ಬಿಜೆಪಿ ಮತ್ತೆ ಅಧಿಕಾರಕ್ಕೆ: ಕೋವಿಂದ ವಿಶ್ವಾಸ
ಕನ್ನಡಪ್ರಭ ವಾರ್ತೆ ಗುಲ್ಬರ್ಗ ಏ.25
ರಾಜ್ಯದಲ್ಲಿ ಬಿಜೆಪಿ ಮತ್ತೆ ಅಧಿಕಾರಕ್ಕೆ ಬರಲಿದೆ ಎಂದು ಉತ್ತರ ಪ್ರದೇಶದ ರಾಜ್ಯ ಸಂಘಟನಾ ಕಾರ್ಯದರ್ಶಿ ರಾಮನಾಥ ಕೋವಿಂದ ವಿಶ್ವಾಸ ವ್ಯಕ್ತಪಡಿಸಿದರು.
ಗುಲ್ಬರ್ಗ ಉತ್ತರ ಮತಕ್ಷೇತ್ರದ ಅಭ್ಯರ್ಥಿ ರಾಜಗೋಪಾಲರೆಡ್ಡಿ ಪರ ಪ್ರಚಾರ ಮಾಡಲು ನಗರಕ್ಕೆ ಆಗಮಿಸಿದ್ದ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತ, ಕಳೆದ ಐದು ವರ್ಷಗಳಲ್ಲಿ ನೀಡಿರುವ ಆಡಳಿತವನ್ನು ಜನರು ಗಮನಿಸಿದ್ದಾರೆ. ಅವರು ಮುಂದಿನ ಅವಧಿಗೂ ಅಧಿಕಾರವನ್ನು ಬಿಜೆಪಿಗೆ ನೀಡಲಿದ್ದಾರೆ ಎಂದರು.
ಮತಯಾಚನೆ: ಕಾಂಗ್ರೆಸ್ ಪಕ್ಷ 60 ವರ್ಷಗಳಲ್ಲಿ ಮಾಡದಷ್ಟು ಅಭಿವೃದ್ಧಿಯನ್ನು ಬಿಜೆಪಿ ಕೇವಲ ಐದು ವರ್ಷಗಳಲ್ಲಿ ಮಾಡಿ ತೋರಿಸಿದೆ. ಈ ಆತ್ಮವಿಶ್ವಾಸದೊಂದಿಗೆ ಪಕ್ಷ ಚುನಾವಣೆ ಕಣದಲ್ಲಿ ಧುಮುಕಿದೆ. ಈ ನಿಟ್ಟಿನಲ್ಲಿ ತಾವು ಎರಡು ದಿನ ಗುಲ್ಬರ್ಗ ಉತ್ತರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ರಾಜಗೋಪಾಲರೆಡ್ಡಿ ಪರವಾಗಿ ಮತಯಾಚನೆ ಮಾಡಲಿದ್ದೇನೆ ಎಂದರು.
ಗುಜರಾತ್, ಮಧ್ಯಪ್ರದೇಶ, ಛತ್ತಿಸಗಡ್, ರಾಜಸ್ಥಾನ, ಬಿಹಾರ, ಗೋವಾ ಮತ್ತು ಕರ್ನಾಟಕ ರಾಜ್ಯಗಳಲ್ಲಿ ಬಿಜೆಪಿ ಉತ್ತಮ ಆಡಳಿತ ನೀಡಿರುವುದನ್ನು ದೇಶದ ಜನತೆ ಗಮನಿಸಿದ್ದಾರೆ. ಗುಲ್ಬರ್ಗ ಜಿಲ್ಲೆಯ 9 ಕ್ಷೇತ್ರಗಳಲ್ಲಿ ಬಿಜೆಪಿಯನ್ನು ಗೆಲ್ಲಿಸುವ ಮೂಲಕ ಅಭಿವೃದ್ಧಿ ಕೆಲಸಗಳಿಗೆ ಸಹಕರಿಸಬೇಕು ಎಂದು ಮತದಾರರಿಗೆ ಮನವಿ ಮಾಡಿದರು.
ಹಣ ಕೊಳ್ಳೆ: ಇಡೀ ದೇಶದಲ್ಲಿಯೇ ಅತ್ಯಂತ ಭ್ರಷ್ಟ ಸರ್ಕಾರ ಕರ್ನಾಟಕ ಎಂದು ರಾಜ್ಯದಲ್ಲಿ ಚುನಾವಣಾ ಪ್ರಚಾರಕ್ಕೆ ಆಗಮಿಸಿದ ಸಂದರ್ಭದಲ್ಲಿ ಎಐಸಿಸಿ ಉಪಾಧ್ಯಕ್ಷ ರಾಹುಲ್ಗಾಂಧಿ ಮಾಡಿರುವ ಆರೋಪಕ್ಕೆ ಉತ್ತರಿಸಿದ ಅವರು, ಕೇಂದ್ರದಲ್ಲಿ ಎರಡು ಬಾರಿ ಅಧಿಕಾರ ನಡೆಸಿದ ಯುಪಿಎ ಸರ್ಕಾರ ಅಭಿವೃದ್ಧಿ ಮರೆತು ಹಗರಣಗಳ ಮೂಲಕ ಹಣ ಕೊಳ್ಳೆ ಹೊಡೆಯುವುದರದಲ್ಲಿಯೇ ನಿರತವಾಗಿದೆ ಎಂದು ಟೀಕಿಸಿದರು.
ಪಕ್ಷದ ಅಭ್ಯರ್ಥಿ ರಾಜಗೋಪಾಲರೆಡ್ಡಿ, ಕೆ.ಬಿ. ಶಾಣಪ್ಪ, ಬಿ.ಜಿ. ಪಾಟೀಲ್, ವಿದ್ಯಾಸಾಗರ ಶಾಬಾದಿ, ಮಹಾಂತಗೌಡ ಪಾಟೀಲ್, ಶರಣಪ್ಪ ತಳವಾರ, ರಾಜು ನಾಗನಹಳ್ಳಿ, ಶಾಮರಾವ ಪ್ಯಾಟಿ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

