ಗದಗ

ಎಸ್ಸಿ-ಎಸ್‌ಟಿ ಅನುದಾನ ದುರ್ಬಳಕೆ ಬೇಡ

Published On :

ಕನ್ನಡಪ್ರಭ ವಾರ್ತೆ, ಶಿರಹಟ್ಟಿ, ಜು. 27
ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಜನರ ಕಲ್ಯಾಣಕ್ಕಾಗಿ ಸರ್ಕಾರ ಜಾರಿಗೊಳಿಸಿರುವ ಯೋಜನೆಗಳ ಬಗ್ಗೆ ಅಧಿಕಾರಿಗಳು ಮೊದಲು ಸಮಗ್ರ ಮಾಹಿತಿ ನೀಡಬೇಕು. ಈ ಜನಾಂಗದ ಅಭಿವೃದ್ಧಿಗೆ ಬಂದ ಅನುದಾನ ಅಧಿಕಾರಿಗಳ ಬೇಜವಾಬ್ದಾರಿಯಿಂದ ಸದ್ವಿನಿಯೋಗವಾಗದೇ ದುರ್ಬಳಕೆಯಾಗುತ್ತಿದೆ. ಇದನ್ನು ತಡೆಯುವಲ್ಲಿ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು ಎಂದು ಸಮುದಾಯ ಹಲವು ಮುಖಂಡರು ಆಗ್ರಹಿಸಿದರು.
ಶನಿವಾರ ತಹಸೀಲ್ದಾರ್ ಕಾರ್ಯಾಲಯದ ಸಭಾಂಗಣದಲ್ಲಿ ಕರೆಯಲಾಗಿದ್ದ ತಾಲೂಕು ಮಟ್ಟದ ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗದ ಜನರ ಮೇಲೆ ನಡೆಯುತ್ತಿರುವ ದೌರ್ಜನ್ಯ ತಡೆಗಟ್ಟುವಿಕೆ ಹಾಗೂ ಅಸ್ಪೃಶ್ಯತೆ ಆಚರಣೆ ಕುರಿತು ವಿಚಾರ ಸಂಕಿರಣ ಹಾಗೂ ಕಮ್ಮಟ ಏರ್ಪಡಿಸಲು ಕರೆಯಲಾಗಿದ್ದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದರು.
ಜಾನು ಲಮಾಣಿ, ಹನುಮಂತಪ್ಪ ನಂದೆಣ್ಣವರ, ದೇವಪ್ಪ ಲಮಾಣಿ, ನಾಗರಾಜ ಪೋತರಾಜ, ಫಕೀರೇಶ ಮ್ಯಾಟಣ್ಣವರ ಅಧಿಕಾರಿಗಳೊಂದಿಗೆ ಸಮಸ್ಯೆ ಬಗ್ಗೆ ಚರ್ಚೆ ನಡೆಸಿ ಮಾತನಾಡಿ, ಖೊಟ್ಟಿ ಜಾತಿ ಪ್ರಮಾಣ ಪತ್ರ ನೀಡಿ ಎಸ್ಸಿ ಜನಾಂಗಕ್ಕೆ ದೊರೆಯಬೇಕಾದ ಸೌಲಭ್ಯವನ್ನು ಪಡೆದುಕೊಳ್ಳುತ್ತಿರುವ ಉದಾಹರಣೆಗಳಿವೆ. ನಿಜವಾದ ಫಲಾನುಭವಿ ಯೋಜನೆಯಿಂದ ವಂಚಿತರಾಗುತ್ತಿದ್ದು, ಅಧಿಕಾರಿಗಳು ಗಂಭೀರವಾಗಿ ಪರಿಗಣಿಸಿ ಫಲಾನುಭವಿಗಳಿಗೆ ಲಾಭ ತಟ್ಟುವಂತೆ ಕ್ರಮ ಕೈಗೊಳ್ಳಬೇಕು ಎಂದರು.
