'ಗುರುಮಠಕಲ್ ಸಮಗ್ರ ಅಭಿವೃದ್ಧಿಗೆ ಬದ್ಧ'
ಕ.ಪ್ರ. ವಾರ್ತೆ ಯಾದಗಿರಿ ಏ.19
ಗುರುಮಠಕಲ್ ಮತಕ್ಷೇತ್ರ ಶೈಕ್ಷಣಿಕವಾಗಿ ಅತಿ ಹಿಂದುಳಿದಿದ್ದು, ಮೂಲ ಸೌಕರ್ಯಗಳಿಂದಲೂ ವಂಚಿತವಾಗಿದೆ. ಗಡಿಭಾಗದ ಗ್ರಾಮಗಳಲ್ಲಿ ಸಮಸ್ಯೆ ತಾಂಡವಾಡುತ್ತಿದೆ. ಆದ್ದರಿಂದ ಈ ಬಾರಿಯ ಚುನಾವಣೆಯಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿರುವ ನನ್ನನ್ನು ಬೆಂಬಲಿಸಿ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಸಹಕರಿಸಬೇಕು ಎಂದು ಗುರುಮಠಕಲ್ ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಚಂದ್ರಶೇಖರ ದಾಸನಕೇರಿ ಹೇಳಿದರು.
ಇಲ್ಲಿಯ ಪತ್ರಿಕಾ ಭವನದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಜಯ ಕರ್ನಾಟಕ ಸಂಘಟನೆ ಮೂಲಕ ಕ್ಷೇತ್ರದ ಎಲ್ಲಾ ಗ್ರಾಮಗಳ ಸಮಸ್ಯೆ ಬಗ್ಗೆ ಹೋರಾಟ ನಡೆಸಿದ್ದೇನೆ. ಅಲ್ಲದೇ ಬಡ ಕಾರ್ಮಿಕರು, ರೈತರ ಧ್ವನಿಯಾಗಿ ಅವರಿಗೆ ಸ್ಪಂದಿಸಲು ಶಕ್ತಿ ಮೀರಿ ಶ್ರಮಿಸಿದ್ದೇನೆ. ಆದ್ದರಿಂದ ಅನೇಕರು ಚುನಾವಣೆಯಲ್ಲಿ ಸ್ಪರ್ಧಿಸುವಂತೆ ಒತ್ತಾಯಿಸಿದ್ದರಿಂದ ಕಣಕ್ಕಿಳಿದಿದ್ದೇನೆ. ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿಗೆ ಈ ಬಾರಿ ಬದಲಾವಣೆ ಅಗತ್ಯವಿದೆ. ಆದ್ದರಿಂದ ತಮಗೆ ಅವಕಾಶ ನೀಡಿದರೆ ಕ್ಷೇತ್ರದ ಚಿತ್ರಣ ಬದಲಿಸಿ ತೋರಿಸುತ್ತೇನೆ ಎಂದು ಹೇಳಿದರು. ಕ್ಷೇತ್ರದಲ್ಲಿ ಶೈಕ್ಷಣಿಕ ಸಮಸ್ಯೆ ಹೆಚ್ಚಾಗಿದೆ. ಸಕಾಲದಲ್ಲಿ ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸ ಸಿಗುತ್ತಿಲ್ಲ. ಅದರಲ್ಲೂ ಮುಖ್ಯವಾಗಿ ಹಿಂದುಳಿದ ಜನಾಂಗದವರ ಬಗ್ಗೆ ಈ ಹಿಂದಿನ ಶಾಸಕರು ಕಾಳಜಿ ತೋರಿಲ್ಲ. ನಾನೊಬ್ಬ ಪರಿಶಿಷ್ಟ ಜಾತಿಯವನಾಗಿದ್ದು, ನಮ್ಮ ಜನರ ಸಮಸ್ಯೆ ಅರಿತಿದ್ದೇನೆ. ಅನಕ್ಷರತೆಯಿಂದಾಗಿ ನಿರುದ್ಯೋಗ ಸಮಸ್ಯೆ, ರಸ್ತೆ ಸುಧಾರಣೆ ಸೇರಿದಂತೆ ಅಗತ್ಯ ಸೌಲಭ್ಯಗಳನ್ನು ಕೇಳಿ ಪಡೆಯಲು ಮುಂದಾಗುತ್ತಿಲ್ಲ. ಈಗ ಸೂಕ್ತ ಪ್ರತಿನಿಧಿ ಆಯ್ಕೆಗೆ ಸಕಾಲವಾಗಿದ್ದು, ಜನರ ಸಮಸ್ಯೆಗೆ ಸ್ಪಂದಿಸುವ ವ್ಯಕ್ತಿಗೆ ಮತ ನೀಡಬೇಕು. ಅದಕ್ಕಾಗಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ನನ್ನನ್ನು ಬೆಂಬಲಿಸಬೇಕು ಎಂದು ದಾಸನಕೇರಿ ಮನವಿ ಮಾಡಿದರು.
ವೀರ ಕನ್ನಡಿಗ ಪ್ರತಿಷ್ಠಾನದ ಅಧ್ಯಕ್ಷ ಕೃಷ್ಣಮೂರ್ತಿ ಕುಲಕರ್ಣಿ, ವಿಜಯಕುಮಾರ ಹಬ್ಬಳ್ಳಿ, ರಾಜು ದೊಡ್ಮನಿ ಇತರರು ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

