ಗದಗ

ಆರೋಗ್ಯ ಕೇಂದ್ರಕ್ಕೆ ಸಿಬ್ಬಂದಿ ಕೊರತೆ

Published On :

ಕನ್ನಡಪ್ರಭ ವಾರ್ತೆ, ಗದಗ, ಮೇ 23
ಗದಗ ತಾಲೂಕಿನ ಚಿಂಚಲಿ ಗ್ರಾಮದಲ್ಲಿರುವ ಪ್ರಾಥಮಿಕ ಆರೋಗ್ಯ ಕೇಂದ್ರವು ಹಲವು ತಿಂಗಳಿಂದ ಸಿಬ್ಬಂದಿ ಕೊರತೆ ಎದುರಿಸುತ್ತಿದ್ದು, ಈ ಕುರಿತು ಸ್ಥಳೀಯ ನಿವಾಸಿಗಳು ಸಂಬಂಧಿಸಿದ ಅಧಿಕಾರಿಗಳು ಹಾಗೂ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರೂ ಪ್ರಯೋಜನವಾಗಿಲ್ಲ.
ಸರ್ಕಾರವು ಜನರ ಆರೋಗ್ಯ ಕಾಪಾಡುವ ಸದುದ್ದೇಶದಿಂದ ಹಾಗೂ ಸರ್ಕಾರದ ಆರೋಗ್ಯ ಯೋಜನೆಗಳು ಜನರ ಮನೆ ಬಾಗಿಲಿಗೆ ತಲುಪಲಿ ಎಂಬ ಉದ್ದೇಶವನ್ನಿಟ್ಟುಕೊಂಡು ಹಲವು ಯೋಜನೆಗಳನ್ನು ಜಾರಿಗೊಳಿಸುತ್ತಿರುವುದು ಒಂದೆಡೆಯಾದರೆ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಸರಿಯಾದ ಸಿಬ್ಬಂದಿ ನೇಮಕ ಮಾಡಿಕೊಳ್ಳದೇ ಸರ್ಕಾರದ ಯೋಜನೆಗಳು ಸಫಲಗೊಳ್ಳದೇ ಹಳ್ಳ ಹಿಡಿಯುವಂತೆ ಮಾಡುತ್ತಿರುವುದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.
20 ಸಾವಿರ ಜನಸಂಖ್ಯೆ: ಚಿಂಚಲಿ ಗ್ರಾಮದಲ್ಲಿನ ಈ ಪ್ರಾಥಮಿಕ ಆರೋಗ್ಯ ಕೇಂದ್ರವು ಚಿಂಚಲಿ ಗ್ರಾಮದ ಬಳಿಯ ಅಂತೂರು, ಬೆಂತೂರು, ಕಲ್ಲೂರು ಗ್ರಾಮಗಳು ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಒಳಪಟ್ಟಿವೆ. ಈ 3 ಗ್ರಾಮಗಳು 20 ಸಾವಿರಕ್ಕೂ ಅಧಿಕ ಜನಸಂಖ್ಯೆ ಹೊಂದಿವೆ. ಪ್ರತಿ 3 ಸಾವಿರ ಜನಸಂಖ್ಯೆಯಿರುವ ಗ್ರಾಮಕ್ಕೊಂದು ಉಪಕೇಂದ್ರ ತೆರೆಯಬೇಕು. ಆದರೆ, ಇಲ್ಲಿ 20 ಸಾವಿರಕ್ಕೂ ಅಧಿಕ ಜನಸಂಖ್ಯೆ ಹೊಂದಿದ್ದರೂ ಕೇವಲ ಚಿಂಚಲಿ ಮತ್ತು ಕಲ್ಲೂರಿನಲ್ಲಿ ಉಪಕೇಂದ್ರಗಳನ್ನು ತೆರೆಯಲಾಗಿದೆ. ಸರಿಯಾದ ಸಿಬ್ಬಂದಿ ಇಲ್ಲದೇ ಸಾರ್ವಜನಿಕರು ತೊಂದರೆ ಅನುಭವಿಸುವಂತಾಗಿದೆ.
