ಕೃಷಿ ಉತ್ಪನ್ನಗಳಿಗೆ ಬೆಂಬಲ ಬೆಲೆ: ಸಿಎಂ
ದೇವದುರ್ಗ; ರಾಜ್ಯದ ರೈತರ ಕೃಷಿ ಉತ್ಪನ್ನಗಳಿಗೆ ಸಮರ್ಪಕ ಬೆಲೆ ದೊರೆಯುವಂತಾಗಲು ರಾಜ್ಯ ಸರ್ಕಾರ ಕೃಷಿ ಆಯೋಗ ರಚಿಸಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ತಾಲೂಕಿನ ಅರಕೇರಾದಲ್ಲಿ ಬುಧವಾರ ನಾರಾಯಣಪುರ ಬಲದಂಡೆ ಕಾಲುವೆಯ 95ನೇ ಕಿಮೀ.ನಿಂದ 125 ಕಿಮೀ.ವರೆಗಿನ ವಿಸ್ತರಣೆ ಮತ್ತಿತರೆ ಕಾಮಗಾರಿಗಳಿಗೆ ಚಾಲನೆ ನೀಡಿ ಮಾತನಾಡಿ, ರಾಜ್ಯದಲ್ಲಿ ರೈತರು ಬೆಳೆಯುವ ಬಹುತೇಕ ಎಲ್ಲ ಬೆಳೆಗಳಿಗೆ ರಾಜ್ಯ ಸರ್ಕಾರದಿಂದ ಹೆಚ್ಚುವರಿಯಾಗಿ ಬೆಂಬಲ ಬೆಲೆ ನೀಡಲಾಗಿದೆ ಎಂದು ತಿಳಿಸಿದರು.
ಜಿಲ್ಲೆಯ ರೈತರಿಗೆ ನೀರಾವರಿ ಸೌಲಭ್ಯ ಕಲ್ಪಿಸಲು ನಾರಾಯಣಪುರ ಬಲದಂಡೆ ಕಾಲುವೆಯನ್ನು ಶೀಘ್ರದಲ್ಲಿಯೇ 165 ಕಿಮೀ.ವರೆಗೆ ವಿಸ್ತರಿಸಲು ಸರ್ಕಾರ ಕ್ರಮ ಕೈಗೊಳ್ಳಲಿದೆ. ಸದ್ಯ 95ನೇ ಕಿಮೀ.ನಿಂದ 125 ಕಿಮೀ.ವರೆಗೆ ಕಾಮಗಾರಿಗೆ ಚಾಲನೆ ನೀಡಿದ್ದು, ಶೀಘ್ರವೇ ಬಾಕಿ ಕಾಮಗಾರಿಗೂ ಚಾಲನೆ ನೀಡಲಾಗುತ್ತದೆ ಎಂದರು.
5 ವರ್ಷಗಳಲ್ಲಿ ಪೂರ್ಣ: ಕಾಂಗ್ರೆಸ್ ಸರ್ಕಾರ ನೀರಾವರಿ ಯೋಜನೆಗಳಿಗೆ ಹೆಚ್ಚಿನ ಆದ್ಯತೆ ನೀಡಿ ಪ್ರತಿ ವರ್ಷ 10 ಸಾವಿರ ಕೋಟಿ ವೆಚ್ಚ ಮಾಡಲು ನಿರ್ಧರಿಸಿದೆ. ಕೃಷ್ಣಾ ಮತ್ತು ಕಾವೇರಿ ಸೇರಿ ರಾಜ್ಯದಲ್ಲಿ ಬಾಕಿಯಿರುವ ಹಾಗೂ ಉದ್ದೇಶಿತ ಎಲ್ಲ ನೀರಾವರಿ ಯೋಜನೆಗಳ ಕಾಮಗಾರಿಗಳನ್ನು ಮುಂದಿನ 5 ವರ್ಷದಲ್ಲಿ ಪೂರ್ಣಗೊಳಿಸುವುದಾಗಿ ಭರವಸೆ ನೀಡಿದರು.
ರಾಜ್ಯ ಸರ್ಕಾರ ಎಲ್ಲ ಜಾತಿ ಜನಾಂಗದವರಿಗೆ ಅನುಕೂಲವಾಗುವಂಥ ಯೋಜನೆಗಳನ್ನು ಜಾರಿಗೆ ತಂದಿದೆ. ಆದರೆ ಪ್ರತಿಪಕ್ಷಗಳು ತಮ್ಮನ್ನು ಅಹಿಂದ ಪರವಾಗಿ ಕಾರ್ಯನಿರ್ವಹಿಸುತ್ತಿರುವ ಬಗ್ಗೆ ಟೀಕಿಸುತ್ತಿರುವುದು ಸರಿಯಲ್ಲ. ಶೋಷಿತ ಸಮಾಜ ಮತ್ತು ಕಡು ಬಡವರ, ಕೃಷಿ ಕೂಲಿಕಾರರ ಪರವಾಗಿ ಸರ್ಕಾರ ಯಾವಾಗಲೂ ಕಾರ್ಯಕ್ರಮ ರೂಪಿಸುತ್ತದೆ ಎಂದರು.
