ಗದಗ

ಕಾಂಗ್ರೆಸ್ ಆಡಳಿತದಿಂದ ಭ್ರಮನಿರಸನ

Published On :

ಕನ್ನಡಪ್ರಭ ವಾರ್ತೆ, ಶಿರಹಟ್ಟಿ, ಜು. 14
ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಕೇವಲ ಒಂದು ವರ್ಷ ಅವಧಿಯಲ್ಲಿಯೇ ಜನತೆಗೆ ಬೇಸರವಾಗಿದ್ದು, ಸರ್ಕಾರದ ಕಾರ್ಯವೈಖರಿ ಬಗ್ಗೆ ಮಾತನಾಡಲು ನಾಚಿಕೆಯಾಗುತ್ತಿದೆ ಎಂದು ರಾಜ್ಯ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಪಿ. ಮುನಿರಾಜುಹೇಳಿದರು.
ಸೋಮವಾರ ತಾಲೂಕಿನ ಬೆಳ್ಳಟ್ಟಿ ಗ್ರಾಮದ ಎಪಿಎಂಸಿ ಸಭಾಂಗಣದಲ್ಲಿ ಏರ್ಪಡಿಸಿದ್ದ ಶಿರಹಟ್ಟಿ ವಿಧಾನಸಭಾ ಮತಕ್ಷೇತ್ರದ ಬಿಜೆಪಿ ಯುವ ಮೋರ್ಚಾ ಕಾರ್ಯಕಾರಿಣಿ ಸಭೆ ಉದ್ಘಾಟಿಸಿ ಮಾತನಾಡಿದರು.
ಹಾಲಿಗೆ ಪ್ರೋತ್ಸಾಹ ಧನ, ಶಾಲಾ ಮಕ್ಕಳ ಶೈಕ್ಷಣಿಕ ಪ್ರವಾಸ, ಶಾದಿಭಾಗ್ಯ ಯೋಜನೆಯಲ್ಲಿ ಮೇಲ್ವರ್ಗ, ಕೆಳವರ್ಗ ಎಂಬ ಜಾತಿ ತೋರಿಸಿ ಒಡೆದು ಆಳುವ ಪದ್ಧತಿಯನ್ನು ಮುಂದುವರಿಸುತ್ತಿದ್ದು, ರಾಜ್ಯದಲ್ಲಿ ಗೂಂಡಾಗಿರಿ ಸಂಸ್ಕೃತಿ ಹೆಚ್ಚಾಗಿದೆ. ಶಾಸಕರು ಪೊಲೀಸರ ಮೇಲೆಯೇ ದಬ್ಬಾಳಿಕೆ ಮಾಡಿ ಅವರ ಆತ್ಮಸ್ಥೈರ್ಯವನ್ನೇ ಕುಗ್ಗಿಸಿದ್ದಾರೆ. ಸಿಎಂ ಮಾತ್ರ ಯಾವುದು ಗಮನಕ್ಕೆ ಬಂದಿಲ್ಲ ಎಂದು ಹೇಳುತ್ತಾ ಅವರ ರಕ್ಷಣೆಗೆ ಮುಂದಾಗಿದ್ದಾರೆ ಎಂದು ಆರೋಪಿಸಿದರು.
ಮಾಜಿ ಸಚಿವ, ಜಿಲ್ಲಾ ಬಿಜೆಪಿ ಅಧ್ಯಕ್ಷ ಕಳಕಪ್ಪ ಬಂಡಿ ಮಾತನಾಡಿ, ಪಕ್ಷದಲ್ಲಿನ ಕಚ್ಚಾಟದಿಂದಾಗಿ ಕಳೆದ ವಿಧಾನಸಭಾ ಚುನಾವಣೆಯಲ್ಲಿ ಪಕ್ಷ ಸೋಲನ್ನು ಕಂಡಿದ್ದು, ಜನತೆ ಅಭಿವೃದ್ಧಿ ಕಾರ್ಯಗಳನ್ನು ಗಮನಿಸದೇ ಮತ ಚಲಾವಣೆ ಮಾಡಿದ್ದಾರೆ. ಈಗ ಅವರಿಗೆ ತಾವು