ಜಿಲ್ಲಾ ಪೊಲೀಸ್ಗೆ ಐಎಸ್ಒ ಮಾನ್ಯತೆ
ಕನ್ನಡಪ್ರಭ ವಾರ್ತೆ, ಗದಗ, ಮಾ. 2
ದೇಶದಲ್ಲಿಯೇ ಮೊದಲ ಬಾರಿಗೆ ಪ್ರತಿಷ್ಠಿತ ಐಎಸ್ಒ ಮಾನ್ಯತೆ ಪಡೆದ ಗದಗ ಜಿಲ್ಲಾ ಪೊಲೀಸ್ ಕಾರ್ಯಾಲಯ, ಬೆಟಗೇರಿ ಬಡಾವಣೆ ಪೊಲೀಸ್ ಠಾಣೆ, ಮುಳಗುಂದ ಪೊಲೀಸ್ ಠಾಣೆ ಹಾಗೂ ಶಿರಹಟ್ಟಿ ಪೊಲೀಸ್ ಠಾಣೆಗೆ ಉತ್ತರ ವಲಯದ ಐಜಿಪಿ ಭಾಸ್ಕರರಾವ್ ಪ್ರಮಾಣ ಪತ್ರ ವಿತರಿಸಿದರು.
ನಗರದ ಜಿಲ್ಲಾ ಪಂಚಾಯತ್ ಸಭಾಭವನದಲ್ಲಿ ಭಾನುವಾರ ಹಮ್ಮಿಕೊಳ್ಳಲಾಗಿದ್ದ ಕಾರ್ಯಕ್ರಮದಲ್ಲಿ ಪ್ರಮಾಣ ಪತ್ರ ವಿತರಿಸಿ ಮಾತನಾಡಿದ ಐಜಿಪಿ ಭಾಸ್ಕರರಾವ್, ಪೊಲೀಸರು ಸಾರ್ವಜನಿಕರೊಂದಿಗೆ ಉತ್ತಮ ಬಾಂಧವ್ಯ ಹೊಂದಿ ಜನರ ನೋವು-ನಲಿವುಗಳಿಗೆ ಸ್ಪಂದಿಸುವ ಕಾರ್ಯ ಮಾಡುತ್ತಿರುವ ಗದಗ ಜಿಲ್ಲಾ ಪೊಲೀಸ್ ಸಿಬ್ಬಂದಿ ಕಾರ್ಯ ಶ್ಲಾಘನೀಯವಾಗಿದೆ. ಹಿಂದಿನ ದಿನಗಳಲ್ಲಿ ಫಿರ್ಯಾದಿದಾರರು, ಪೊಲೀಸರು ಹಾಗೂ ಅಧಿಕಾರಿಗಳು ಮಾತ್ರ ಕಾರ್ಯನಿರ್ವಹಿಸುತ್ತಿದ್ದರು. ಆದರೆ, ಇಂದಿನ ಬದಲಾದ ಪರಿಸ್ಥಿತಿಯಲ್ಲಿ ಈ ಮೂವರೊಂದಿಗೆ ಮಾಧ್ಯಮ, ಚುನಾಯಿತ ಪ್ರತಿನಿಧಿಗಳು, ಮಾನವ ಹಕ್ಕುಗಳು ಸೇರಿದಂತೆ ಹಲವು ಸಂಘ-ಸಂಸ್ಥೆಗಳ ಮಧ್ಯದಲ್ಲಿ ಪೊಲೀಸರು ಕಾರ್ಯನಿರ್ವಹಿಸಬೇಕಾಗಿದ್ದು, ಪೊಲೀಸರು ಪಾರದರ್ಶಕ ಆಡಳಿತ ನೀಡುವಲ್ಲಿ ಶ್ರಮಿಸಬೇಕಾಗಿದೆ. ಗ್ರಾಮೀಣ ಪ್ರದೇಶದಲ್ಲಿ ಇನ್ನೂ ಹೆಚ್ಚಿನ ರೀತಿಯ ಸೇವೆ ಸಲ್ಲಿಸುವಲ್ಲಿ ಪೊಲೀಸ್ ಸಿಬ್ಬಂದಿ ಶ್ರಮಿಸಬೇಕಾಗಿದೆ. ಹಣಬಲ, ಜಾತಿಬಲವನ್ನು ಬದಿಗಿಟ್ಟು ಜನರ ನೋವುಗಳಿಗೆ ನ್ಯಾಯದೊರಕಿಸುವ ಕಾರ್ಯವನ್ನು ಪೊಲೀಸ್ ಇಲಾಖೆಯ ಅಧಿಕಾರಿಗಳು ಮಾಡಬೇಕಾಗಿದ್ದು, ದೇಶದಲ್ಲಿಯೇ ಪ್ರಥಮಬಾರಿಗೆ ಐಎಸ್ಒಗೆ ಪಾತ್ರವಾಗಿರುವ ಗದಗ ಜಿಲ್ಲೆಯ ಪೊಲೀಸ್ ಅಧಿಕಾರಿಗಳ ಕಾರ್ಯ ಶ್ಲಾಘನೀಯ ಎಂದರು.
