ಉಮೇದುವಾರಿಕೆಗೆ ಜಾತ್ರೆ
ಕನ್ನಡಪ್ರಭ ವಾರ್ತೆ, ಯಾದಗಿರಿ, ಏ.15
ಪ್ರಮುಖ ಪಕ್ಷಗಳ ಹಾಗೂ ಪಕ್ಷೇತರ ಅಭ್ಯರ್ಥಿಗಳು ತಮ್ಮ ಅಪಾರ ಬೆಂಬಲಿಗರು ಮತ್ತು ಕಾರ್ಯಕರ್ತರೊಂದಿಗೆ ಮೆರವಣಿಗೆಯಲ್ಲಿ ಆಗಮಿಸಿ ಯಾದಗಿರಿ ವಿಧಾನಸಭಾ ಕ್ಷೇತ್ರದಲ್ಲಿ ಸ್ಪರ್ಧಿಸಲು ಸೋಮವಾರ ಚುನಾವಣಾಧಿಕಾರಿಗೆ ನಾಮಪತ್ರ ಸಲ್ಲಿಸಿದರು. 5 ಅಭ್ಯರ್ಥಿಗಳಿಂದ 7 ನಾಮಪತ್ರಗಳು ಸಲ್ಲಿಕೆಯಾದವು.
ಯಾದಗಿರಿ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ, ಹಾಲಿ ಶಾಸಕ ಡಾ.ಎ.ಬಿ.ಮಾಲಕರೆಡ್ಡಿ ಅವರು ಪಕ್ಷದ ಕಾರ್ಯಾಲಯದಿಂದ ಸಾವಿರಾರು ಕಾರ್ಯಕರ್ತರೊಂದಿಗೆ ಮೆರವಣಿಗೆಯಲ್ಲಿ ಆಗಮಿಸಿ ಉಪವಿಭಾಗಾಧಿಕಾರಿಗೆ ನಾಮಪತ್ರ ಸಲ್ಲಿಸಿದರು. ಸೋಮವಾರ ಬೆಳಗ್ಗೆ 12ಕ್ಕೆ ಆರಂಭವಾದ ಮೆರವಣಿಗೆಯಲ್ಲಿ ಸಾವಿರಾರು ಕಾರ್ಯಕರ್ತರು ಉತ್ಸಾಹದಿಂದ ಪಾಲ್ಗೊಂಡಿದ್ದರು. ಸುಮಾರು 2 ಕಿಮೀ ದೂರ ಮೆರವಣಿಗೆಯಲ್ಲಿ ಅಪಾರ ಬೆಂಬಲಿಗರೊಂದಿಗೆ ಆಗಮಿಸಿ ಅವರು ಕಾಂಗ್ರೆಸ್ ಪಕ್ಷದಿಂದ ಉಮೇದುವಾರಿಕೆ ಸಲ್ಲಿಸಿದರು.
ಇದಕ್ಕೂ ಮುನ್ನ ಕೆಜೆಪಿ ಅಭ್ಯರ್ಥಿ ಡಾ. ವೀರಬಸವಂತರೆಡ್ಡಿ ಮುದ್ನಾಳ ನಗರದಲ್ಲಿ ಮೆರವಣಿಗೆ ನಡೆಸಿ ಶಕ್ತಿ ಪ್ರದರ್ಶನ ಮಾಡಿ, ಉಪವಿಭಾಗಾಧಿಕಾರಿಗೆ ಎರಡು ಸೆಟ್ಗಳಲ್ಲಿ ನಾಮಪತ್ರ ಸಲ್ಲಿಸಿದರು. ನಗರದ ಶಾಸ್ತ್ರಿ ಚೌಕದಿಂದ ಸುಮಾರು ನಾಲ್ಕೈದು ಸಾವಿರಕ್ಕೂ ಹೆಚ್ಚು ಬೆಂಬಲಿಗರು, ಕಾರ್ಯಕರ್ತರೊಂದಿಗೆ ಮೆರವಣಿಗೆಯಲ್ಲಿ ಅವರು ನಾಮಪತ್ರ ಸಲ್ಲಿಸಲು ಆಗಮಿಸಿದರು. ಡಾ. ಮುದ್ನಾಳ ಅವರನ್ನು ಹೊತ್ತು ಕಾರ್ಯಕರ್ತರು ಅಭಿಮಾನ ಮೆರೆದರು. ಬಿಎಸ್ಸಾರ್ ಅಭ್ಯರ್ಥಿ ಮೌಲಾಲಿ ಅನಪುರ ಅವರೂ ಮೆರವಣಿಗೆಯಲ್ಲಿ ಆಗಮಿಸಿ ನಾಮಪತ್ರ ಸಲ್ಲಿಸಿದರು. ಮಧ್ಯಾಹ್ನದ ಖಡಕ್ ಬಿಸಿಲಿನಲ್ಲೂ ಬೆಂಬಲಿಗರು ಹಾಗೂ ಕಾರ್ಯಕರ್ತರು ಕುಗ್ಗದೇ ತಮ್ಮ ನಾಯಕನನ್ನು ಹೊತ್ತು ಮೆರವಣಿಗೆ ನಡೆಸಿದರು.
ಬಿಜೆಪಿ ಅಭ್ಯರ್ಥಿ ಚಂದ್ರಶೇಖರ ಮಾಗನೂರ ಅವರು ಕಾರ್ಯಕರ್ತರೊಂದಿಗೆ ಆಗಮಿಸಿ ಉಪವಿಭಾಗಾಧಿಕಾರಿ ಬಿ.ಪಿ. ವಿಜಯ್ ಅವರಿಗೆ ಎರಡು ನಾಮಪತ್ರಗಳನ್ನು ಸಲ್ಲಿಸಿದರು. ಪಕ್ಷೇತರ ಅಭ್ಯರ್ಥಿಯಾಗಿ ಜಲಂದರ ರಾವ್ ಮುಂಡರ್ಗಿ ಅವರೂ ನೂರಾರು ಬೆಂಬಲಿಗರೊಂದಿಗೆ ಆಗಮಿಸಿ ಉಮೇದುವಾರಿಕೆ ಸಲ್ಲಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

