ಗದಗ

ಸರ್ಫೇಸ್ ವಾಟರ್ ಪೂರೈಸಲು ರು. 45 ಸಾವಿರ ಕೋಟಿ ಯೋಜನೆ

Published On :

ಕನ್ನಡಪ್ರಭ ವಾರ್ತೆ, ಗದಗ, ಜು. 5
ಅಂತರ್ಜಲದಲ್ಲಿ ಆರೋಗ್ಯಕ್ಕೆ ಹಾನಿಕಾರಕ ವಸ್ತುಗಳು ಪತ್ತೆಯಾಗುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದ ಜನತೆಗೆ ಸರ್ಫೇಸ್ ವಾಟರ್ (ಭೂಮಿ ಮೇಲ್ಮಟ್ಟದ ನೀರು) ಪೂರೈಕೆ ಮಾಡಲು ಸರ್ಕಾರ ರು. 45 ಸಾವಿರ ಕೋಟಿ ಯೋಜನೆ ರೂಪಿಸಿದ್ದು, ಶೀಘ್ರದಲ್ಲಿ ಕೇಂದ್ರ ಸರ್ಕಾರದೊಂದಿಗೆ ಚರ್ಚಿಸಲಾಗುವುದು ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಎಚ್.ಕೆ. ಪಾಟೀಲ ಹೇಳಿದರು.
ತಾಲೂಕಿನ ಮುಳಗುಂದ ಪ್ರವಾಸಿ ಮಂದಿರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವರು, ಯೋಜನೆಯ ಪ್ರಾಥಮಿಕ ವರದಿ ಸಿದ್ಧವಾಗಿದೆ. ರಾಜ್ಯದಲ್ಲಿ ಕುಡಿವ ನೀರಿನ ಸಮಸ್ಯೆ ನೀಗಿಸುವ ನಿಟ್ಟಿನಲ್ಲಿ  ಪ್ರಾರಂಭಿಸಲಾಗಿದ್ದ ಟೋಲ್ ಫ್ರೀ ಸಂಖ್ಯೆಗೆ ದಾಖಲಾಗಿರುವ 2700 ದೂರುಗಳಲ್ಲಿ 1900ನ್ನು ಇತ್ಯರ್ಥಪಡಿಸಿದ್ದು, ಇನ್ನುಳಿದ ದೂರುಗಳು ವಿವಿಧ ಹಂತದಲ್ಲಿದ್ದು, ಸದ್ಯದಲ್ಲಿಯೇ ವಿಲೇವಾರಿ ಮಾಡಲಾಗುವುದು ಎಂದರು.
ಕಳೆದ ಸಾಲಿನಲ್ಲಿ ರಾಜ್ಯದಲ್ಲಿ 6 ಲಕ್ಷ ಶೌಚಾಲಯ ನಿರ್ಮಾಣದ ಗುರಿಯಿತ್ತು. ಒಟ್ಟು 5.45 ಲಕ್ಷ ಶೌಚಾಲಯ ನಿರ್ಮಿಸಲಾಗಿದೆ. ರಾಜ್ಯದಲ್ಲಿ 1 ಸಾವಿರ ಸಾರ್ವಜನಿಕ ಶೌಚಾಲಯದ ಸಮುಚ್ಚಯ ನಿರ್ಮಿಸಲು ಇಲಾಖೆ ವಿಶೇಷ ಗಮನ ನೀಡಿದ್ದು, ಇವು ರಾಜ್ಯದಲ್ಲೇ ಮಾದರಿಯಾಗಲಿವೆ. ಯಶಸ್ಸಿಗೆ ಸಾರ್ವಜನಿಕರ ಸಹಕಾರ ಅಗತ್ಯ ಎಂದರು.
ಜಿಲ್ಲೆಯಲ್ಲಿ ಜಿಂಕೆ ಹಾವಳಿ ಕುರಿತಾದ ಪ್ರಶ್ನೆಗೆ ಉತ್ತರಿಸಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ಈ ಕುರಿತು ಚರ್ಚಿಸಿ ಶೀಘ್ರದಲ್ಲೇ ಅಗತ್ಯ ಕ್ರಮ ತೆಗೆದುಕೊಳ್ಳಲಾಗುವುದು. ರಾಜ್ಯದಲ್ಲಿರುವ ಗ್ರಾಪಂ ಆರ್ಥಿಕ ಸಬಲೀಕರಣಕ್ಕಾಗಿ ಸರ್ಕಾರ ವಿಶೇಷ ಚಿಂತನೆ ನಡೆಸಿದ್ದು, ಈ ಕುರಿತು ವಿಧಾನಸಭೆಯಲ್ಲೂ ಚರ್ಚೆಯಾಗಿದೆ. ಗ್ರಾಮೀಣ ಮಟ್ಟದಲ್ಲಿ ತೆರಿಗೆಗೆ ಅರ್ಹತೆ ಇರುವ ಹತ್ತಾರು ವಿಷಯಗಳನ್ನು ಗುರುತಿಸಲಾಗಿದ್ದು ಶೀಘ್ರದಲ್ಲಿಯೇ ಇದಕ್ಕೆ ಚಾಲನೆ ದೊರೆಯಲಿದೆ. ಗ್ರಾಪಂಗಳಿಗೆ ಬೇಕಾಗುವ ಅಗತ್ಯ ಸಿಬ್ಬಂದಿ ನೇಮಕಾತಿ ಆಗಸ್ಟ್ 1ರೊಳಗೆ ಅಂತಿಮ ಸ್ವರೂಪ ಪಡೆಯಲಿದೆ ಎಂದರು. ಸುದ್ದಿಗೋಷ್ಠಿಯಲ್ಲಿ ಶೇಖಣ್ಣ ಬಡ್ನಿ ಹಾಜರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.