2 ವರ್ಷದಿಂದ ಆರೋಗ್ಯ ಸಹಾಯಕಿಯಿಲ್ಲ: ಚಿಂಚಲಿ ಗ್ರಾಮದಲ್ಲಿರುವ ಉಪಕೇಂದ್ರದಲ್ಲಿ 2 ವರ್ಷಗಳಿಂದ ಪ್ರಾಥಮಿಕ ಕಿರಿಯ ಆರೋಗ್ಯ ಮಹಿಳಾ ಸಹಾಯಕಿಯರ (ಎಎನ್‌ಎಂ) ಹುದ್ದೆ ಹಾಗೂ ಔಷಧಿ ವಿತರಕರ ಹುದ್ದೆ ಖಾಲಿಯಿದೆ. ಆಸ್ಪತ್ರೆಯಲ್ಲಿ ಕೆಲಸ ನಿರ್ವಹಿಸಲು ಇಬ್ಬರು ಗ್ರೂಪ್ ಡಿ ನೌಕರರ ಕೊರತೆಯಿದೆ. ಅಲ್ಲದೇ ಓರ್ವ ವೈದ್ಯರು ಮಾತ್ರ ಕಾರ್ಯನಿರ್ವಹಿಸುತ್ತಿದ್ದು, ತರಬೇತಿ ನಿಮಿತ್ತ ಅವರನ್ನು ಇಲ್ಲಿ ನಿಯೋಜಿಸಲಾಗಿದೆ. ಕಲ್ಲೂರು ಗ್ರಾಮದಲ್ಲಿರುವ ಉಪಕೇಂದ್ರವೂ ಹೊರತಾಗಿಲ್ಲ, ಇಲ್ಲೂ ಸಿಬ್ಬಂದಿ ಕೊರತೆಯಿದೆ.
ಬೇಸಿಗೆ ಆರಂಭವಾಗಿದ್ದು, ಗ್ರಾಮೀಣ ಪ್ರದೇಶಗಳಲ್ಲಿ ಸಾಂಕ್ರಾಮಿಕ ರೋಗಗಳ ಹಾವಳಿ ತಲೆದೋರುವ ಸಂಭವವಿದೆ. ಚಿಂಚಲಿ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿಯೇ ಸಿಬ್ಬಂದಿ ಕೊರತೆಯಿದೆ. ಗ್ರಾಮಗಳಲ್ಲಿನ ಸಮಸ್ಯೆಗಳು ಹಾಗೂ ರೋಗಿಗಳಿಗೆ ಚಿಕಿತ್ಸೆ ನೀಡಲು ಆರೋಗ್ಯ ಸಹಾಯಕಿಯರ ಕೊರತೆಯಿದ್ದು, ಚಿಂಚಲಿ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಹಲವು ಗ್ರಾಮಗಳಿಂದ ದಿನನಿತ್ಯ ನೂರಾರು ಸಂಖ್ಯೆಯಲ್ಲಿ ರೋಗಿಗಳು ಆಸ್ಪತ್ರೆಗೆ ಆಗಮಿಸುತ್ತಾರೆ.
ಆದರೆ, ಈ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿನ ಅವ್ಯವಸ್ಥೆ ಕಂಡು ಹಿಡಿಶಾಪ ಹಾಕುತ್ತಿದ್ದಾರೆ. ಈ ಕುರಿತು ಇಲ್ಲಿನ ನಿವಾಸಿಗಳು ಜಿಲ್ಲಾಧಿಕಾರಿ, ಜಿಲ್ಲಾ ವೈದ್ಯಾಧಿಕಾರಿ, ಡಿಎಚ್‌ಒ ಸೇರಿದಂತೆ ಸ್ಥಳಿಯ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳಿಗೆ ಮನವಿ ಸಲ್ಲಿಸಿದ್ದಾರೆ. ಆದರೆ, ಸಾರ್ವಜನಿಕರು ನೀಡಿದ ಮನವಿ ವಿಷಯಗಳು ಇಲ್ಲಿವರೆಗೂ ಕಾರ್ಯರೂಪಕ್ಕೆ ಬರದಿರುವುದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದ್ದು, ಇದೇ ರೀತಿ ಮುಂದುವರಿದಲ್ಲಿ ಇಲ್ಲಿನ ನಿವಾಸಿಗಳು ಪ್ರಾಥಮಿಕ ಆರೋಗ್ಯ ಕೇಂದ್ರ ಬಂದ್ ಮಾಡಿ ಪ್ರತಿಭಟನೆ ಜರುಗಿಸುವುದರಲ್ಲಿ ಸಂದೇಹವಿಲ್ಲ. ಕಾರಣ ಜಿಲ್ಲಾಧಿಕಾರಿ, ಜಿಲ್ಲಾ ವೈದ್ಯಾಧಿಕಾರಿಗಳು ಚಿಂಚಲಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿರುವ ಸಿಬ್ಬಂದಿ ಕೊರತೆ ನೀಗಿಸಿ ಸಾರ್ವಜನಿಕರಿಗೆ ಅನುಕೂಲ ಕಲ್ಪಿಸಿಕೊಡಬೇಕಾಗಿದೆ.
- ಅಜೀಜಅಹ್ಮದ ಬಳಗಾನೂರ

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.