ಜನಪದ ಸಾಧಕರ ಸಾಕ್ಷ್ಯಚಿತ್ರ ನಿರ್ಮಿಸಲು ಚಿಂತನೆ
ಕನ್ನಡಪ್ರಭ ವಾರ್ತೆ, ಗದಗ, ಜು. 29
ಜನಪದ ಸಾಧಕರ ಸಾಧನೆಗಳು ಹಾಗೂ ಕಲೆ, ಸಾಹಿತ್ಯ ಮತ್ತು ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ಗಣನೀಯ ಸಾಧನೆ ಮಾಡಿದವರ ಕುರಿತು ಸಾಕ್ಷ್ಯಚಿತ್ರ ತಯಾರಿಸಲು ಜಾನಪದ ವಿವಿ ಚಿಂತನೆ ನಡೆಸಿದೆ ಎಂದು ಕರ್ನಾಟಕ ಜಾನಪದ ವಿವಿ ಕುಲಪತಿ ಡಾ. ಅಂಬಳಿಕೆ ಹಿರಿಯಣ್ಣ ಹೇಳಿದರು.
ಅವರು ಮಂಗಳವಾರ ಸಂಜೆ ನಗರದ ತೋಂಟದಾರ್ಯ ಮಠದ ಸಿದ್ದಲಿಂಗೇಶ್ವರ ಕಲ್ಯಾಣ ಮಂಟಪದಲ್ಲಿ ಗ್ರಾಮರಂಗ ಮೂಡಲಪಾಯ ದೊಡ್ಡಾಟ ಸಂಶೋಧನೆ ಮತ್ತು ತರಬೇತಿ ಸಂಸ್ಥೆ ಇಂಗಳಗಿ ಜಾನಪದ ವಿದ್ವಾಂಸ ಡಾ. ಬಸವರಾಜ ಮಲಶೆಟ್ಟರ್ ಸ್ಮರಣೆಗಾಗಿ ಹಮ್ಮಿಕೊಂಡ ಮೂಡಲಪಾಯ ದೊಡ್ಡಾಟ ರಂಗ ತರಬೇತಿ ಶಿಬಿರದ ಸಮಾರೋಪ ಸಮಾರಂಭದ ಅಧ್ಯಕ್ಷತೆ ವಹಿಸಿಕೊಂಡು ಅವರು ಮಾತನಾಡಿದರು.
ಎಲ್ಲ ಕಲೆಗಳ ಪರಿಕರಗಳು ಹಾಗೂ ಸಾಹಿತ್ಯ ಉಳಿಸುವ ನಿಟ್ಟಿನಲ್ಲಿ ವಿಶ್ವವಿದ್ಯಾಲಯ ವಸ್ತು ಸಂಗ್ರಹಾಲಯ ನಿರ್ಮಾಣ ಮಾಡುತ್ತಿದೆ. ಇಲ್ಲಿ ಹಸ್ತಪ್ರತಿ, ಪ್ರಸಂಗ ಸಾಹಿತ್ಯ, ಅಳಿದುಹೋಗುವ ಅಂಚಿನಲ್ಲಿರುವ ಸಾಹಿತ್ಯವನ್ನು ಸಂಗ್ರಹಿಸಿ ಮುಂದಿನ ಪೀಳಿಗೆಗೆ ಅನುಕೂಲ ಒದಗಿಸುವ ನಿಟ್ಟಿನಲ್ಲಿ ಸಂಗ್ರಹಾಲಯ ನಿರ್ಮಾಣವಾಗಲಿದೆ. ಪಾರಂಪರಿಕವಾಗಿರುವ ಕಲೆ, ಸಾಹಿತ್ಯ ಮತ್ತು ಸಂಸ್ಕೃತಿ ಉಳಿಸಲು ಗಂಭೀರ ಪ್ರಯತ್ನ ನಡೆಸಬೇಕಾಗಿದೆ. ಯಾವುದೇ ಅಪೇಕ್ಷೆ, ಸೌಲಭ್ಯಕ್ಕಾಗಿ ಕಾಯದೇ ಸ್ವಯಂ ಸಂರಕ್ಷಿಸಲು ಮುಂದಾಗಬೇಕು. ಅಂದಾಗ ಮಾತ್ರ ಕಲೆ ಉಳಿಯಲು ಸಾಧ್ಯ ಎಂದರು.
ಜಾನಪದ ವಿದ್ವಾಂಸ ಡಾ.ಕೆ.ಆರ್. ದುರ್ಗಾದಾಸ ಮಾತನಾಡಿ, ಗ್ರಾಮೀಣ ಸಂಸ್ಕೃತಿಯನ್ನು ಬೆಳೆಸುವ ನಿಟ್ಟಿನಲ್ಲಿ ಪ್ರಯತ್ನಗಳು ನಡೆಯಬೇಕಿದೆ ಎಂದರು. ಶಿರಹಟ್ಟಿ ಶಾಸಕ ರಾಮಕೃಷ್ಣ ದೊಡ್ಡಮನಿ ಮಾತನಾಡಿ, ಕಲೆ ಉಳಿಸುವ ನಿಟ್ಟಿನಲ್ಲಿ ಆಗಬೇಕಾಗಿರುವ ಪ್ರಯತ್ನದ ಬಗ್ಗೆ ತಿಳಿಸಿದರು. ಕವಿವಿ ಗಾಂಧಿ ಅಧ್ಯಯನ ಪೀಠದ ಮುಖ್ಯಸ್ಥ ಡಾ. ಎಸ್.ಎಸ್. ಶೆಟ್ಟರ್, ಡಾ. ಸಿದ್ಧನಗೌಡ ಪಾಟೀಲ, ಆಕಾಶವಾಣಿ ಕಾರ್ಯಕ್ರಮ ನಿರ್ವಾಹಕ ಚೆನ್ನಪ್ಪ ಬೆಂಗೇರಿ, ಮೈಸೂರು ವಿವಿ ವಿಶ್ರಾಂತ ಪ್ರಾಧ್ಯಾಪಕ ಡಾ. ಡಿ.ಕೆ. ರಾಜೇಂದ್ರ, ಮಾಜಿ ಶಾಸಕ ಶ್ರೀಶೈಲಪ್ಪ ಬಿದರೂರ ಮಾತನಾಡಿದರು.
ಶಿಬಿರಾರ್ಥಿಗಳಿಗೆ, ಶಿಬಿರದಲ್ಲಿ ಪ್ರಾತ್ಯಕ್ಷಿಕೆ ನೀಡಿದ ತಂಡಗಳಿಗೆ ಪ್ರಶಸ್ತಿ ಪತ್ರ ನೀಡಿ ಗೌರವಿಸಲಾಯಿತು. ಅಡಿವೆಯ್ಯಸ್ವಾಮಿ ಹಿರೇಮಠ ಪ್ರಾರ್ಥಿಸಿದರು. ವೀರೇಶ ಬಡಿಗೇರ ಸ್ವಾಗತಿಸಿದರು. ಗ್ರಾಮರಂಗದ ಸಂಸ್ಥಾಪಕ ಎಂ. ಎಸ್. ಮಾಳವಾಡ ಪ್ರಾಸ್ತಾವಿಕ ಮಾತನಾಡಿದರು. ಪ್ರೊ. ಕಿಶೋರಬಾಬು ನಾಗರಕಟ್ಟಿ ನಿರೂಪಿಸಿದರು. ಡಾ. ಅನ್ನದಾನಿ ಹಿರೇಮಠ ವಂದಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

