ಗುಲ್ಬರ್ಗಾ

ಕಾಂಗ್ರೆಸ್‌ಗೆ ಸೋಲಿನ ಭೀತಿ...

Published On :

ಸಿಎಂ ಅಭ್ಯರ್ಥಿ ಹೆಸರು ಇಲ್ಲ

ಕನ್ನಡಪ್ರಭ ವಾರ್ತೆ   ಗುಲ್ಬರ್ಗ   ಏ.26
ಪ್ರಸ್ತುತ ಚುನಾವಣೆಯಲ್ಲಿ ಸೋಲುವ ಭೀತಿಯಿಂದ ಕಾಂಗ್ರೆಸ್ ಪಕ್ಷವು ಮುಖ್ಯಮಂತ್ರಿ ಅಭ್ಯರ್ಥಿ ಹೆಸರನ್ನು ಘೋಷಣೆ ಮಾಡಿಲ್ಲ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ, ಸಂಸದ ಅನಂತಕುಮಾರ ಲೇವಡಿ ಮಾಡಿದರು.
ನಗರದ ಸೂಪರ್ ಮಾರ್ಕೆಟ್‌ನಲ್ಲಿ ಗುಲ್ಬರ್ಗ ಉತ್ತರ ಮತ್ತು ದಕ್ಷಿಣ ಕ್ಷೇತ್ರದ ಬಿಜೆಪಿ ಅಭ್ಯರ್ಥಿಗಳ ಪರ ಚುನಾವಣಾ ಪ್ರಚಾರ ಸಭೆಯಲ್ಲಿ ಮಾತನಾಡಿ, ಜಗದೀಶ ಶೆಟ್ಟರ್ ಅವರನ್ನು ಮುಂದಿನ ಮುಖ್ಯಮಂತ್ರಿಯೆಂದು ಬಿಜೆಪಿ ಘೋಷಣೆ ಮಾಡಿದೆ. ಏಕೆಂದರೆ ನಮ್ಮ ಪಕ್ಷಕ್ಕೆ ಬಹುಮತ ಬರಲಿದೆ. ಆದರೆ, ಕಾಂಗ್ರೆಸ್ಸಿಗೆ ಈ ಆತ್ಮವಿಶ್ವಾಸ ಇಲ್ಲದಂತಾಗಿದೆ. ಅದಕ್ಕೆ ಸಿದ್ದರಾಮಯ್ಯ, ಮಲ್ಲಿಕಾರ್ಜುನ ಖರ್ಗೆ, ಎಸ್.ಎಂ. ಕೃಷ್ಣ, ಜಿ.ಪರಮೇಶ್ವರ ಮೊದಲಾದವರು ಒಳಗೊಳಗೆ ತೊಳಲಾಡುತ್ತಿದ್ದಾರೆ ಎಂದು ಅನಂತ ತಮ್ಮ ವ್ಯಂಗ್ಯಭರಿತ ಮಾತುಗಳಿಂದ ಕಾಂಗ್ರೆಸ್ ಪಕ್ಷವನ್ನು ತಿವಿದ ರು.
ಮತ್ತೆ ಬಿಜೆಪಿ ಅಧಿಕಾರಕ್ಕೆ- ವಿಶ್ವಾಸ: ಕಾಂಗ್ರೆಸ್‌ನಲ್ಲಿ ಬಿಕ್ಕಟ್ಟು, ಜೆಡಿಎಸ್‌ನಲ್ಲಿ ಇಕ್ಕಟ್ಟು ಆದರೆ, ಬಿಜೆಪಿಯಲ್ಲಿ ಒಕ್ಕಟ್ಟು ಇದೆ ಎಂದ ಅವರು, ಬಿಜೆಪಿ ಸರ್ಕಾರದ ಸಾಧನೆಯಿಂದ ಮತ್ತೆ ಅಧಿಕಾರಕ್ಕೆ ಬರಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಮುಖ್ಯಮಂತ್ರಿ ಅಭ್ಯರ್ಥಿ ಹೆಸರು ಘೋಷಣೆ ಮಾಡದೆ ಇರುವುದಕ್ಕೆ ಖರ್ಗೆ ಅವರಿಗೆ ದುಃಖ ಇದೆ. ಎಸ್.ಎಂ. ಕೃಷ್ಣ ಅವರಿಗೆ ಕೋಪ ಇದೆ. ಸಿದ್ದರಾಮಯ್ಯನವರಿಗೆ ನಿರಾಸೆ ಇದೆ ಎಂದ ಅವರು, ಕಾಂಗ್ರೆಸ್ ಹೈಕಮಾಂಡ್ ಸೋನಿಯಾ ಗಾಂಧಿ ಅವರಿಗೆ ಪ್ರಸ್ತುತ ಚುನಾವಣೆಯಲ್ಲಿ ಗೆಲ್ಲುವ ಭರವಸೆ ಮತ್ತು ಧೈರ್ಯವಿದ್ದರೆ ಸಿಎಂ ಅಭ್ಯರ್ಥಿ ಹೆಸರು ಘೋಷಣೆ ಮಾಡಲಿ ಎಂದು ಸವಾಲು ಹಾಕಿದರು.
