ಗುಲ್ಬರ್ಗಾ

ಸ್ವಾತಂತ್ರ್ಯೋತ್ಸವಕ್ಕೆ ಸಕಲ ಸಜ್ಜು

Published On :

ಕನ್ನಡಪ್ರಭ ವಾರ್ತೆ  ಯಾದಗಿರಿ  ಆ.14
ಜಿಲ್ಲಾಡಳಿತದ ವತಿಯಿಂದ ಆ.15ರಂದು ಸ್ವಾತಂತ್ರ್ಯ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಲು ಅನುಕೂಲವಾಗುವಂತೆ ಸಮಾರಂಭವನ್ನು ನೂತನ ಜಿಲ್ಲಾ ಕ್ರೀಡಾಂಗಣದ ಹಿಂಭಾಗದಲ್ಲಿರುವ ತಾಲೂಕು ಹಳೇ  ಕ್ರೀಡಾಂಗಣದಲ್ಲಿ ಆಚರಿಸಲಾಗುತ್ತಿದ್ದು, ಸಕಲ ಸಿದ್ಧತೆ ಕೈಗೊಳ್ಳಲಾಗಿದೆ.
  ಇತ್ತೀಚೆಗೆ ಸುರಿದ ಮಳೆಯಿಂದಾಗಿ ನೂತನ ಜಿಲ್ಲಾ ಕ್ರೀಡಾಂಗಣದಲ್ಲಿ ನೀರು ನಿಂತು ಆವರಣ ಕೆಸರು ಗದ್ದೆಯಂತಾಗಿರುವ ಹಿನ್ನೆಲೆಯಲ್ಲಿ ಈ ಬಾರಿ ಸ್ವಾತಂತ್ರ್ಯ ದಿನಾಚರಣೆ ಸಮಾರಂಭವನ್ನು ತಾಲೂಕಾ ಹಳೆ ಕ್ರೀಡಾಂಗಣದಲ್ಲಿ ಆಚರಿಸಲಾಗುತ್ತಿದೆ.
  ಸಮಾರಂಭಕ್ಕೆ ಪೆಂಡಾಲ್ ಹಾಕುವುದು, ಕ್ರೀಡಾಂಗಣದ ಸ್ವಚ್ಫತೆ ಮತ್ತು ಸಿದ್ಧತೆ ಕಾರ್ಯಗಳನ್ನು ಜಿಲ್ಲಾಡಳಿತ ವತಿಯಿಂದ ಭರದಿಂದ ನಡೆಸಲಾಗುತ್ತಿದ್ದು, ಬುಧವಾರ ಜಿಲ್ಲಾಧಿಕಾರಿ ಎಫ್.ಆರ್. ಜಮಾದಾರ್ ಅವರು ಸಿದ್ಧತಾ ಕಾರ್ಯಗಳನ್ನು ಪರಿಶೀಲಿಸಿದರು.
ವ್ಯತ್ಯಯವಾದಂತೆ ಕಾರ್ಯಕ್ರಮ ನಿರ್ವಹಿಸಿ: ಸ್ವಾತಂತ್ರ್ಯ ದಿನಾಚರಣೆ ಸಂಭ್ರಮದಿಂದ ಆಚರಿಸಲು ಅನುಕೂಲವಾಗುವಂತೆ ಕ್ರೀಡಾಂಗಣವನ್ನು ಸಜ್ಜುಗೊಳಿಸಲು ಅಧಿಕಾರಿಗಳು ಸ್ಥಳದಲ್ಲಿಯೇ ಇದ್ದು ಕ್ರಮ ಕೈಗೊಳ್ಳುವಂತೆ ಸೂಚಿಸಿದ ಅವರು, ಸಮಾರಂಭದ ಸಂದರ್ಭದಲ್ಲಿ ಯಾವುದೇ ರೀತಿಯ ವ್ಯತ್ಯಯ ಆಗದಂತೆ ಎಚ್ಚರಿಕೆ ವಹಿಸಲು ಸೂಚಿಸಿದರು.
  ಸಮಾರಂಭ ನಡೆಸಲು ಮುಖ್ಯ ವೇದಿಕೆ ಸಿದ್ಧಗೊಳಿಸಿದ್ದು, ಶಿಷ್ಟಾಚಾರದಂತೆ ಚುನಾಯಿತ ಪ್ರತಿನಿಧಿಗಳು ಹಾಗೂ ಹಿರಿಯ ಅಧಿಕಾರಿಗಳು ಇಲ್ಲಿ ಆಸೀನರಾಗುವರು. ಅದರಂತೆ ವೇದಿಕೆಯ ಬಲಭಾಗದಲ್ಲಿ ಪತ್ರಿಕಾ ಪ್ರತಿನಿಧಿಗಳಿಗೆ ಹಾಗೂ ವೇದಿಕೆ ಎಡಭಾಗದಲ್ಲಿ ಇತರೇ ಜನಪ್ರತಿನಿಧಿಗಳಿಗೆ ಮತ್ತು ಗಣ್ಯರಿಗೆ ಆಸನದ ವ್ಯವಸ್ಥೆ ಮಾಡಲಾಗಿದೆ.
  ಅದರಂತೆ ಸಾರ್ವಜನಿಕರಿಗೆ ಮತ್ತು ವಿದ್ಯಾರ್ಥಿಗಳಿಗೆ ಪ್ರತ್ಯೇಕವಾದ ಪೆಂಡಾಲ್ ಅಡಿಯಲ್ಲಿ ಆಸನದ ವ್ಯವಸ್ಥೆ ಮಾಡಲಾಗಿದೆ. ಕ್ರೀಡಾಂಗಣದ ಹಿಂಭಾಗದಲ್ಲಿ ವಾಹನ ನಿಲುಗಡೆಗೆ ಅವಕಾಶ ಕಲ್ಪಿಸಿದೆ.
