ಪ್ಲಾಸ್ಟರ್ ಆಫ್ ಪ್ಯಾರೀಸ್ ಮೂರ್ತಿ ನಿಷೇಧಕ್ಕೆ ಆಗ್ರಹಿಸಿ 5ರಂದು ಧರಣಿ
ಗದಗ: ಪರಿಸರಕ್ಕೆ ಮಾರಕವಾಗುವ ಪ್ಲಾಸ್ಟರ್ ಆಫ್ ಪ್ಯಾರೀಸ್ನ ಗಣೇಶ ವಿಗ್ರಹಗಳ ತಯಾರಿಕೆ ಹಾಗೂ ಮಾರಾಟವನ್ನು ಕಡ್ಡಾಯವಾಗಿ ನಿಷೇಧಿಸುವಂತೆ ಆಗ್ರಹಿಸಿ ವಿಶ್ವ ಪರಿಸರ ದಿನವಾದ ಜೂ. 5ರಂದು ಜಿಲ್ಲಾ ಗಣೇಶ ಮೂರ್ತಿ ತಯಾರಕರು ಕುಟುಂಬ ಸಮೇತ ಮಹಾತ್ಮಾ ಗಾಂಧಿ ವೃತ್ತದಲ್ಲಿ ಧರಣಿ ಸತ್ಯಾಗ್ರಹ ನಡೆಸಲಿದ್ದಾರೆ.
ಈ ಕುರಿತು ಸಂಘದ ಕಾರ್ಯಾಲಯದಲ್ಲಿ ಸೋಮವಾರ ಜರುಗಿದ ಸಭೆಯಲ್ಲಿ ಸರ್ವಾನುಮತದಿಂದ ನಿರ್ಣಯ ಅಂಗೀಕರಿಸಲಾಯಿತು.
ಸಭೆಯಲ್ಲಿ ಪಾಲ್ಗೊಂಡಿದ್ದ ಸಂಘದ ಜಿಲ್ಲಾಧ್ಯಕ್ಷ ಮಲ್ಲಿಕಾರ್ಜುನ ಅಣ್ಣಿಗೇರಿ ಮಾತನಾಡಿ, ಪರಿಸರಕ್ಕೆ ಮಾರಕವಾಗುವ ಪ್ಲಾಸ್ಟರ್ ಆಫ್ ಪ್ಯಾರೀಸ್ ಗಣೇಶ ವಿಗ್ರಹಗಳನ್ನು ತಯಾರಿಕೆ ಮತ್ತು ಮಾರಾಟ ಸಂಪೂರ್ಣ ನಿಷೇಧಿಸುವಂತೆ ಆಗ್ರಹಿಸಿ ಕಳೆದ 3 ವರ್ಷಗಳಿಂದ ಜಿಲ್ಲಾಡಳಿತಕ್ಕೆ ಅನೇಕ ಬಾರಿ ಮನವಿ ಸಲ್ಲಿಸಲಾಗಿತ್ತು. ಆದರೆ ಜಿಲ್ಲಾಡಳಿತ ಮಾತ್ರ ಜಾಣ ಕುರುಡುತ ಪ್ರದರ್ಶಿಸುತ್ತಿದೆ ಎಂದು ದೂರಿದರು.
ಒಂದು ಕಡೆ ಪರಿಸರ ದಿನಾಚರಣೆಯ ಹೆಸರಿನಲ್ಲಿ ಅಧಿಕಾರಿಗಳು ಭಾಷಣ ಮಾಡುವ ಮೂಲಕ ಪ್ರಚಾರ ಗಿಟ್ಟಿಸಿಕೊಳ್ಳುತ್ತಾರೆ. ಇನ್ನೊಂದೆಡೆ ಪರಿಸರಕ್ಕೆ ಹಾನಿಯಾಗುವ ಬಗ್ಗೆ ಕ್ರಮ ಕೈಗೊಳ್ಳುತ್ತಿದ್ದಾರೆ. ಈ ಕುರಿತು ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದರೂ ಇತ್ತ ಕಡೆ ಗಮನ ಹರಿಸುತ್ತಿಲ್ಲ. ಅಂದರೆ ಅಧಿಕಾರಿಗಳಿಗೆ ಪರಿಸರದ ಬಗ್ಗೆ ಇರುವ ಕಾಳಜಿ ಎಷ್ಟೆಂದು ತಿಳಿಯುತ್ತದೆ ಎಂದು ಟೀಕಿಸಿದರು.
ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮುತ್ತಣ್ಣ ಭರಡಿ ಮಾತನಾಡಿ, ಪರಿಸರಕ್ಕೆ ನಾಶವಾಗುವ ಪ್ಲಾಸ್ಟರ್ ಆಫ್ ಪ್ಯಾರೀಸ್ ವಿಗ್ರಹಗಳ ಮಾರಾಟ ನಿಷೇಧಿಸುವಂತೆ ಗದಗ ನಗರಸಭೆ ಪೌರಾಯುಕ್ತರಿಗೆ ಅನೇಕ ಬಾರಿ ಮನವಿ ಸಲ್ಲಿಸಲಾಗಿದೆ. ಆದರೆ, ನಗರಸಭೆ ಪರಿಸರ ಅಭಿಯಂತರು ಕಾಟಾಚಾರಕ್ಕೆಂಬಂತೆ ಪ್ಲಾಸ್ಟರ್ ಆಫ್ ಪ್ಯಾರಿಸ್ ಮೂರ್ತಿ ತಯಾರಕರಿಗೆ ನೋಟಿಸ್ ನೀಡಿ ಕೈತೊಳೆದುಕೊಂಡಿದ್ದಾರೆ. ನಗರಸಭೆ ಅಧಿಕಾರಿಗಳಿಗೆ ಪ್ಲಾಸ್ಟರ್ ಆಫ್ ಪ್ಯಾರೀಸ್ ಗಣೇಶ ವಿಗ್ರಹ ತಯಾರಿಕೆ ಕೇಂದ್ರಗಳು ಚಿನ್ನದ ಮೊಟ್ಟೆ ಇಡುವ ಕೋಳಿಗಳಂತಾಗಿವೆ. ಈ ಅಧಿಕಾರಿಗಳು ಮೂರ್ತಿ ತಯಾರಕರಿಂದ ಅಪವಿತ್ರ ಮೈತ್ರಿ ಮಾಡಿಕೊಂಡಿರುವುದರಿಂದ ಕ್ರಮ ಕೈಗೊಳ್ಳಲು ಹಿಂದೇಟು ಹಾಕುತ್ತಿದ್ದಾರೆ ಎಂದು ಆರೋಪಿಸಿದರು.
ಜಿಲ್ಲಾಡಳಿತ ಹಾಗೂ ನಗರಸಭೆ ಅಧಿಕಾರಿಗಳ ನಿರ್ಲಕ್ಷ್ಯ ಖಂಡಿಸಿ ಜೂ. 5ರ ವಿಶ್ವ ಪರಿಸರ ದಿನದಂದು ಮಹಾತ್ಮಾ ಗಾಂಧಿ ವೃತ್ತದಲ್ಲಿ 1 ದಿನದ ಧರಣಿ ಸತ್ಯಾಗ್ರಹ ನಡೆಸಲಾಗುವುದು. ಒಂದು ವೇಳೆ ಜಿಲ್ಲಾಡಳಿತ ಧರಣಿ ಸತ್ಯಾಗ್ರಹದ ನಂತರವೂ ಎಚ್ಚೆತ್ತುಕೊಂಡು ಜಿಲ್ಲೆಯಲ್ಲಿ ಪರಿಸರಕ್ಕೆ ಮಾರಕವಾಗಿರುವ ಪ್ಲಾಸ್ಟರ್ ಆಫ್ ಪ್ಯಾರೀಸ್ ಮೂರ್ತಿ ತಯಾರಿಕೆ ಹಾಗೂ ಮಾರಾಟ ಸಂಪೂರ್ಣವಾಗಿ ನಿಷೇಧಿಸದಿದ್ದಲ್ಲಿ ಮುಂದಿನ ದಿನಗಳಲ್ಲಿ ಸರಣಿ ಸತ್ಯಾಗ್ರಹ, ಅಮರಣ ಉಪವಾಸ ಸತ್ಯಾಗ್ರಹ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು. ಶ್ರೀರಾಮ ಸೇನೆ ಜಿಲ್ಲಾ ಸಂಚಾಲಕ ರಾಜು ಖಾನಪ್ಪನವರ, ಕಲಾವಿದ ಬಾಬಣ್ಣ ನರಗುಂದ, ರಾಚಪ್ಪ ಕುಂಬಾರ, ಮಂಜುನಾಥ ಕುಂಬಾರ, ಸೋಮನಾಥ ಕುಂಬಾರ, ಎಸ್.ವಿ. ಪ್ಯಾಟಿ, ವಿನಾಯಕ ಜಂತ್ಲಿ, ಮುರಳೀಧರ ಭಂಡಾರಿ, ರಾಜು ಕುಂಬಾರ, ಬಸವರಾಜ ಚಕ್ರಸಾಲಿ, ಶರಣಪ್ಪ ಅಕ್ಕಿ, ಈರಣ್ಣ ಕಮ್ಮಾರ, ಹನುಮಂತಪ್ಪ ಜಿನಗಾರ, ಷಣ್ಮುಖ ಚಿತ್ರಗಾರ, ದೀಪಕ ಚಿತ್ರಗಾರ, ಕೊಟ್ರೇಶ ಅಕ್ಕಿ, ಅಚ್ಯುತ್ ಬೆಂತೂರ ಮುಂತಾದವರು ಪಾಲ್ಗೊಂಡಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

