ಗುಲ್ಬರ್ಗಾ

ಬೆಳೆ ಹಾನಿ ಸಮೀಕ್ಷೆ ವರದಿ ನೀಡಿ

Published On :

ಕನ್ನಡಪ್ರಭ ವಾರ್ತೆ, ಯಾದಗಿರಿ, ಆ.22
ಜಿಲ್ಲೆಯಲ್ಲಿ ಬರ ಹಾಗೂ ಮಳೆಯಿಂದ ಹಾನಿಯಾದ ಬೆಳೆಗಳ ಬಗ್ಗೆ ಸೂಕ್ತ ಸಮೀಕ್ಷೆ ನಡೆಸಿ ಶೀಘ್ರದಲ್ಲಿ ವರದಿ ನೀಡಬೇಕೆಂದು ಜಿಲ್ಲಾ ಪಂಚಾಯಿತಿ ಹಂಗಾಮಿ ಅಧ್ಯಕ್ಷ ಶರಣಿಕಕುಮಾರ ದೋಖಾ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಗುರುವಾರ ನಡೆದ ಕೆಡಿಪಿ ಮಾಸಿಕ ಪ್ರಗತಿ ಪರಿಶೀಲನೆ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಜಿಲ್ಲೆಯನ್ನು ಬರಪೀಡಿತ ಎಂದು ಘೋಷಿಸಲು ಅನುಕೂಲವಾಗುವಂತೆ ಶೀಘ್ರದಲ್ಲಿ ಸರ್ಕಾರಕ್ಕೆ ವರದಿ ಸಲ್ಲಿಸಬೇಕು. ಜಿಲ್ಲೆಯಲ್ಲಿನ ಜನ, ಜಾನುವಾರುಗಳಿಗೆ ನೀರಿನ ಸಮಸ್ಯೆಯಾಗದಂತೆ ಎಚ್ಚರಿಕೆ ವಹಿಸುವ ಅವಶ್ಯಕತೆ ಇದೆ. ಮುಂಬರುವ ದಿನಗಳಲ್ಲಿ ಆಗಬಹುದಾದ ಕುಡಿಯುವ ನೀರಿನ ಸಮಸ್ಯೆ ಮತ್ತು ಜಾನುವಾರುಗಳಿಗೆ ಮೇವಿನ ವ್ಯವಸ್ಥೆ ಬಗ್ಗೆ ಈಗಿನಿಂದಲೇ ಯೋಜನೆ ರೂಪಿಸಿಕೊಳ್ಳಬೇಕೆಂದು ಸಲಹೆ ನೀಡಿದರು.
ಜಂಟಿ ಸಮೀಕ್ಷೆ ನಡೆಸಿ: ಜಿಲ್ಲೆಯಲ್ಲಿನ ಕೆರೆಗಳ ಬಗ್ಗೆ ಸಮಗ್ರ ವರದಿ ನೀಡಬೇಕು. ಸುಸ್ಥಿತಿಯಲ್ಲಿರುವ, ಬತ್ತಿದ ಹಾಗೂ ಹೂಳೆತ್ತಬೇಕಾದ ಕೆರೆಗಳ ಬಗ್ಗೆ ಜಂಟಿ ಸಮೀಕ್ಷೆಯನ್ನು ಸಣ್ಣ ನೀರಾವರಿ ಇಲಾಖೆ ಹಾಗೂ ಜಿಪಂ ಎಂಜನಿಯರಿಂಗ್ ಇಲಾಖೆ ಅಧಿಕಾರಿಗಳು ಮಾಡಿ ವರದಿ ನೀಡುವಂತೆ ಸಲಹೆ ನೀಡಿದರು.
ಜಿಲ್ಲೆಯಲ್ಲಿ ಕುಡಿವ ನೀರು, ಆರೋಗ್ಯ, ಶಿಕ್ಷಣ, ವಸತಿ ನಿಲಯಗಳ ವ್ಯವಸ್ಥೆ ಸುಧಾರಿಸಬೇಕು. ಮಧ್ಯಾಹ್ನದ ಬಿಸಿಯೂಟ ಯೋಜನೆ ಸಮರ್ಪಕವಾಗಿ ಜಾರಿಯಾಗಬೇಕು. ಅಡುಗೆ ಕೋಣೆಗಳನ್ನು ಸ್ವಚ್ಛವಾಗಿಟ್ಟುಕೊಳ್ಳಬೇಕು. ಇದರಲ್ಲಿ ಲೋಪವೆಸಗುವ ಅಧಿಕಾರಿ ಮತ್ತು ಸಿಬ್ಬಂದಿ ವಿರುದ್ಧ ಸೂಕ್ತಕ್ರಮ ಜರುಗಿಸಲಾಗುವುದು ಎಂದು ಸಭೆಯಲ್ಲಿ ಎಚ್ಚರಿಕೆ ನೀಡಲಾಯಿತು.
