ಗ್ರಾಮೀಣ ಜನರ ಬೇಡಿಕೆ ಈಡೇರಿಕೆಗೆ ಕ್ರಮ: ಯಾವಗಲ್
ಗದಗ: ಗ್ರಾಮೀಣ ಭಾಗದಲ್ಲಿರುವ ಸಮಸ್ಯೆಗಳನ್ನು ಪತ್ತೆ ಮಾಡಿ ಅವುಗಳನ್ನು ಪರಿಹರಿಸುವ ನಿಟ್ಟಿನಲ್ಲಿ ಕಾರ್ಯಗಳನ್ನು ಹಮ್ಮಿಕೊಳ್ಳಲಾಗುವುದು ಎಂದು ನರಗುಂದ ಶಾಸಕ ಬಿ.ಆರ್. ಯಾವಗಲ್ ಹೇಳಿದರು.
ಅವರು ಈಚೆಗೆ ತಾಲೂಕಿನ ಅಡವಿಸೋಮಾಪುರ ಗ್ರಾಮದ ಹರಿಜನ, ಗಿರಿಜನ ಕಾಲೋನಿಯಲ್ಲಿ ನಿರ್ಮಿತಿ ಕೇಂದ್ರವು ರು. 10 ಲಕ್ಷ ವೆಚ್ಚದಲ್ಲಿ ನಿರ್ಮಿಸುತ್ತಿರುವ ಸಿಸಿ ರಸ್ತೆ ಹಾಗೂ ಚರಂಡಿ ನಿರ್ಮಾಣಕ್ಕೆ ಭೂಮಿಪೂಜೆ ನೆರವೇರಿಸಿ ಮಾತನಾಡಿದರು.
ಗ್ರಾಮದಲ್ಲಿರುವ ಸಮಸ್ಯೆಗಳನ್ನು ಹಂತ ಹಂತವಾಗಿ ನಿವಾರಣೆ ಮಾಡುವಲ್ಲಿ ಶ್ರಮಿಸಲಾಗುವುದು. ಇದೇ ಸಂದರ್ಭದಲ್ಲಿ ಗ್ರಾಮದಿಂದ ಕಳಸಾಪುರ ಗ್ರಾಮದ ಮೂಲಕ ವಿವಿಧ ಪ್ರದೇಶಗಳಿಗೆ ತೆರಳುವ ರಸ್ತೆ ಸರಿಪಡಿಸುವುದು, ಕಳೆದ ಹಲವಾರು ತಿಂಗಳಿಂದ ಗ್ರಾಮದ ರಾಷ್ಟ್ರೀಯ ಹೆದ್ದಾರಿ ಆಚೆ ಇರುವ ನಗರದಲ್ಲಿ ಅಂಗನವಾಡಿ ಕೇಂದ್ರ ಕಟ್ಟಡವು ದುರಸ್ತಿಗೊಳಗಾಗಿ ಅಂಗನವಾಡಿ ಕೇಂದ್ರದ ಸ್ಥಳಾಂತರದಿಂದಾಗಿ ಸಾಕಷ್ಟು ತೊಂದರೆಗಳಾಗುತ್ತಿವೆ. ಕೂಡಲೇ ಅಂಗನವಾಡಿ ಕೇಂದ್ರ ಕಟ್ಟಡವನ್ನು ದುರಸ್ತಿಗೊಳಿಸಿ ಈ ಭಾಗದ ಅಂಗನವಾಡಿ ಕೇಂದ್ರ ಮಕ್ಕಳಿಗೆ ಅನುಕೂಲ ಮಾಡಿಕೊಡಬೇಕೆಂದು ಸಾರ್ವಜನಿಕರು ಶಾಸಕರಲ್ಲಿ ಮನವಿ ಮಾಡಿದರು. ಗ್ರಾಮದ ಕೆಲವು ಭಾಗಗಳಲ್ಲಿ ಸಿಸಿ ರಸ್ತೆ ಮಾಡಿ ಉಳಿದಿರುವ ಭಾಗಗಳಲ್ಲಿ ಚರಂಡಿ ಹಾಗೂ ರಸ್ತೆಯ ಕಾಮಗಾರಿಗಳನ್ನು ಹಮ್ಮಿಕೊಳ್ಳುವಂತೆ ಅಲ್ಲಿಯ ನಿವಾಸಿಗಳು ಒತ್ತಾಯಿಸಿದರು. ಗ್ರಾಮದ ಹೊಸ ಪ್ಲಾಟ್ಗಳಲ್ಲಿ ರಸ್ತೆ ಹಾಗೂ ಚರಂಡಿ ನಿರ್ಮಾಣ ಸೇರಿದಂತೆ ಮುಂತಾದ ಸಮಸ್ಯೆಗಳನ್ನು ನಿವಾರಿಸಬೇಕೆಂದು ಶಾಸಕರಿಗೆ ಮನವಿ ಮಾಡಿದರು. ಇದಕ್ಕೆ ಸ್ಪಂದಿಸಿದ ಶಾಸಕರು ಸಂಬಂಧಿಸಿದ ಇಲಾಖೆಯವರೊಂದಿಗೆ ಚರ್ಚಿಸಿ, ಸಮಸ್ಯೆಗಳ ನಿವಾರಣೆಗೆ ಸೂಕ್ತ ಕ್ರಮಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು. ಜಿಪಂ ಸದಸ್ಯೆ ಶಾರದಾ ತೋಟದ, ತಾಪಂ ಸದಸ್ಯ ಪ್ರಹ್ಲಾದ ಹೊಸಳ್ಳಿ, ಗ್ರಾಪಂ ಅಧ್ಯಕ್ಷ ರಮೇಶ ಲಮಾಣಿ, ಗ್ರಾಪಂ ಸದಸ್ಯರು, ಕಾಲೋನಿಯ ನಿವಾಸಿಗಳು ಉಪಸ್ಥಿತರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

