ಗದಗ

ಬಸವೇಶ್ವರ ಮೂರ್ತಿ 3 ತಿಂಗಳಲ್ಲಿ ಲೋಕಾರ್ಪಣೆ: ಸಚಿವ ಪಾಟೀಲ

Published On :

ಕನ್ನಡಪ್ರಭ ವಾರ್ತೆ, ಗದಗ, ಜು. 12
ನಗರದಲ್ಲಿ ನಿರ್ಮಿಸುತ್ತಿರುವ ವಿಶ್ವದ ಅತ್ಯಂತ ಎತ್ತರದ ಬಸವೇಶ್ವರ ಮೂರ್ತಿ ಕಾಮಗಾರಿ ಅಂತಿಮ ಹಂತ ತಲುಪಿದ್ದು, ಮೂರು ತಿಂಗಳಲ್ಲಿ ಲೋಕಾರ್ಪಣೆ ಮಾಡಲಾಗುವುದು ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಚ್.ಕೆ. ಪಾಟೀಲ ಹೇಳಿದರು.
ಇಲ್ಲಿನ ಭೀಷ್ಮ ಕೆರೆ ಆವರಣದಲ್ಲಿ ಶನಿವಾರ ಬಸವೇಶ್ವರ ಮೂರ್ತಿ ನಿರ್ಮಾಣ ಕಾಮಗಾರಿ ಪರಿಶೀಲಿಸಿ, ಸುದ್ದಿಗಾರರ ಜತೆಗೆ ಮಾತನಾಡಿದ ಎಚ್ಕೆ, 117 ಅಡಿ ಎತ್ತರದ ಬಸವೇಶ್ವರ ಮೂರ್ತಿ ನಿರ್ಮಾಣದಿಂದ ಪ್ರವಾಸೋದ್ಯಮ ವಿಭಾಗದಲ್ಲಿ ಗದಗ ಜಿಲ್ಲೆಗೆ ಮತ್ತೊಂದು ಮೈಲುಗಲ್ಲಾಗಲಿದೆ. ಮೂರ್ತಿ ನಿರ್ಮಾಣಕ್ಕೆ ರು. 7.64 ಕೋಟಿ ವೆಚ್ಚ ಮಾಡಲಾಗಿದ್ದು, ಕೆಲ ಅಂತಿಮ ಸಿದ್ಧತೆಗಳು ಆಗಬೇಕಾಗಿದೆ. ಮೂರ್ತಿಯ ವೀಕ್ಷಣೆಗೆ ಆಗಮಿಸುವ ಪ್ರವಾಸಿಗರಿಗೆ ಅನುಕೂಲವಾಗುವ ರೀತಿಯಲ್ಲಿ ವ್ಯೂ ಪಾಯಿಂಟ್‌ಗಳ ನಿರ್ಮಾಣ, ಭೀಷ್ಮ ಕೆರೆಯ ಸಮಗ್ರ ಅಭಿವೃದ್ಧಿಗೆ ರೂಪುರೇಷೆಗಳನ್ನು ಹಾಕಿಕೊಳ್ಳಲಾಗಿದೆ.
ಕೆರೆಯ ಆವರಣದಲ್ಲಿ ಅರಣ್ಯ ಇಲಾಖೆಯಿಂದ ವಿಶೇಷ ತಳಿ ಸಸ್ಯಗಳನ್ನು ಹಾಕುವುದು, ವಿಶೇಷ ಉದ್ಯಾನವನ ನಿರ್ಮಾಣ ಹಾಗೂ ವೀಕ್ಷಣೆಗೆ ಆಗಮಿಸುವ ಪ್ರವಾಸಿಗರಿಗೆ ಅಗತ್ಯ ಸೌಲಭ್ಯಗಳನ್ನು ಕಲ್ಪಿಸುವ ನಿಟ್ಟಿನಲ್ಲಿ ಜಿಲ್ಲಾಧಿಕಾರಿಗಳು ಹಾಗೂ ಲೋಕೋಪಯೋಗಿ ಇಲಾಖೆಯ ಅಧಿಕಾರಿಗಳೊಂದಿಗೆ ಸಭೆ ನಡೆಸಿ ತೀರ್ಮಾನಿಸಲಾಗುವುದು. ಬಸವೇಶ್ವರ ಮೂರ್ತಿಯ ವಿಶಿಷ್ಟತೆ ಹಾಗೂ ಕಾಮಗಾರಿ ವಿಷಯವಾಗಿ ಸಿಎಂ ಸಿದ್ದರಾಮಯ್ಯ ಅವರೊಂದಿಗೆ ಚರ್ಚಿಸಿ ಕ್ರಮ ತೆಗೆದುಕೊಳ್ಳಲಾಗುವುದು ಎಂದರು.
ಪರಿಶೀಲನೆ
ಕಾಮಗಾರಿ ವೀಕ್ಷಣೆ ಮಾಡಿದ ಸಚಿವ ಎಚ್.ಕೆ. ಪಾಟೀಲ, ಮೂರ್ತಿಯ ಬಣ್ಣ ಹಾಗೂ ಆವರಣ ಸುತ್ತಲೂ ಆಗಬೇಕಾಗಿರುವ ಕಾಮಗಾರಿಗಳ ಬಗ್ಗೆ ಅಧಿಕಾರಿಗಳಿಗೆ ಸೂಚನೆ ನೀಡಿದರು. ಜಿಲ್ಲಾಧಿಕಾರಿ ಎನ್.ಎಸ್. ಪ್ರಸನ್ನಕುಮಾರ, ಲೋಕೋಪಯೋಗಿ ಇಲಾಖೆಯ ಬಳ್ಳಾರಿ, ಉಪವಿಭಾಗಾಧಿಕಾರಿ ಐ.ಜೆ. ಗದ್ಯಾಳ, ಗುತ್ತಿಗೆದಾರರು, ಅಧಿಕಾರಿಗಳು ಹಾಜರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.