ಗುಲ್ಬರ್ಗಾ

ಕಲುಷಿತ ನೀರು ಸೇವಿಸಿ ಹಲವರು ಅಸ್ವಸ್ಥ

Published On :

ಕೆಂಭಾವಿ: ಕಲುಷಿತ ನೀರು ಸೇವಿಸಿ 17 ಜನರು ವಾಂತಿ ಭೇದಿಯಿಂದ ಅಸ್ವಸ್ಥರಾಗಿ ಆಸ್ಪತ್ರೆ ಸೇರಿದ ಘಟನೆ ಸಮೀಪದ ಮುನೀರ್ ಬೊಮ್ಮನಹಳ್ಳಿ ಗ್ರಾಮದಲ್ಲಿ ನಡೆದಿದೆ. ಗ್ರಾಮದಲ್ಲಿ ಎರಡು ತೆರೆದ ಬಾವಿಯಿದ್ದು, ಒಂದು ಬಾವಿಯಲ್ಲಿ ಶುದ್ಧ ನೀರಿದೆ. ಆದರೆ ಮತ್ತೊಂದು ಬಾವಿಯಲ್ಲಿ ನೀರು ಪಾಚಿಗಟ್ಟಿದೆ. ಈ ನೀರು ಸೇವನೆಯಿಂದ ವಾಂತಿ ಭೇದಿ ಉಲ್ಬಣಿಸಿದೆ ಎಂದು ಗ್ರಾಮದ ರಾಜುಗೌಡ ಕಾಮನಟಗಿ ಹೇಳುತ್ತಾರೆ. ಮೂರು ದಿನಗಳಿಂದ ವಾಂತಿ ಭೇದಿ ವ್ಯಾಪಕವಾಗಿದ್ದು, 30ಕ್ಕೂ ಹೆಚ್ಚು ಜನರು ಅಸ್ವಸ್ಥಗೊಂಡಿದ್ದಾರೆ. ಗುತ್ತಿ ಬಸವೇಶ್ವರದಲ್ಲಿರುವ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಔಷಧಿ ಇಲ್ಲ ಎಂಬ ಕಾರಣಕ್ಕೆ ಚಿಕಿತ್ಸೆಗಾಗಿ ದೂರದ ಕೆಂಭಾವಿಗೆ ಬರುವಂತಾಗಿದೆ ಎಂದು ಅವರು ಆರೋಪಿಸಿದ್ದಾರೆ. ಸದ್ಯ ಖಾಸಗಿ ಆಸ್ಪತ್ರೆಯಲ್ಲಿ 10 ಜನ ಚಿಕಿತ್ಸೆ ಪಡೆಯುತ್ತಿದ್ದು, ಕೆಂಭಾವಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ 7 ಜನರು ದಾಖಲಾಗಿದ್ದಾರೆ. ಜಿಪಂ ಸದಸ್ಯ ಸಿದ್ದನಗೌಡ ಪೊಲೀಸ್ ಪಾಟೀಲ ಆಸ್ಪತ್ರೆಗೆ ಭೇಟಿ ನೀಡಿ ರೋಗಿಗಳ ಆರೋಗ್ಯ ವಿಚಾರಿಸಿದ್ದಾರೆ. ಸಂಬಂಧಪಟ್ಟ ಇಲಾಖೆ ಶುದ್ಧ ಕುಡಿವ ನೀರು ಪೂರೈಕೆಗೆ ಕ್ರಮ ಕೈಗೊಳ್ಳಬೇಕು ಎಂದು ಅವರು ಆಗ್ರಹಿಸಿದ್ದಾರೆ.
ವಿಶ್ವ ಆರೋಗ್ಯ ದಿನಾಚರಣೆ ನಾಳೆ
ಯಾದಗಿರಿ: ಜಿಲ್ಲಾ ಪಂಚಾಯಿತಿ ಹಾಗೂ ಜಿಲ್ಲಾ ಆರೋಗ್ಯ, ಕುಟುಂಬ ಕಲ್ಯಾಣ ಅಧಿಕಾರಿ ಇಲಾಖೆ ವತಿಯಿಂದ ಏ. 9 ರಂದು ನಗರದ ಡಿಎಚ್‌ಒ ಕಚೇರಿ ಸಭಾಂಗಣದಲ್ಲಿ ವಿಶ್ವ ಆರೋಗ್ಯ ದಿನಾಚರಣೆಯನ್ನು ಆಚರಿಸಲಾಗುತ್ತಿದೆ.ಅಂದು ಬೆಳಗ್ಗೆ 11 ಗಂಟೆಗೆ ನಡೆಯುವ ಈ ಕಾರ್ಯಕ್ರಮವನ್ನು ಜಿಪಂ ಮುಖ್ಯಕಾರ್ಯನಿರ್ವಾಹಕ ಅಧಿಕಾರಿ ಎಸ್.ಎ.ಜಿಲಾನಿ ಅವರು ಉದ್ಫಾಟಿಸುವರು. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಮಲ್ಲಿಕಾರ್ಜುನ ಮುಕ್ಕಾ, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಸಿದ್ಧರಾಮ ಹೊನ್ಕಲ್ ಇತರರು ಪಾಲ್ಗೊಳ್ಳಲಿದ್ದಾರೆ.
ಕಾರಿನಲ್ಲಿದ್ದ ರು. 15 ಲಕ್ಷ ನಗದು ವಶ
ಯಾದಗಿರಿ: ರಾಯಚೂರಿನಿಂದ ಬೀದರ್ ಕಡೆಗೆ ಕಾರಿನಲ್ಲಿ ಸಾಗಿಸುತ್ತಿದ್ದ 15 ಲಕ್ಷ ನಗದನ್ನು ತಾಲೂಕಿನ ಕಡೇಚೂರು ಬಳಿ ವಶಪಡಿಸಿಕೊಳ್ಳಲಾಗಿದೆ. ಈ ಕುರಿತು ಇಬ್ಬರನ್ನು ವಿಚಾರಣೆ ನಡೆಸಲಾಗುತ್ತಿದ್ದು, ರಾಯಚೂರಿನಿಂದ ಹಣ ತೆಗೆದುಕೊಂಡು ಬಂದಿದ್ದು, ರಿಯಲ್ ಎಸ್ಟೇಟ್ ಉದ್ಯಮದಲ್ಲಿ ತೊಡಗಿಸಲು ತೆಗೆದುಕೊಂಡು ಹೊರಟಿದ್ದಾಗಿ ತಿಳಿಸಿದ್ದಾರೆ. ಸ್ಥಳಕ್ಕೆ ಭೇಟಿ ನೀಡಿರುವ ಡಿಎಸ್ಪಿ ಎಸ್.ಬಿ. ಕಟ್ಟಿಮನಿ, ಸಿಪಿಐ ಚೌಧರಿ ಹಾಗೂ ಚುನಾವಣಾ ನೀತಿ ಸಂಹಿತೆ ತಂಡದ ಅಧಿಕಾರಿ ತನಿಖೆ ನಡೆಸಿದ್ದಾರೆ. ಇದುವರೆಗೆ ನಿಖರವಾದ ಮಾಹಿತಿ ಲಭ್ಯವಾಗಿಲ್ಲ. ತನಿಖೆಯ ನಂತರ ಪೂರ್ಣ ವಿವರ ಲಭ್ಯವಾಗಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.