ಅನುದಾನಕ್ಕೆ ಶಾಸಕ ಮನವಿ: ಶಾಸಕ ಎ.ವೆಂಕಟೇಶ ನಾಯಕ ಮಾತನಾಡಿ, ಅರಕೇರಾ ಗ್ರಾಮಕ್ಕೆ ನೂತನ ಪೊಲೀಸ್ ಠಾಣೆ ಮಂಜೂರು ಮಾಡುವುದು, ತಾಲೂಕಿನ ರಸ್ತೆ, ಕುಡಿವ ನೀರು, ವಸತಿ, ಶಾಲಾ ಕಾಲೇಜುಗಳ ಕಟ್ಟಡ, ವಸತಿ ನಿಲಯ ಸೇರಿ ವಿವಿಧ ಸೌಲಭ್ಯಗಳ ಒದಗಿಸಲು ಅಗತ್ಯ ಅನುದಾನಕ್ಕೆ ಬೇಡಿಕೆಯಿರಿಸಿದರು.
ತಾಲೂಕಿನ ಅಭಿವೃದ್ಧಿಗಾಗಿ ಈ ಹಿಂದಿನ ಸರ್ಕಾರದ ಅವಧಿಯಲ್ಲಿ ಬಿಡುಗಡೆಯಾದ ಅನುದಾನ ದುರ್ಬಳಕೆಯಾಗಿರುವ ಬಗ್ಗೆ ದೂರಿನ ಹಿನ್ನೆಲೆ ಸಮಗ್ರ ತನಿಖೆ ನಡೆಸುವಂತೆ ಸಿಎಂ ಅವರಲ್ಲಿ ಮನವಿ ಮಾಡಿ, ನಾರಾಯಣಪುರ ಬಲದಂಡೆ ಕಾಲುವೆಗೆ ಮಾ.25ರ ವರೆಗೆ ನೀರು ಹರಿಸಬೇಕೆಂದು ಒತ್ತಾಯಿಸಿದರು.
ಎನ್ನಾರ್ಬಿಸಿ ಆಧುನೀಕರಣಕ್ಕೆ ಆದ್ಯತೆ ಕೊಡಿ: ನಾರಾಯಣಪುರ ಬಲದಂಡೆ ಕಾಲುವೆ ಆಧುನೀಕರಣ ಕಾಮಗಾರಿ ಕೈಗೊಳ್ಳಬೇಕು. ಅದರಿಂದ ರೈತರಿಗೆ ಸಮರ್ಪಕ ನೀರು ದೊರೆಯುತ್ತದೆ. ಆಧುನೀಕರಣಕ್ಕೆ 750 ಕೋಟಿ ಪ್ರಸ್ತಾವನೆ ಸಲ್ಲಿಸಿದ್ದು, ಮಂಜೂರಾತಿ ನೀಡುವಂತೆ ಮನವಿ ಮಾಡಿದ ಅವರು, ಅರಕೇರಾದ ಸೂಗೂರೇಶ್ವರ ದೇವಸ್ಥಾನದಲ್ಲಿ ಯಾತ್ರಿ ನಿವಾಸ ನಿರ್ಮಾಣಕ್ಕೆ 50 ಲಕ್ಷ ಸೇರಿ ವಿವಿಧ ಕಾಮಗಾರಿಗಳಿಗೆ ಹಣ ಒದಗಿಸಲು ಮನವಿ ಮಾಡಿದರು.
ಈ ಸಂದರ್ಭ ಸಚಿವರಾದ ಎಂ.ಬಿ. ಪಾಟೀಲ್, ಡಾ. ಎಚ್.ಸಿ. ಮಹದೇವಪ್ಪ, ಡಾ.ಶರಣಪ್ರಕಾಶ ಪಾಟೀಲ್ ಮಾತನಾಡಿದರು. ಶಾಸಕರಾದ ಹಂಪನಗೌಡ ಬಾದರ್ಲಿ, ಡಾ. ಶಿವರಾಜ ಪಾಟೀಲ್, ಪ್ರತಾಪಗೌಡ ಪಾಟೀಲ್, ಮಾಜಿ ಶಾಸಕರಾದ ಅಮರೇಗೌಡ ಬಯ್ಯಾಪೂರ, ಎ.ಪಾಪಾರೆಡ್ಡಿ, ಕಾಂಗ್ರೆಸ್ ಜಿಲ್ಲಾಧ್ಯಕ್ಷ ಎ.ವಸಂತಕುಮಾರ, ಬಿ.ವಿ. ನಾಯಕ, ಜಿಪಂ ಅಧ್ಯಕ್ಷೆ ಲಲಿತಮ್ಮ ಪಾಟೀಲ್, ಉಪಾಧ್ಯಕ್ಷ ಕೆ.ಶರಣಪ್ಪ, ಜಿಪಂ ಮಾಜಿ ಅಧ್ಯಕ್ಷ ರಾಮಣ್ಣ ಇರಬಗೇರಾ, ಆರ್ಡಿಸಿಸಿ ಬ್ಯಾಂಕ್ ಅಧ್ಯಕ್ಷ ಎ.ರಾಜಶೇಖರ ನಾಯಕ ಸೇರಿ ಅನೇಕರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

