ಗುಲ್ಬರ್ಗಾ

ಇಂದು ನಾಮಪತ್ರ ಸಲ್ಲಿಕೆ ದಿನ

Published On :

ಯಾದಗಿರಿ: ಚುನಾವಣೆ ಅಧಿಸೂಚನೆ ಹೊರಡಿಸಿ ನಾಲ್ಕು ದಿನ ಕಳೆದರೂ ಇದುವರೆಗೆ ನಾಮಪತ್ರ ಸಲ್ಲಿಸದ ಅಭ್ಯರ್ಥಿಗಳು ಅದಕ್ಕಾಗಿ ಸೋಮವಾರ ಮುಹೂರ್ತ ಇಟ್ಟಿದ್ದಾರೆ. ಬಹುತೇಕ ಅಭ್ಯರ್ಥಿಗಳು ಸೋಮವಾರ ನಾಮಪತ್ರ ಸಲ್ಲಿಸುತ್ತಿದ್ದು, ಬಿಸಿಲಿನ ಜತೆಗೆ ಚುನಾವಣಾ ಕಾವು ಏರತೊಡಗಿದೆ.
  ಇದುವರೆಗೆ ಅಮವಾಸ್ಯೆ, ಯುಗಾದಿ, ಕರಿ ಎಂಬ ಕಾರಣಕ್ಕೆ ಯಾರೂ ನಾಮಪತ್ರ ಸಲ್ಲಿಸಿರಲಿಲ್ಲ. ನಂತರ ಎರಡನೇ ಶನಿವಾರ, ಭಾನುವಾರ ರಜಾ ದಿನವಾದ್ದರಿಂದ ಸಾಧ್ಯವಾಗಿರಲಿಲ್ಲ. ಸೋಮವಾರ ರೋಹಿಣಿ ನಕ್ಷತ್ರ ಉತ್ತಮ ದಿನವೆಂದು ಪರಿಗಣಿಸಿದ್ದು, ಬಹುತೇಕ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಲು ಮುಂದಾಗಿದ್ದಾರೆ. ತಮ್ಮ ರಾಜಕೀಯ ಭವಿಷ್ಯ ಕಂಡುಕೊಳ್ಳಲು ಅಭ್ಯರ್ಥಿಗಳು ಉತ್ತಮ ದಿನಕ್ಕಾಗಿ ಕಾದು ಸೋಮವಾರ ನಾಮಪತ್ರ ಸಲ್ಲಿಸಲು ಮುಹೂರ್ತ ಫಿಕ್ಸ್ ಮಾಡಿದ್ದಾರೆ.
ಉಮೇದುವಾರಿಕೆ: ಯಾದಗಿರಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ, ಹಾಲಿ ಶಾಸಕ ಡಾ.ಎ.ಬಿ. ಮಾಲಕರೆಡ್ಡಿ ಅವರು ಸೋಮವಾರ ನಾಮಪತ್ರ ಸಲ್ಲಿಸುತ್ತಿದ್ದಾರೆ. ಜಿಲ್ಲಾ ಕಾಂಗ್ರೆಸ್ ಕಾರ್ಯಾಲಯದಿಂದ ನೂರಾರು ಕಾರ್ಯಕರ್ತರೊಂದಿಗೆ ಮೆರವಣಿಗೆ ಮೂಲಕ ಆಗಮಿಸಿ ಚುನಾವಣಾಧಿಕಾರಿಗೆ ತಮ್ಮ ಉಮೇದುವಾರಿಕೆ ಸಲ್ಲಿಸಲಿದ್ದಾರೆ. ಕ್ಷೇತ್ರದ ಕೆಜೆಪಿ ಅಭ್ಯರ್ಥಿ ಡಾ. ವೀರಬಸವಂತರೆಡ್ಡಿ ಮುದ್ನಾಳ ಅವರೂ ಸೋಮವಾರವೇ ನಾಮಪತ್ರ ಸಲ್ಲಿಕೆಗೆ ಮುಹೂರ್ತ ಇಟ್ಟುಕೊಂಡಿದ್ದಾರೆ. ಬಿಜೆಪಿ ಅಭ್ಯರ್ಥಿ ಚಂದ್ರಶೇಖರ ಮಾಗನೂರ, ಬಿಎಸ್ಸಾರ್ ಕಾಂಗ್ರೆಸ್ ಅಭ್ಯರ್ಥಿ ಮೌಲಾಲಿ ಅನಪುರ ಅವರೂ ಏ. 15ರಂದೇ ನಾಮಪತ್ರ ಸಲ್ಲಿಸುತ್ತಿದ್ದಾರೆ.
  ಗುರುಮಠಕಲ್ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗಿರೀಶ ಮಟ್ಟಣ್ಣವರ ಅವರು ಸೋಮವಾರ ಗುರುಮಠಕಲ್ನಲ್ಲಿ ಪಕ್ಷದ ಚುನಾವಣಾ ಕಚೇರಿಯಿಂದ ಮೆರವಣಿಗೆಯಲ್ಲಿ ಹೊರಟು ನಾಮಪತ್ರ ಸಲ್ಲಿಸುತ್ತಿದ್ದಾರೆ. ಕೆಜೆಪಿ ಅಭ್ಯರ್ಥಿ ವೆಂಕಟರೆಡ್ಡಿ ಮುದ್ನಾಳ, ಜೆಡಿಎಸ್ನ ನಾಗನಗೌಡ ಕಂದಕೂರ ಸಹ ಸೋಮವಾರ ನಾಮಪತ್ರ ಸಲ್ಲಿಸುತ್ತಿದ್ದಾರೆ.
ನಾಮಪತ್ರ ಸಲ್ಲಿಕೆ: ಸುರಪುರ ಕ್ಷೇತ್ರದಲ್ಲಿ ಕಾಂಗ್ರೆಸ್ನ ರಾಜಾ ವೆಂಕಟಪ್ಪ ನಾಯಕ, ಜೆಡಿಎಸ್ ಅಭ್ಯರ್ಥಿ ರಾಜುಗೌಡ, ಬಿಜೆಪಿ ಅಭ್ಯರ್ಥಿ ರಾಜಾ ಮದನಗೋಪಾಲ ನಾಯಕ ನಾಮಪತ್ರ ಸಲ್ಲಿಸುತ್ತಿದ್ದಾರೆ. ಶಹಾಪುರದಲ್ಲಿ ಕಾಂಗ್ರೆಸ್ನ ದರ್ಶನಾಪುರ, ಬಿಎಸ್ಸಾರ್ ಕಾಂಗ್ರೆಸ್ನ ಶಂಕ್ರಣ್ಣ ವಣಿಕ್ಯಾಳ, ಕೆಜೆಪಿಯ ಗುರು ಪಾಟೀಲ ಶಿರವಾಳ ನಾಮಪತ್ರ  ಸಲ್ಲಿಕೆಗೆ ಮುಂದಾಗಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.