ನೂತನ ಕ್ರೀಡಾಂಗಣ ಒದ್ದೆ: ಮಳೆಯಾಗಿ ನೂತನ ಕ್ರೀಡಾಂಗಣದ ಭೂಮಿ ಒದ್ದೆಯಾಗಿರುವ ಹಿನ್ನೆಲೆಯಲ್ಲಿ ಅದರ ಹಿಂಭಾಗದ ಹಳೆ ತಾಲೂಕಾ ಕ್ರೀಡಾಂಗಣದಲ್ಲಿ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮಕ್ಕೆ ಸಕಲ ವ್ಯವಸ್ಥೆ ಮಾಡುತ್ತಿರುವುದರಿಂದ ಎಲ್ಲ ಜನಪ್ರತಿನಿಧಿಗಳು ಜಿಲ್ಲಾಡಳಿತದೊಂದಿಗೆ ಸಹಕರಿಸುವಂತೆ ಜಿಲ್ಲಾಧಿಕಾರಿ ಎಫ್.ಆರ್. ಜಮಾದಾರ್ ಮನವಿ ಮಾಡಿದ್ದಾರೆ.
ಗುರುತಿನ ಚೀಟಿ ಕಡ್ಡಾಯ: ಅದರಂತೆ ಬಹುಮುಖ್ಯವಾದ ಈ ಸಮಾರಂಭ ಸಂದರ್ಭದಲ್ಲಿ ಶಿಷ್ಟಾಚಾರ ಪಾಲನೆ ಮಾಡಲಾಗುತ್ತಿರುವ ಹಿನ್ನಲೆಯಲ್ಲಿ ಎಲ್ಲ ಅಧಿಕಾರಿಗಳು ಕಡ್ಡಾಯವಾಗಿ ಗುರುತಿನ ಚೀಟಿಯೊಂದಿಗೆ ಆಗಮಿಸಲು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಂಶಿಕೃಷ್ಣ ತಿಳಿಸಿದ್ದಾರೆ.
  ಜಿಲ್ಲಾಧಿಕಾರಿಗಳೊಂದಿಗೆ ಪೊಲೀಸ್ ವರಿಷ್ಠಾಧಿಕಾರಿ ವಂಶಿಕೃಷ್ಣ, ಉಪವಿಭಾಗಾಧಿಕಾರಿ ಬಿ.ಪಿ. ವಿಜಯ್, ಡಿಎಸ್ಪಿ ಎಸ್.ಡಿ. ಕಟ್ಟಿಮನಿ, ಪೌರಾಯುಕ್ತ ಮುನಿರ್ ಅಹ್ಮದ್, ಯುವಜನ ಸೇವಾ ಮತ್ತು ಕ್ರೀಡಾ ಅಧಿಕಾರಿ ಸೂಗಪ್ಪ ಪಾಟೀಲ್, ನಗರಾಭಿವೃದ್ಧಿ ಕೋಶಾಧಿಕಾರಿ ಬಂಡೆಪ್ಪ ಆಕಳ ಇತರರು ಇದ್ದರು.
ಸಚಿವರಿಂದ ಧ್ವಜಾರೋಹಣ
ಯಾದಗಿರಿ: 67ನೇ ಸ್ವಾತಂತ್ರ್ಯ ದಿನಾಚರಣೆ ಸಮಾರಂಭ ಗುರುವಾರ ಇಲ್ಲಿಯ ತಾಲೂಕಾ ಕ್ರೀಡಾಂಗಣದಲ್ಲಿ ನಡೆಯಲಿದ್ದು, ಬೆಳಗ್ಗೆ 9 ಗಂಟೆಗೆ ಜವಳಿ, ಬಂದರು ಮತ್ತು ಒಳನಾಡು ಜಲಸಾರಿಗೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಬಾಬುರಾವ್ ಚಿಂಚನಸೂರ್ ರಾಷ್ಟ್ರ ಧ್ವಜಾರೋಹಣ ನೆರವೇರಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ರೇಲ್ವೆ ಖಾತೆ ಸಚಿವ ಮಲ್ಲಿಕಾರ್ಜುನ ಖರ್ಗೆ ಆಗಮಿಸುವರು. ಅಧ್ಯಕ್ಷತೆಯನ್ನು ಶಾಸಕ ಡಾ. ಮಾಲಕರೆಡ್ಡಿ ವಹಿಸುವರು. ಅತಿಥಿಗಳಾಗಿ ಜಿಪಂ ಅಧ್ಯಕ್ಷ ಶರಣಿಕುಮಾರ ಧೋಖಾ, ಸಂಸದ ಎಸ್.ಫಕೀರಪ್ಪ, ರಾಜ್ಯಸಭಾ ಸದಸ್ಯರಾದ ಡಾ. ಬಿಪಿ ಸೇಡಂ, ಶಹಾಪುರ ಶಾಸಕ ಗುರುಪಾಟೀಲ್, ರಾಜಾ ವೆಂಕಟಪ್ಪ ನಾಯಕ, ಎಂಎಲ್ಸಿ ಅಮರನಾಥ ಪಾಟೀಲ್, ಅಲ್ಲಂಪ್ರಭು ಪಾಟೀಲ, ಕೆ.ಬಿ. ಶಾಣಪ್ಪ, ತಾಪಂ ಅಧ್ಯಕ್ಷೆ ಶ್ರೀಲಕ್ಷ್ಮಿ ಚಂಡ್ರಕಿ ಪಾಲ್ಗೊಳ್ಳಲಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.