ಗದಗ

ತಂಗಡಗಿ ನಿವೃತ್ತಿ ಘೋಷಿಸಲಿ

Published On :

ಕನ್ನಡಪ್ರಭ ವಾರ್ತೆ, ಕುಷ್ಟಗಿ, ಮೇ 18
ಕೊಪ್ಪಳ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಬಸವರಾಜ ಹಿಟ್ನಾಳ ಬಿಜೆಪಿ ಅಭ್ಯರ್ಥಿಗಿಂತ ಅಧಿಕ ಮತಗಳ ಅಂತರದಲ್ಲಿ ಗೆಲವು ನಿಚ್ಚಿತ. ಒಂದು ವೇಳೆ ನಮ್ಮ ಅಭ್ಯರ್ಥಿ ಗೆಲವು ಸಾಧಿಸದಿದ್ದರೆ ನಾವು ರಾಜಕೀಯ ನಿವೃತ್ತಿ ಘೋಷಿಸುತ್ತೇನೆ ಎಂದು ಹೇಳಿದ್ದ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ ತಂಗಡಗಿ ಅವರು ಮಾತನಾಡಿದಂತೆ ನಡೆದುಕೊಳ್ಳಬೇಕು ಎಂದು ಸಂಸದ ಸಂಗಣ್ಣ ಕರಡಿ ಪ್ರತಿ ಸವಾಲು ಹಾಕಿದರು.
ಶನಿವಾರ ರಾತ್ರಿ ಪಟ್ಟಣಕ್ಕೆ ಭೇಟಿ ನೀಡಿ ಪಕ್ಷದ ಗೆಲವಿಗಾಗಿ ಶ್ರಮ ವಹಿಸಿದ ಮುಖಂಡರು ಹಾಗೂ ಕಾರ್ಯಕರ್ತರಿಗೆ ಅಭಿನಂದನೆ ಸಲ್ಲಿಸಲು ಆಗಮಿಸಿದ್ದ ವೇಳೆ ಪ್ರತಿಕ್ರಿಯಿಸಿದರು.
ಕೊಪ್ಪಳ ಲೋಕಸಭಾ ಕ್ಷೇತ್ರದಲ್ಲಿ 8 ವಿಧಾನಸಭಾ ಕ್ಷೇತ್ರದ ಪೈಕಿ ಕುಷ್ಟಗಿಯಲ್ಲಿ ಮಾತ್ರ ನಮ್ಮ ಪಕ್ಷದ ಶಾಸಕರನ್ನು ಬಿಟ್ಟರೆ 6 ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಶಾಸಕರು ಅಧಿಕಾರದಲ್ಲಿದ್ದು, ನನ್ನನ್ನು ಸೋಲಿಸಲು ಸಾಕಷ್ಟು ಪ್ರಯತ್ನ ಮಾಡಿದರೂ ಕ್ಷೇತ್ರದ ಜನತೆಯ ಆಶೀರ್ವಾದದ ಮುಂದೆ ಯಾವ ಕುತಂತ್ರವೂ ನಡೆಯಲಿಲ್ಲ ಎಂದರು.
ಕ್ಷೇತ್ರದಲ್ಲಿ ಕಾಂಗ್ರೆಸಿಗರು ಹಣ, ಹೆಂಡ ಹಂಚಿದರೆ ಜನತೆ ಬಿಜೆಪಿಗೆ ಮತ ಚಲಾಯಿಸುತ್ತಾರೆ ಎನ್ನುವ ಹಳೆ ಕನಸಿಗೆ ಜನತೆ ಈ ಬಾರಿ ತಕ್ಕಪಾಠ ಕಲಿಸಿದ್ದಾರೆ. ಹಾಗಾಗಿ ಮುಂದಿನ ದಿನಗಳಲ್ಲಿ ಕೊಪ್ಪಳ ಲೋಕಸಭಾ ಕ್ಷೇತ್ರದಲ್ಲಿ ಬರುವ ಎಲ್ಲ ವಿಧಾನಸಭಾ ಕ್ಷೇತ್ರದ ಅಭಿವೃದ್ಧಿಗೆ ಪ್ರಾಮಾಣಿಕವಾಗಿ ಕೇಂದ್ರ ಸರ್ಕಾರದ ಅನುದಾನ ತರುವ ಜತೆಗೆ ಪ್ರತಿಯೊಂದು ಗ್ರಾಮಕ್ಕೆ ಮೂಲಸೌಲಭ್ಯ ಒದಗಿಸುವಲ್ಲಿ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ. ಇದಕ್ಕೆ ಎಲ್ಲ ವಿಧಾನಸಭಾ ಕ್ಷೇತ್ರ ಜನತೆ ಸಹಕಾರ ಅಗತ್ಯವಾಗಿದೆ ಎಂದರು. ಜತೆಗೆ ಕುಷ್ಟಗಿ ವಿಧಾನಸಭಾ ಕ್ಷೇತ್ರದಲ್ಲಿ ಈಗಾಗಲೇ ಕಾಮಗಾರಿ ಪ್ರಾರಂಭ ಹಂತದಲ್ಲಿ ಕೃಷ್ಣಾ ಬಿ ಸ್ಕೀಂ ಯೋಜನೆ, ಫ್ಲೈ ಓವರ್, ಶುದ್ಧ ಕುಡಿಯುವ ನೀರಿನ ಘಟಕಗಳ ಕಾಮಗಾರಿ ಹಾಗೂ ಜಿಲ್ಲೆಯಲ್ಲಿ ಈಗಾಗಲೇ ನಡೆದಿರುವ ರೇಲ್ವೆ ಕಾಮುಗಾರಿ ಸೇರಿದಂತೆ ವಿವಿಧ ಕಾಮಗಾರಿಗಳನ್ನು ತ್ವರಿತವಾಗಿ ನಡೆಸುವಂತೆ ಅಧಿಕಾರಿಗಳಿಗೆ ಸೂಚಿಸುವ ಜತೆಗೆ ಕ್ಷೇತ್ರದ ಅಭಿವೃದ್ಧಿಗೆ ಕೇಂದ್ರದ ಹೆಚ್ಚಿನ ಅನುದಾನ ಬಿಡುಗಡೆ ಮಾಡಿಸುವ ಭರವಸೆ ನೀಡಿದರು.
ಉದ್ಯೋಗ
ಜಿಲ್ಲೆಯಲ್ಲಿ ಹಲವು ವರ್ಷಗಳಿಂದ ಸಾಕಷ್ಟು ಸಂಖ್ಯೆಯ ಯುವಕರು ಉದ್ಯೋಗವಿಲ್ಲದೆ ನಿರುದ್ಯೋಗಿಗಳಾಗಿದ್ದಾರೆ. ಇಂತವರಿಗೆ ಉದ್ಯೋಗ ಕಲ್ಪಿಸುವುದಕ್ಕಾಗಿ ಹೊಸ ಯೋಜನೆಗಳನ್ನು ರೂಪಿಸಲಾಗುವುದು. ಜತೆಗೆ ಜಿಲ್ಲೆಯಲ್ಲಿ ಉನ್ನತ ಶಿಕ್ಷಣ ಕೇಂದ್ರಗಳನ್ನು ಸ್ಥಾಪಿಸುವುದು ಸೇರಿದಂತೆ ಜಿಲ್ಲೆ ಹಾಗೂ ಲೋಕಸಭಾ ಕ್ಷೇತ್ರ ಅಭಿವೃದ್ಧಿಗೆ ಶ್ರಮಿಸುವುದಾಗಿ ಹೇಳಿದರು.
ಅಭಿನಂದನಾ ಸಮಾರಂಭದಲ್ಲಿ ಭಾಗವಹಿಸಿದ್ದ ಶಾಸಕ ದೊಡ್ಡನಗೌಡ ಪಾಟೀಲ ಮಾತನಾಡಿ, ಕಾಂಗ್ರೆಸ್ಸಿಗರು ನಡೆಸಿದ ಆಟಕ್ಕೆ ಇಲ್ಲಿನ ಮತದಾರರು ತಕ್ಕಪಾಠ ಕಲಿಸಿದ್ದಾರೆ. ಜತೆಗೆ ದೇಶದ ಭವಿಷ್ಯದ ಕುರಿತು ಯೋಚಿಸಿ ಮತದಾನ ಮಾಡಿದ್ದಾರೆ ವಿನಃ ಜಾತಿ, ಹಣ, ಹೆಂಡ ಇನ್ನಾವುದಕ್ಕೂ ಮತ ಚಲಾಯಿಸದೆ ಸಂಗಣ್ಣ ಕರಡಿಯವರ ಆಯ್ಕೆಗಾಗಿ ಒಳ್ಳೆಯ ತೀರ್ಪು ನೀಡಿದ್ದಾರೆ ಎಂದರು.
ಮುಖಂಡರಾದ ಗೀರಿಗೌಡ ಪಾಟೀಲ, ವಿಠ್ಠಪ್ಪ ನಾಗೂರ, ಪಕ್ಷದ ತಾಲೂಕು ಅಧ್ಯಕ್ಷ ಶಶಿಧರ ಕವಲಿ, ಮುಕುಂದರಾವ್ ಭವಾನಿಮಠ, ನಾಗರಾಜ ಮೇಲಿನಮನಿ ಮಾತನಾಡಿದರು. ಮಲ್ಲಣ್ಣ ಪಲ್ಲೇದ, ಸೈಯದ್ ಇನಾಯಿತ್ಸಾಬ, ಖಾಜಿಸಾಬ, ಶುಕರಾಜ ತಾಳಕೇರಿ, ವಿಜಯಕುಮಾರ ಇತರರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.