ಪಟ್ಟಣದಲ್ಲಿರುವ ಕೆನರಾ ಬ್ಯಾಂಕ್, ಸ್ಟೇಟ್ ಬ್ಯಾಂಕ್, ಗ್ರಾಮೀಣ ವಿಕಾಸ ಬ್ಯಾಂಕ್ ವ್ಯವಸ್ಥಾಪಕರು ( ಮ್ಯಾನೇಜರ್) ಎಸ್ಸಿ, ಎಸ್ಟಿ ಜನಾಂಗದ ಫಲಾನುಭವಿಗಳಿಗೆ ಸಹಾಯಧನದ ಸಾಲ ನೀಡುವಲ್ಲಿ ತಾರತಮ್ಯ ಮಾಡುತ್ತಿದ್ದು, ಈ ಜನಾಂಗದವರಿಗೆ ನೀಡಬೇಕಾದ ಸಹಾಯಧನ ಕೊಳೆಯುತ್ತಿದೆ. ಸಮಯ ನಿಗದಿಪಡಿಸಿಕೊಂಡು ಬ್ಯಾಂಕ್ ಅಧಿಕಾರಿಗಳ ಸಭೆ ಕರೆದು ತಾಕೀತು ಮಾಡಬೇಕು ಎಂದು ಪಪಂ ಅಧ್ಯಕ್ಷ ನಾಗರಾಜ ಲಕ್ಕುಂಡಿ, ಹನುಮಂತಪ್ಪ ಹುಯಿಲಗೋಳ, ಶಿವನಗೌಡ ಪಾಟೀಲ ಒತ್ತಾಯಿಸಿದರು.
ತಾಪಂ ಸ್ಥಾಯಿ ಸಮಿತಿ ಅಧ್ಯಕ್ಷ ಕೋಟೆಪ್ಪ ವರ್ದಿ, ಪರಶುರಾಮ ಮಲ್ಲಾಡದ ಮಾತನಾಡಿದರು.
ಸಭೆಯ ಅಧ್ಯಕ್ಷತೆ ವಹಿಸಿದ್ದ ತಹಸೀಲ್ದಾರ್ ಕೊಟ್ರೇಶ್ವರ ಗಾಳಿ ಮಾತನಾಡಿ, ಪ್ರತಿ ಇಲಾಖೆಗೂ ಈ ಸಮುದಾಯದ ಕಲ್ಯಾಣಕ್ಕಾಗಿ ಬರುವ ಅನುದಾನದ ಬಗ್ಗೆ ಹಾಗೂ ಯೋಗ್ಯ ಮತ್ತು ಅರ್ಹ ಫಲಾನುಭವಿಗಳ ಆಯ್ಕೆ ಮಾಡುವ ಬಗ್ಗೆ ತಿಳಿಸಿ ಒಂದು ವಾರದಲ್ಲಿ ಮಾಹಿತಿ ನೀಡುವುದಾಗಿ ಹೇಳಿದರು.
ಅಹವಾಲುಗಳ ಪಟ್ಟಿ ಮಾಡಿಕೊಂಡಿದ್ದು, ಹಂತಹಂತವಾಗಿ ಬಗೆಹರಿಸುವುದಾಗಿ ಹೇಳಿದರು. ಜತೆಗೆ ಬ್ಯಾಂಕ್ ವ್ಯವಸ್ಥಾಪಕರ ಬಗ್ಗೆ ಕೇಳಿ ಬಂದ ದೂರಿನ ಮೇರೆಗೆ ಜಿಲ್ಲಾಧಿಕಾರಿಗಳ ಮುಖಾಂತರ ಲೀಡ್ ಬ್ಯಾಂಕ್ ವ್ಯವಸ್ಥಾಪಕರ ಗಮನಕ್ಕೆ ತರುವುದಾಗಿ ಭರವಸೆ ನೀಡಿದರು. ಸಭೆಯಲ್ಲಿ  ಹಿರಿಯ ಅಧಿಕಾರಿಗಳು ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.