ಬಾವಿಗಳ ನೀರನ್ನು ಪರೀಕ್ಷಿಸಿ: ಜಿಲ್ಲೆಯಲ್ಲಿ ಗುರುತಿಸಿದ 19 ಗ್ರಾಮಗಳಲ್ಲಿನ್ನು ಹೊರತು ಪಡಿಸಿ ಇತರೆ ಗ್ರಾಮಗಳ ನೀರಿನಲ್ಲಿನ ಆರ್ಸೆನಿಕ್ ಅಂಶ, ನೈಟ್ರೇಟ್, ಯುರೇನಿಯಂ, ಫ್ಲೋರೈಡ್ ಅಂಶ ಪರೀಕ್ಷಿಸಿ ವರದಿ ಸಲ್ಲಿಸಬೇಕು. ಪಶುಗಳನ್ನು ಚಿಕಿತ್ಸೆಗೆ ಒಳಪಡಿಸಬೇಕು. ಪ್ರಾಥಮಿಕ ಆರೋಗ್ಯ ಕೇಂದ್ರ, ತಾಲೂಕಾ ಆರೋಗ್ಯ ಕೇಂದ್ರ, ಆಸ್ಪತ್ರೆಗಳ ವ್ಯಾಪ್ತಿಯ ಕೊಳವೆ ಬಾವಿಗಳ ನೀರನ್ನು ಪರೀಕ್ಷಿಸಬೇಕು. ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ ಅಡಿ ಜಲಾನಯನ ಇಲಾಖೆ, ತೋಟಗಾರಿಕೆ ಇಲಾಖೆ, ಅರಣ್ಯ ಇಲಾಖೆಗಳು ಪರಿಣಾಮಕಾರಿಯಾಗಿ ಹಾಗೂ ಚುರುಕಾಗಿ ಕಾರ್ಯನಿರ್ವಹಿಸಬೇಕು. ಅರಣ್ಯ ಇಲಾಖೆ, ತಾಪಂಗಳು, ಗ್ರಾಪಂಗಳು ಈ ವಿಷಯದಲ್ಲಿ ಸಮನ್ವಯತೆಯಿಂದ ಕಾರ್ಯನಿರ್ವಹಿಸುವಂತೆ ಜಿಪಂ ಮುಖ್ಯ ಕಾರ್ಯನಿರ್ವಾಕ ಅಧಿಕಾರಿ ಎಸ್.ಎ. ಜಿಲಾನಿ ತಿಳಿಸಿದರು.
ಅಧಿಕಾರಿಗಳಿಗೆ ಸೂಚನೆ: ಶಾಲಾ ಕಟ್ಟಡ ನಿರ್ಮಾಣ, ಗ್ರಾಪಂ ವ್ಯಾಪ್ತಿಯ ಸರ್ಕಾರಿ ಆಸ್ತಿಗಳ ಬಗ್ಗೆ ಹಾಗೂ ಅಂಗನವಾಡಿ ವ್ಯವಸ್ಥೆಗಳ ಬಗ್ಗೆ ಮತ್ತು ಅವಶ್ಯಕ ಇರುವ ವ್ಯವಸ್ಥೆಗಳ ಬಗ್ಗೆ ವರದಿ ನೀಡುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.
ಸಭೆಯಲ್ಲಿ ಕೃಷಿ ಇಲಾಖೆ ಅಧಿಕಾರಿಗಳು ಮುಂಗಾರು ಹಂಗಾಮಿನ ಬಿತ್ತನೆ ಹಾಗೂ ಮಳೆ ಮಾಹಿತಿ ನೀಡಿದರು. ಜಿಲ್ಲೆಯಲ್ಲಿ 2.40 ಲಕ್ಷ ಹೆಕ್ಟೇರ್ ಭೂಮಿಯಲ್ಲಿ ಬಿತ್ತನೆಯಾಗಿದೆ. ವಾಡಿಕೆ ಮಳೆ ಅಗಸ್ಟ್ ತಿಂಗಳಲ್ಲಿ 161 ಮಿಮೀ ಮಳೆಯಾಗಬೇಕಾಗಿತ್ತು. ಆದರೆ 109 ಮಿಮೀ ಮಳೆಯಾಗಿದೆ. 14,593 ಮೆಟ್ರಿಕ್ ಟನ್ ಗೊಬ್ಬರ ದಾಸ್ತಾನಿದೆ. ಯೂರಿಯಾ ಬೇಡಿಕೆ ಹೆಚ್ಚಾಗಿದ್ದರಿಂದ ಶೀಘ್ರದಲ್ಲಿ 5ಸಾವಿರ ಮೆಟ್ರಿಕ್‌ಟನ್ ಗೊಬ್ಬರ ತರಿಸಲಾಗುತ್ತದೆ ಎಂದು ಸಭೆಗೆ ತಿಳಿಸಿದರು.
ಶಿಕ್ಷಕರ ನೇಮಿಕ: ಶಿಕ್ಷಣ ಇಲಾಖೆ ಅಧಿಕಾರಿಗಳು, ಜಿಲ್ಲೆಯಲ್ಲಿ 1055 ಪ್ರಾಥಮಿಕ ಶಾಲಾ ಶಿಕ್ಷಕರ ಕೊರತೆಯಿದೆ. ಕೊರತೆ ಇರುವ ಶಾಲೆಗಳಲ್ಲಿ ಗೌರವಧನದ ಆಧಾರದ ಮೇಲೆ ಶಿಕ್ಷಕರನ್ನು ನೇಮಿಸಲಾಗುವುದು. ಶಿಕ್ಷಕರು ಮತ್ತು ವಿದ್ಯಾರ್ಥಿಗಳ 1-30 ಅನುಪಾತ ಕಾಪಾಡಲಾಗುವುದು ಎಂದು ಸಭೆಗೆ ತಿಳಿಸಿದರು.
ಮುಖ್ಯ ಯೋಜನಾಧಿಕಾರಿ ಬಸವರಾಜ ಸ್ವಾಗತಿಸಿದರು. ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನೆ ನಡೆಸಲಾಯಿತು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.