ಮಾಡಿದ ತಪ್ಪಿನ ಅರಿವಾಗಿದೆ. ಈ ಸೋಲಿನಿಂದ ಪಕ್ಷ ಬಲಹೀನವಾಗಿದೆ ಎಂಬುದು ಸುಳ್ಳು. ಕಾರ್ಯಕರ್ತರೇ ಪಕ್ಷದ ದೊಡ್ಡ ಶಕ್ತಿ. ಕೆಲವೇ ತಿಂಗಳಲ್ಲಿ ಗ್ರಾಮ ಪಂಚಾಯಿತಿ ಚುನಾವಣೆ ಬರಲಿದ್ದು, ಪಕ್ಷದ ಅಭ್ಯರ್ಥಿ ಯಾರೇ ಆಗಿರಲಿ ಗೆಲುವಿಗೆ ಶ್ರಮಿಸಬೇಕು ಎಂದು ಕರೆ ನೀಡಿದರು.
ಪಕ್ಷ ಸಂಘಟನೆಯಲ್ಲಿ ತಾಲೂಕಿನ ಜನರು ಚಾಣಾಕ್ಷರು ಎಂದು ಅಟ್ಟಕ್ಕೇರಿಸಿದರಲ್ಲದೆ, ಹಿಂದಿನ ಬಿಜೆಪಿ ಸರ್ಕಾರ ಘೋಷಣೆ ಮಾಡಿದ ಯೋಜನೆಗಳಿಗೆ ಕಾಂಗ್ರೆಸ್‌ನವರು ನಮ್ಮ ಸರ್ಕಾರ ಜಾರಿಗೆ ತಂದ ಯೋಜನೆ ಎಂದು ಜನತೆಗೆ ಮಂಕುಬೂದಿ ಎರಚುವ ಕೆಲಸಕ್ಕೆ ನಿಂತಿದ್ದಾರೆ ಎಂದು ದೂರಿದರು. ಜಿಲ್ಲೆಯ ಪ್ರತಿಯೊಂದು ಸರ್ಕಾರಿ ಕಚೇರಿಯಲ್ಲಿ ಲಂಚದ ಹಾವಳಿ ಹೆಚ್ಚಾಗಿದೆ. ಇದನ್ನು ತಡೆಯುವಲ್ಲಿ ಜಿಲ್ಲೆಯ ಸಚಿವರು ಸಂಪೂರ್ಣ ವಿಫಲರಾಗಿದ್ದಾರೆ ಎಂದು ಆರೋಪಿಸಿದರು.
ಮಾಜಿ ಶಾಸಕ ರಾಮಣ್ಣ ಲಮಾಣಿ, ರಾಜ್ಯ ಬಿಜೆಪಿ ಯುವ ಮೋರ್ಚಾ ಕಾರ್ಯಕಾರಿಣಿ ಸದಸ್ಯ ತಿಮ್ಮರಡ್ಡಿ ಮರಡ್ಡಿ ಮಾತನಾಡಿದರು.
 ಜಿಲ್ಲಾ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ರಾಜಪುರೋಹಿತ, ಜಿಪಂ ಉಪಾಧ್ಯಕ್ಷೆ ಸುನಿತಾ ಹಳ್ಳೆಪ್ಪನವರ, ಸದಸ್ಯರಾದ ಎಂ.ಎಸ್. ದೊಡಗೌಡರ, ಕಮಲವ್ವ ಸಜ್ಜನರ, ಎಂ. ಎಸ್. ಕರಿಗೌಡ್ರ, ಜಿಲ್ಲಾ ಬಿಜೆಪಿ ಎಸ್ಸಿ ಘಟಕದ ಅಧ್ಯಕ್ಷ ಜಾನು ಲಮಾಣಿ, ಗ್ರಾಪಂ ಸದಸ್ಯ ಮೋಹನ ಗುತ್ತೆಮ್ಮನವರ, ಶಿವಾನಂದ ಮೊರಬದ, ಮಹೇಂದ್ರ ಕೌತಾಳ, ದೇವಪ್ಪ ಇಟಗಿ, ಹನುಮಂತ ಬಾಲರಡ್ಡಿ, ನಿಂಗನಗೌಡ ಹರ್ತಿ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.