ಬೇಡಿಕೆ ಈಡೇರಿಕೆಗೆ ಆಗ್ರಹ
ಕನ್ನಡಪ್ರಭ ವಾರ್ತ್ಣೆ ಚಿತ್ತಾಪುರ , ಆ.8
ತಾಲೂಕಿನ 35 ಗ್ರಾಪಂ.ಗಳಲ್ಲಿ ಸ್ಥಳೀಯ ಹಾಗೂ ತಾಲೂಕು ಆಡಳಿತದ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳ ನಿರ್ಲಕ್ಷ್ಯದಿಂದ ಸಾರ್ವಜನಿಕರು ಹಲವಾರು ಮೂಲಭೂತ ಸೌಲಭ್ಯಗಳಿಂದ ವಂಚಿತಗೊಂಡಿದ್ದಾರೆ ಎಂದು ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ ತಾಲೂಕು ಸಂಚಾಲಕ ಕೃಷ್ಣಪ್ಪ ಕರಣಿಕ ಆರೋಪಿಸಿದರು.
ಪ್ರವಾಸಿ ಮಂದಿರದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಸ್ವಾತಂತ್ರ್ಯ ಸಿಕ್ಕು ಆರು ದಶಕವಾದರೂ ಜನಸಾಮಾನ್ಯರು ಮೂಲ ಸೌಲಭ್ಯಗಳಾದ ಕುಡಿವ ನೀರು, ರಸ್ತೆ, ಬಸ್ ಸೌಲಭ್ಯ, ಶೌಚಾಲಯ ಮುಂತಾದ ಬೇಡಿಗಳನ್ನು ಪರಿಹರಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ. ಆದರೆ ಸರ್ಕಾರದ ಹಣ ಅಭಿವೃದ್ಧಿ ಹೆಸರಿನಲ್ಲಿ ಕೋಟಿಗಟ್ಟಲೆ ಹಣ ಮಾತ್ರ ನೀರಿನಂತೆ ಖರ್ಚಾಗಿ ರಾಜಕಾರಣಿಗಳು ಹಾಗೂ ಅಧಿಕಾರಿಗಳು ಅಭಿವೃದ್ಧಿಯಾಗುತ್ತಿದ್ದಾರೆ ಎಂದು ಆರೋಪಿಸಿದರು.
ಅವ್ಯವಹಾರದಲ್ಲಿ ಅಧಿಕಾರಿಗಳು ಶಾಮೀಲು: ಉದ್ಯೋಗ ಖಾತ್ರಿ ಯೋಜನೆಯಲ್ಲಿ ಕಾಮಗಾರಿಯನ್ನು ಯಂತ್ರಗಳ ಮೂಲಕ ಮಾಡಿ ಬೋಗಸ್ ಜಾಬ್ ಕಾರ್ಡ್ ಇಟ್ಟುಕೊಂಡು ಕೂಲಿಕಾರರ ಹೆಸರಿನಲ್ಲಿ ಲೂಟಿ ಮಾಡುತ್ತಿರುವುದನ್ನು ತಿಳಿದೂ ಅಧಿಕಾರಿಗಳು ಕ್ರಮ ಕೈಗೊಳ್ಳದೆ ಇರುವುದರಿಂದ ಇದರಲ್ಲಿ ಅವರೂ ಶಾಮೀಲಾಗಿ ಭಾರಿ ಅವ್ಯವಹಾರ ಎಸಗುತ್ತಿದ್ದಾರೆ ಎಂದರು.
ಮಧ್ಯಾಹ್ನದ ಬಿಸಿ ಊಟದಲ್ಲಿ ತಾಲೂಕು ಅಧಿಕಾರಿ ಭಾರಿ ಅವ್ಯವಹಾರ ಮಾಡುತ್ತಿದ್ದಾರೆ. ಅಲ್ಲದೆ ತಾಲೂಕಿನ 400ಕ್ಕೂ ಹೆಚ್ಚು ಅಂಗನವಾಡಿ ಕೇಂದ್ರಗಳಲ್ಲಿ ಮಕ್ಕಳ ಅಪೌಷ್ಟಿಕತೆಯಿಂದ ಬಳಲುತ್ತಿದ್ದು, ಅವರಿಗೆ ಆಹಾರ ವಿತರಿಸದೆ ಕಾಳ ಸಂತೆಯಲ್ಲಿ ಮಾರಾಟ ಮಾಡಲಾಗುತ್ತಿದೆ. ಹಲವಾರು ಕೇಂದ್ರಗಳು ಸ್ವಂತ ಕಟ್ಟಡವಿಲ್ಲದೆ ತೊಂದರೆಯಲ್ಲಿವೆ ಎಂದು ದೂರಿದರು.
ವೈದ್ಯರ ಕೊರತೆ: ಪ್ರಾಥಮಿಕ ಅರೋಗ್ಯ ಕೇಂದ್ರದಲ್ಲಿ ವೈದ್ಯರಿಲ್ಲದೆ ಅನೇಕ ಜನರು ಚಿಕಿತ್ಸೆ ಇಲ್ಲದೆ ಜೀವ ಕಳೆದುಕೊಳ್ಳುತ್ತಿದ್ದಾರೆ. ಆದರೂ ಇವುಗಳ ಅವ್ಯವಸ್ಥೆಗೆ ಸೂಕ್ತ ಕ್ರಮ ಕೈಗೊಳ್ಳದಿರುವುದು ವಿಷಾದಕರ ಎಂದು ಹೇಳಿದರು. ನೂತನ ಶಾಸಕ ಪ್ರಿಯಾಂಕ್ ಖರ್ಗೆ ಅವರು ತಾಲೂಕಿನ ಮೂಲ ಸೌಲಭ್ಯಗಳ ಬಗ್ಗೆ ಪರೀಶಿಲಿಸಿ ಹಲವಾರು ಯೋಜನೆಗಳಲ್ಲಿ ಹಗಲು ದರೋಡೆಯಾಗುತ್ತಿದ್ದರೂ ಕ್ರಮ ಕೈಗೊಳ್ಳುತ್ತಿಲ್ಲ ಎಂದರು.
ಉಗ್ರ ಹೋರಾಟದ ಎಚ್ಚರಿಕೆ: ತಾಲೂಕಿನ ಅಭಿವೃದ್ಧಿ ಹಾಗೂ ಮೂಲ ಸೌಲಭ್ಯ ಒದಗಿಸುವಲ್ಲಿ ವಿಳಂಬ ತೋರಿದಲ್ಲಿ ಇದರ ವಿರುದ್ಧ ಕದಸಂಸ ಉಗ್ರವಾದ ಹೋರಾಟ ಮಾಡಬೇಕಾಗುತ್ತದೆ ಎಂದು ಅವರು ಎಚ್ಚರಿಕೆ ನೀಡಿದರು. ಸುದ್ದಿಗೋಷ್ಠಿಯಲ್ಲಿ ವಿಜಯಕುಮಾರ್ ದೊಡ್ಡಮನಿ, ಮಲ್ಲಿಕಾರ್ಜುನ ಏರಿ, ಹಣಮಂತ ತರನಳ್ಳಿ, ಮಂಜುನಾಥ ನಾಲವಾರ, ಮಹಾದೇವ ನಾಲವಾರ, ಶಿವಕುಮಾರ ಮಳಗ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

