಿಇಒ ಎಂ.ಎ. ರಡ್ಡೇರ ವಂದಿಸಿದರು.
ಮೆರವಣಿಗೆ: ಕಾರ್ಯಕ್ರಮಕ್ಕೂ ಪೂರ್ವದಲ್ಲಿ ಇಲ್ಲಿನ ಪುರಸಭೆ ಆವರಣದಿಂದ ಜಾಗೃತ ಜಾಥಾ ಜರುಗಿತು. ಶಾಸಕ ರಾಮಕೃಷ್ಣ ದೊಡ್ಡಮನಿ ಜಾಥಾಕ್ಕೆ ಚಾಲನೆ ನೀಡಿದರು. ಜಿಪಂ ಸದಸ್ಯ ಹೇಮಗಿರೀಶ ಹಾವಿನಾಳ ಹಾಗೂ ಸಿಡಿಪಿಒ ಬಿಇಒ, ಶಿಕ್ಷಕರು, ಮಕ್ಕಳು ಜಾಥಾದಲ್ಲಿ ಪಾಲ್ಗೊಂಡಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

