'ಕೈ' ನಿರ್ನಾಮಕ್ಕೆ ನಿಂತ ಧರಂಸಿಂಗ್
ಕನ್ನಡಪ್ರಭ ವಾರ್ತೆ, ಗುಲ್ಬರ್ಗ, ಏ.4
ಆಳಂದ ಮತಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಆಯ್ಕೆ ಸಂದರ್ಭದಲ್ಲಿ ಮಾಜಿ ಮುಖ್ಯಮಂತ್ರಿ ಧರ್ಮಸಿಂಗ್ ಅವರು ಸ್ಥಳೀಯ ನಾಯಕರನ್ನು ಪರಿಗಣನೆಗೆ ತೆಗೆದುಕೊಳ್ಳದೇ ಏಕಪಕ್ಷೀಯ ನಿರ್ಣಯ ಕೈಗೊಂಡಿದ್ದಾರೆ. ಈ ಮೂಲಕ ಹಿರಿಯ ನಾಯಕರೇ ಕಾಂಗ್ರೆಸ್ ನಿರ್ನಾಮ ಮಾಡಲು ಹೊರಟಿದ್ದಾರೆಂದು ಮಾಜಿ ಶಾಸಕ ಶರಣಬಸಪ್ಪ ಪಾಟೀಲ್ ದಂಗಾಪುರ ಆರೋಪಿಸಿದ್ದಾರೆ.
ನಗರದಲ್ಲಿ ಇತ್ತೀಚೆಗೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದೆಲ್ಲೆಡೆ ಕಾಂಗ್ರೆಸ್ಗೆ ಉತ್ತಮ ಬೆಂಬಲ ವ್ಯಕ್ತವಾಗುತ್ತಿರುವ ಸಂದರ್ಭದಲ್ಲಿ ಆಳಂದ ಮತಕ್ಷೇತ್ರದ ದುರ್ಬಲ ಅಭ್ಯರ್ಥಿಯನ್ನು ಆಯ್ಕೆ ಮಾಡಿರುವುದರ ಹಿಂದೆ ಬೇರೆ ಯಾರನ್ನೋ ಗೆಲ್ಲಿಸಲು ಹೊರಟಿದ್ದಾರೆ ಎಂಬುದು ಸ್ಪಷ್ಟವಾಗುತ್ತಿದೆ. ತಾಲೂಕು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೆಪಿಸಿಸಿ ಸದಸ್ಯ ಹಾಗೂ ಹಿರಿಯ ಮುಖಂಡರ ಜತೆ ಚರ್ಚಿಸದೆ ಏಕಪಕ್ಷೀಯವಾಗಿ ನಿರ್ಧಾರ ತೆಗೆದುಕೊಂಡಿರುವುದು ಸರಿಯಾದ ಕ್ರಮವಲ್ಲ ಎಂದು ಹೇಳಿದರು.
ಚುನಾವಣೆ ಘೋಷಣೆ ಮಾಡುವ ಮೊದಲು ಪಕ್ಷದ ಹಿರಿಯ ಮುಖಂಡರಾದ ಜಗನ್ನಾಥ ಶೇಗಜಿ, ಶಿವರಾಜ ಬಾಸಗಿ, ಡಾ. ಕಿರಣ ದೇಶಮುಖ, ಬಸವರಾಜ ಪಾಟೀಲ್ ದಂಗಾಪುರ ಹಾಗೂ ಸೂರ್ಯಕಾಂತ ಕೋರಳಿ ಇವರಲ್ಲಿ ಒಬ್ಬರನ್ನು ಪಕ್ಷದ ಅಭ್ಯರ್ಥಿಯಾಗಿ ಮಾಡುವುದೆಂದು ಭರವಸೆ ನೀಡಿದ್ದರು. ಆದರೆ ಈಗ ಈ ಐವರನ್ನು ಬಿಟ್ಟು ಏಕಾಏಕಿ ಅಭ್ಯರ್ಥಿಯನ್ನು ಧರ್ಮಸಿಂಗ್ ಅವರು ಆಯ್ಕೆಮಾಡಿದ್ದಾರೆಂಬ ಮಾತುಗಳು ಕೇಳಿಬರುತ್ತಿವೆ ಎಂದರು.
ಕಾಂಗ್ರೆಸ್ ಅಭ್ಯರ್ಥಿ ತಾವೇ ಎಂದು ಪ್ರಚಾರ ಮಾಡುತ್ತಿರುವ ವ್ಯಕ್ತಿ ಈ ಹಿಂದೆ ಜೆಡಿಎಸ್ ಹಾಗೂ ಬಿಎಸ್ಪಿ ಪಕ್ಷದ ಅಭ್ಯರ್ಥಿಗಳ ಪರ ಹಾಗೂ ಬಂಗಾರಪ್ಪನವರ ಪಾರ್ಟಿ ಪರ ಕೆಲಸ ಮಾಡಿದ್ದಾರೆ. ನಿಷ್ಠಾವಂತ ಕಾರ್ಯಕರ್ತರನ್ನು ಕಡೆಗಣಿಸಿ ಪಕ್ಷಕ್ಕೆ ದ್ರೋಹ ಮಾಡಿರುವ ವ್ಯಕ್ತಿಗೆ ಟಿಕೆಟ್ ನೀಡಿರುವುದು ಖಂಡನೀಯ.
ಮಾಜಿ ಮುಖ್ಯಮಂತ್ರಿಯವರ ಈ ನಿರ್ಧಾರ ಕಾಂಗ್ರೆಸ್ಸಿಗರಲ್ಲಿ ನಿರಾಶೆ ಮೂಡಿದೆ. ಈ ಹಿಂದೆ ಭರವಸೆ ನೀಡಿದ ಐದು ಅಭ್ಯರ್ಥಿಗಳಲ್ಲಿ ಒಬ್ಬರನ್ನು ಆಯ್ಕೆ ಮಾಡಬೇಕು. ಇಲ್ಲದಿದ್ದರೆ ಸಮಾನ ಮನಸ್ಕರ ಜತೆ ತಾಲೂಕಿನ ಹಿರಿಯ ಮುಖಂಡರ ಜತೆ ಚರ್ಚಿಸಿ ಅಂತಿಮ ನಿರ್ಧಾರ ತೆಗದುಕೊಳ್ಳಲಾಗುತ್ತದೆ ಎಂದು ದಂಗಾಪುರ ಹೇಳಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