ಕಾರ್ಯಕ್ರಮ ಉದ್ಘಾಟಿಸಿದ ಜ. ತೋಂಟದ ಡಾ. ಸಿದ್ಧಲಿಂಗ ಶ್ರೀಗಳು ಮಾತನಾಡಿ, ಅಂದಿನ ಬ್ರಿಟಿಷರ ಕಾಲದಲ್ಲಿ ಜನರನ್ನು ಮಟ್ಟಹಾಕಲು ಹುಟ್ಟುಹಾಕಿದ್ದ ಪೊಲೀಸ್ ಇಲಾಖೆಯು ಇಂದಿನ ಪ್ರಜಾಪ್ರಭುತ್ವ ವ್ಯವಸ್ಥೆಯ ದಿನಗಳಲ್ಲಿ ಜನರ ನೋವಿಗೆ ಸ್ಪಂದಿಸುವ, ನ್ಯಾಯದೊರಕಿಸುವ ಕಾರ್ಯಮಾಡುತ್ತಿದೆ. ದೇಶ ರಕ್ಷಿಸುವ ಸೈನಿಕ ಹಾಗೂ ದೇಶದೊಳಗಿನ ಜನರ ನೋವಿಗೆ ಸ್ಪಂದಿಸಿ ಉತ್ತಮ ಕಾರ್ಯ ಮಾಡುತ್ತಿರುವ ಆರಕ್ಷಕ ಅಧಿಕಾರಿಗಳಿಗೆ ಪ್ರಶಸ್ತಿ ನೀಡದೇ ಚಿತ್ರರಂಗದಲ್ಲಿಯೋ ಇನ್ನಿತರೆ ಚಟುವಟಿಕೆಯಲ್ಲಿ ಸಾಧನೆ ಮಾಡಿದ ಮಹನೀಯರಿಗೆ ಪ್ರಶಸ್ತಿ ನೀಡುತ್ತಿರುವುದು ನೋವಿನ ಸಂಗತಿ. ಈ ಪದ್ಧತಿ ಬದಲಾಗಬೇಕಿದ್ದು, ನಾಡರಕ್ಷಿಸುವ ಸೈನಿಕನಿಗೆ ಹಾಗೂ ಆರಕ್ಷಕರಿಗೆ ಉತ್ತಮ ಪ್ರಶಸ್ತಿ ನೀಡಿ ಗೌರವಿಸಬೇಕಾಗಿದ್ದು, ಈ ಕುರಿತು ಸರ್ಕಾರ ಚಿಂತನೆ ನಡೆಸಬೇಕಿದೆ ಎಂದರು. ಅಧ್ಯಕ್ಷತೆ ವಹಿಸಿದ್ದ ಜಿಲ್ಲಾಧಿಕಾರಿ ಎನ್.ಎಸ್. ಪ್ರಸನ್ನಕುಮಾರ ಹಾಗೂ ಎಸ್ಪಿ ಡಾ. ಎಸ್.ಡಿ. ಶರಣಪ್ಪ ಪ್ರಾಸ್ತಾವಿಕ ಮಾತನಾಡಿದರು. ಜಿಪಂ ಅಧ್ಯಕ್ಷ ಕಮಲವ್ವ ಸಜ್ಜನರ, ಉಪಾಧ್ಯಕ್ಷ ರಮೇಶ ಮುಂದಿನಮನಿ, ಐಎಸ್ಒ ಪ್ರತಿನಿಧಿ ಫಯಾಜಅಹ್ಮದ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಹಾಗೂ ಪೊಲೀಸ್ ಸಿಬ್ಬಂದಿ ಪಾಲ್ಗೊಂಡಿದ್ದರು. ಡಿಎಸ್ಪಿ ಬಿ.ಎಸ್. ನ್ಯಾಮಗೌಡ ಸ್ವಾಗತಿಸಿದರು. ಡಿವೈಎಸ್ಪಿ ವಿಜಯ ಡಂಬಳ ವಂದಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

