ಪೊಲೀಸ್ ಕಿರುಕುಳಕ್ಕೆ ಯುವಕನ ಆತ್ಮಹತ್ಯೆ?
ಕನ್ನಡಪ್ರಭ ವಾರ್ತೆ, ಯಾದಗಿರಿ, ಏ.12
ಸಮೀಪದ ಖಾನಾಪುರ ಬ್ಯಾಂಕ್ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ವಿಚಾರಣೆ ನಡೆಸುತ್ತಿದ್ದ ಯುವಕನೊಬ್ಬ ಶುಕ್ರವಾರ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಈತನ ಆತ್ಮಹತ್ಯೆಗೆ ಪೊಲೀಸರು ನೀಡುತ್ತಿದ್ದ ಕಿರುಕುಳವೇ ಕಾರಣ ಎಂದು ಆರೋಪಿಸಿ ಆತನ ಕುಟುಂಬದವರು ಹಾಗೂ ಖಾನಾಪುರ ಗ್ರಾಮದವರು ಇಲ್ಲಿಯ ಗ್ರಾಮೀಣ ಠಾಣೆ ಎದುರು ಶವವಿಟ್ಟು ಪ್ರತಿಭಟನೆ ನಡೆಸಿದ್ದಾರೆ.
ದೇವರಾಜ ತಂದೆ ಶಿವರಾಜ(21) ಆತ್ಮಹತ್ಯೆಗೆ ಶರಣಾದ ಯುವಕ. ಶಹಾಪುರ ತಾಲೂಕಿನ ಖಾನಾಪುರದಲ್ಲಿರುವ ಬ್ಯಾಂಕ್ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಈತನ ವಿಚಾರಣೆ ನಡೆಸಿದ್ದರು.
ಅಲ್ಲದೆ, ಈತನ ತಂದೆಯನ್ನೂ ಕರೆಸಿ ವಿಚಾರಿಸಿದ್ದರು. ಈಗಾಗಲೇ ಅನೇಕ ಬಾರಿ ವಿಚಾರಣೆ ನಡೆಸಿದ್ದು, ಶುಕ್ರವಾರ ಮತ್ತೆ ಬರುವಂತೆ ಪೊಲೀಸರು ತಿಳಿಸಿದ್ದರು. ವಿಚಾರಣೆ ನೆಪದಲ್ಲಿ ಪೊಲೀಸರು ಕಿರುಕುಳ ನೀಡುತ್ತಿದ್ದರಿಂದಲೇ ಆತ ಆತ್ಮಹತ್ಯೆ ಮಾಡಿಕೊಂಡಿದ್ದಾನೆಂದು ಗ್ರಾಮಸ್ಥರು ಆರೋಪಿಸಿದ್ದಾರೆ. ಮೃತ ವ್ಯಕ್ತಿಯ ಕುಟುಂಬದವರ ಆಕ್ರಂದನ ಠಾಣೆ ಎದುರು ಮುಗಿಲು ಮುಟ್ಟಿತ್ತು.
ಅಮಾನತಿಗೆ ಆಗ್ರಹ: ದೇವರಾಜ ಆತ್ಮಹತ್ಯೆ ಮಾಡಿಕೊಂಡಿದ್ದರಿಂದ ತೀವ್ರ ಗಾಬರಿಗೊಂಡ ಗ್ರಾಮಸ್ಥರು, ಆತನ ಶವವನ್ನು ಇಲ್ಲಿಯ ಗ್ರಾಮೀಣ ಠಾಣೆ ಎದುರು ಇಟ್ಟು ಪ್ರತಿಭಟನೆ ಆರಂಭಿಸಿದ್ದಾರೆ. ಕಿರುಕುಳ ನೀಡುತ್ತಿರುವ ಪೊಲೀಸ್ ಅಧಿಕಾರಿಯನ್ನು ಅಮಾನತುಗೊಳಿಸಬೇಕು ಎಂದು ಆಗ್ರಹಿಸಿದ್ದಾರೆ.
ಇಡೀ ಗ್ರಾಮದಲ್ಲಿ ಪೊಲೀಸರ ಕಿರುಕುಳ ಹೆಚ್ಚಾಗಿದೆ. ಪೊಲೀಸ್ ವಾಹನ ಬಂದರೆ ಹೆದರುವಂತಾಗಿದೆ. ಆದ್ದರಿಂದ ಈ ಬಗ್ಗೆ ಪೊಲೀಸ್ ವರಿಷ್ಠಾಧಿಕಾರಿಗಳು ಸೂಕ್ತ ರಕ್ಷಣೆ ನೀಡಬೇಕೆಂದು ಅವರು ಒತ್ತಾಯಿಸಿದರು.
ಎಸ್ಪಿ ಭೇಟಿ: ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಂಶಿ ಕೃಷ್ಣ ಸ್ಥಳಕ್ಕೆ ಭೇಟಿ ನೀಡಿದ್ದು, ವಿಚಾರಣೆ ನಡೆಸಿ ಆತ್ಮಹತ್ಯೆಗೆ ಕಾರಣರಾದವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವುದಾಗಿ ಪ್ರತಿಭಟನಾಕಾರರಿಗೆ ಭರವಸೆ ನೀಡಿದರು. ಪ್ರತಿಭಟನೆ ಹಿಂಪಡೆಯುವಂತೆ ಮನವಿ ಮಾಡಿದರು.
ಈ ಕುರಿತು ರೈತ ಸಂಘದ ಜಿಲ್ಲಾಧ್ಯಕ್ಷ ಮಲ್ಲಿಕಾರ್ಜುನ ಸತ್ಯಂಪೇಟೆ ಪ್ರತಿಕ್ರಿಯಿಸಿ, ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ಮಾಡುವುದಕ್ಕೆ ವಿರೋಧವಿಲ್ಲ. ಆದರೆ ಈ ನೆಪದಲ್ಲಿ ಕಿರುಕುಳ ನೀಡಿ ಯುವಕನ ಸಾವಿಗೆ ಪೊಲೀಸರೇ ಕಾರಣ. ಆತ್ಮಹತ್ಯೆಗೆ ಶರಣಾದ ವ್ಯಕ್ತಿ, ಆತನ ತಂದೆ ಹಾಗೂ ಕುಟುಂಬದವರನ್ನು ಪದೇಪದೆ ವಿಚಾರಣೆ ನಡೆಸಿ ದೌರ್ಜನ್ಯ ನಡೆಸಿದ್ದಾರೆ. ಇದು ಖಂಡನೀಯ. ಇದಕ್ಕೆ ಕಾರಣರಾದವರ ಮೇಲೆ ಶಿಸ್ತು ಕ್ರಮ ಕೈಗೊಳ್ಳಬೇಕು. ಈ ಬಗ್ಗೆ ಎಸ್ಪಿ ಅವರಿಗೂ ಮನವಿ ಮಾಡಿದ್ದೇನೆಂದು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

