ಸರ್ಕಾರ ಸತ್ತಿದೆ, ಸಚಿವರು ಕೆಲಸ ಮಾಡುತ್ತಿಲ್ಲ
ಕನ್ನಡಪ್ರಭ ವಾರ್ತೆ, ಗದಗ. ಜು. 22
ರಾಜ್ಯದ ಹಲವಾರು ಜಿಲ್ಲೆಗಳು ಮಳೆ ಕೊರತೆ ಎದುರಿಸುತ್ತಿವೆ. ಕುಡಿವ ನೀರಿಗೆ ಟ್ಯಾಂಕರ್‌ಗಳನ್ನು ಅವಲಂಬಿಸುವಂತಾಗಿದೆ. ರಾಜ್ಯ ಸರ್ಕಾರ ಸತ್ತಿದೆ, ಸರ್ಕಾರದಲ್ಲಿನ ಮಂತ್ರಿಗಳ ಪಂಚೇಂದ್ರಿಯಗಳು ಕೆಲಸ ಮಾಡುತ್ತಿಲ್ಲ ಎಂದು ಬಿಜೆಪಿ ರೈತ ಮೋರ್ಚಾದ ರಾಜ್ಯಾಧ್ಯಕ್ಷ ಆರಗ ಜ್ಞಾನೇಂದ್ರ ಆರೋಪಿಸಿದರು.
ಅವರು ಮಂಗಳವಾರ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. ಸೋಮವಾರ ಜಿಲ್ಲೆಯ ನರಗುಂದಲ್ಲಿ ರೈತ ಹುತಾತ್ಮರ ವೀರಗಲ್ಲಿಗೆ ಮಾಲಾರ್ಪಣೆ ಮಾಡುವ ಮೂಲಕ ರಾಜ್ಯ ಬಿಜೆಪಿ ಬರಗಾಲದ ಕುರಿತು ಅಧ್ಯಯನ ಕೈಗೊಂಡಿದ್ದು, ಸೋಮವಾರದಿಂದ ಧಾರವಾಡ ಮತ್ತು ಗದಗ ಜಿಲ್ಲೆಯಲ್ಲಿ ಅಧ್ಯಯನ ಪ್ರವಾಸ ಮಾಡಲಾಗುತ್ತಿದೆ ಎಂದರು.
ಉತ್ತರ ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಬರ ಪರಿಸ್ಥಿತಿ ಉದ್ಭವಿಸಿದೆ. ಇದುವರೆಗೂ ಇಲ್ಲಿನ ಜನತೆಯ ಆಶೋತ್ತರಗಳಿಗೆ ಸ್ಪಂದಿಸುವ ನಿಟ್ಟಿನಲ್ಲಿ ಆಯಾ ಜಿಲ್ಲಾ ಉಸ್ತುವಾರಿ ಸಚಿವರು ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸುವುದಾಗಲಿ ಅಥವಾ ಪರಿಸ್ಥಿತಿಯ ಕುರಿತು ಕ್ರಮ ತೆಗೆದುಕೊಳ್ಳುವ ಯಾವುದೊಂದು ಕೆಲಸವನ್ನು ಮಾಡದಿರುವುದು ವಿಷಾದನೀಯ. ಬರ ಪರಿಸ್ಥಿತಿ ಕುರಿತು ಪಕ್ಷದ ವತಿಯಿಂದ ಅಧ್ಯಯನ ನಡೆಸಿ ವರದಿ ತಯಾರಿಸಲಾಗುತ್ತಿದ್ದು, ವರದಿಯನ್ನು ಜು. 28ರಂದು ರಾಜ್ಯ ಮತ್ತು ಕೇಂದ್ರ ಸರ್ಕಾರಕ್ಕೆ ಒಪ್ಪಿಸಲಾಗುವುದು. ಬರ ಇರುವ ಜಿಲ್ಲೆಗಳಲ್ಲಿ ಪಕ್ಷದ ರೈತಮೋರ್ಚಾ ಪದಾಧಿಕಾರಿಗಳಿಂದ ಅಧ್ಯಯನ ನಡೆಸಲಾಗುತ್ತಿದೆ. ಈ ಅಧ್ಯಯನ ಆಧರಿಸಿ ವರದಿಯೊಂದನ್ನು ರಚಿಸಿ ಆಯಾ ಜಿಲ್ಲಾಧಿಕಾರಿ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಲಾಗುವುದು ಎಂದರು.
ರಾಜ್ಯಾದ್ಯಂತ ಕೆಇಬಿಗೆ ಮುತ್ತಿಗೆ...
ಕಾಂಗ್ರೆಸ್ ಅಧಿಕಾರ ಬಂದ ತಕ್ಷಣವೇ ರೈತರಿಗೆ ದಿನದಲ್ಲಿ 10 ಗಂಟೆ ತ್ರಿಫೇಸ್ ವಿದ್ಯುತ್ ನೀಡುವ ಭರವಸೆ ನೀಡಿದ್ದರು. ಆದರೆ, ಅಧಿಕಾರಕ್ಕೆ ಬಂದು ಒಂದು ವರ್ಷ ಗತಿಸಿದರೂ ಕನಿಷ್ಠ ಎರಡು ತಾಸು ತ್ರಿಫೇಸ್ ವಿದ್ಯುತ್ ನೀಡಲು ವಿಫಲರಾಗಿದ್ದಾರೆ. ಹೀಗಾಗಿ ಆಗಸ್ಟ್ 4ರಂದು ರಾಜ್ಯದ ಪ್ರತಿ ತಾಲೂಕಿನ ಕೆಇಬಿ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಲಾಗುವದು. ರೈತರ ನೆರವಿಗೆ ಧಾವಿಸುವ ನಿಟ್ಟಿನಲ್ಲಿ ಬಿಜೆಪಿ ಪ್ರತ್ಯೇಕವಾಗಿ ನಡೆಸುತ್ತಿರುವ ಬರ ಪರಿಸ್ಥಿತಿ ಕುರಿತು ಕೇಂದ್ರಕ್ಕೆ ಮನವರಿಕೆ ಮಾಡಲಾಗುವುದು. ಕೇಂದ್ರದ ಮೂಲಕ ರಾಜ್ಯಕ್ಕೆ ಹೆಚ್ಚಿನ ನೆರವು ದೊರಕಿಸುವ ನಿಟ್ಟಿನಲ್ಲಿ ರೈತ ಮೋರ್ಚಾ ಕಾರ್ಯನಿರ್ವಹಿಸಲಿದೆ ಎಂದರು.
ಮಾಜಿ ಶಾಸಕ ಶ್ರೀಶೈಲಪ್ಪ ಬಿದರೂರ, ರೈತ ಮೋರ್ಚಾ ರಾಜ್ಯ ಕಾರ್ಯದರ್ಶಿ ಶಶಿಕಾಂತ ಕುಲಕರ್ಣಿ, ಬಸವಣ್ಣೆಪ್ಪ ಚಿಂಚಲಿ, ಮೋಹನ ಮಾಳಶೆಟ್ಟಿ, ಎಂ.ಎಸ್. ಕರಿಗೌಡ್ರ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