ಅಧಿಕಾರ ವಿಕೇಂದ್ರಿಕರಣಕ್ಕೆ ನಾಂದಿ: ರಾಜ್ಯದಲ್ಲಿ ಅಧಿಕಾರ ವಿಕೇಂದ್ರೀಕರಣಕ್ಕಾಗಿ ತಾಲೂಕು ರಚನೆ ಮಾಡಬೇಕೆಂಬ ಬೇಡಿಕೆ ಬಹಳ ದಿನಗಳಿಂದ ಇತ್ತು. ಕಾಂಗ್ರೆಸ್ ಸರ್ಕಾರ 40 ವರ್ಷಗಳಿಂದ ಯಾವುದೇ ಪ್ರಯತ್ನ ಮಾಡಿಲ್ಲ. ಆದರೆ, ಬಿಜೆಪಿ ಸರ್ಕಾರ ರಾಜ್ಯದಲ್ಲಿ 43 ಹೊಸ ತಾಲೂಕುಗಳನ್ನು ರಚನೆ ಮಾಡಿದೆ. ಅದರಲ್ಲಿ ಹೈ.ಕ. ಭಾಗದಲ್ಲಿ 18 ತಾಲೂಕುಗಳ ರಚನೆ ಮಾಡುವ ಮೂಲಕ ಅಧಿಕಾರ ವಿಕೇಂದ್ರೀಕರಣಕ್ಕೆ ನಾಂದಿ ಹಾಡಿದೆ ಎಂದರು.
ಗುಲ್ಬರ್ಗ ಉತ್ತರ ಕ್ಷೇತ್ರದ ಅಭ್ಯರ್ಥಿ ರಾಜಗೋಪಾಲ ರೆಡ್ಡಿ ಮತ್ತು ಗುಲ್ಬರ್ಗ ದಕ್ಷಿಣ ಕ್ಷೇತ್ರದ ಅಭ್ಯರ್ಥಿ ದತ್ತಾತ್ರೇಯ ಪಾಟೀಲ್ ರೇವೂರ ಅವರಿಗೆ ಮತ ನೀಡುವ ಮೂಲಕ ಆರಿಸಿ ತರಬೇಕು. ಅವರಿಗೆ ಮತ ನೀಡಿದರೆ ಮುಂದಿನ ಮುಖ್ಯಮಂತ್ರಿ ಜಗದೀಶ ಶೆಟ್ಟರ್ ಅವರಿಗೆ ಮತ ನೀಡಿದಂತಾಗುತ್ತದೆ. ಆ ಮೂಲಕ ರಾಜ್ಯದಲ್ಲಿ ಮತ್ತೆ ಶೆಟ್ಟರ್ ನೇತೃತ್ವದಲ್ಲಿ ಸುಭದ್ರ ಸರ್ಕಾರ ರಚನೆ ಮಾಡಲು ಅನುಕೂಲವಾಗಲಿದೆ ಎಂದರು.
ಪಕ್ಷದ ಹಿರಿಯ ನಾಯಕರಾದ ರಘುನಾಥ ಮಲ್ಕಾಪುರೆ, ಕೆ.ಬಿ. ಶಾಣಪ್ಪ, ಬಿ.ಜಿ. ಪಾಟೀಲ್, ಶರಣಪ್ಪ ತಳವಾರ, ವಿದ್ಯಾಸಾಗರ ಶಾಬಾದಿ, ವಿದ್ಯಾಸಾಗರ ಕುಲಕರ್ಣಿ, ದಯಾಘನ ಧಾರವಾಡಕರ್, ಮುಕಂದ ಸೇರಿದಂತೆ ಹಲವಾರು ಮುಖಂಡರು, ಕಾರ್ಯಕರ್ತರು ಉಪಸ್ಥಿತರಿದ್ದರು.
ಇದೇ ವೇಳೆ ಪ್ರಶಾಂತ ಮೊದಲಿಯಾರ್ ತಮ್ಮ ಹಲವಾರು ಬೆಂಬಲಿಗರೊಂದಿಗೆ ಕಾಂಗ್ರೆಸ್ ತೊರೆದು ಬಿಜೆಪಿ ಸೇರ್ಪಡೆಯಾದರು. ಅಮೃತ ಇತರರು ಸಹ ಬಿಜೆಪಿ ಸೇರ್ಪಡೆಯಾದರು. ಇವರನ್ನು ಅನಂತಕುಮಾರ ಅವರು ಪಕ್ಷಕ್ಕೆ ಬರಮಾಡಿಕೊಂಡರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.