ಎಸ್ಡಿಪಿ ಯೋಜನೆ: ನಿಗದಿತ ಗುರಿ ಸಾಧನೆಗೆ ಸೂಚನೆ
ಗುಲ್ಬರ್ಗ: ರಾಜ್ಯದ ಹಿಂದುಳಿದ ಭಾಗಗಳಿಗೆ ವಿಶೇಷ ಆದ್ಯತೆ ಹಾಗೂ ಅನುದಾನ ನೀಡುವಂತೆ ಶಿಫಾರಸ್ಸು ಮಾಡಿರುವ ಡಾ. ಡಿ.ಎಂ. ನಂಜುಂಡಪ್ಪ ಸಮಿತಿ ವರದಿಯ ಹಿನ್ನೆಲೆಯಲ್ಲಿ ಹಿಂದುಳಿದ ತಾಲೂಕುಗಳ ಅಭಿವೃದ್ಧಿಗೆ ಸರ್ಕಾರ 2007-08 ರಿಂದ ವಿಶೇಷ ಅಭಿವೃದ್ಧಿ ಯೋಜನೆಯಡಿ ಅಪಾರ ಅನುದಾನವನ್ನು ಬಿಡುಗಡೆ ಮಾಡಿದೆ ಆ ಹಣವನ್ನು ವ್ಯಯ ಮಾಡದೇ ನಿಗದಿತ ಗುರಿಯನ್ನು ಸಾಧಿಸುವಂತೆ ಡಾ. ಡಿ.ಎಂ. ನಂಜುಂಡಪ್ಪ ವರದಿ ಅನುಷ್ಠಾನ ಉನ್ನತಾಧಿಕಾರ ಸಮಿತಿ ಅಧ್ಯಕ್ಷ ತ್ರಿವಿಕ್ರಮ ಜೋಶಿ ಅವರು ಅಧಿಕಾರಿಗಳಿಗೆ ಸೂಚಿಸಿದರು.
ಜಿಲ್ಲಾಧಿಕಾರಿ ಸಭಾಂಗಣದಲ್ಲಿ 2012-13ನೇ ಸಾಲಿನ ವಿಶೇಷ ಅಭಿವೃದ್ಧಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ರಾಜ್ಯದಲ್ಲಿ ಹಿಂದುಳಿದ ತಾಲೂಕುಗಳೆಂದು ಡಾ. ಡಿ.ಎಂ. ನಂಜುಂಡಪ್ಪ ಅವರು ವರದಿ ನೀಡಿರುವ 114 ತಾಲೂಕುಗಳ ಅಭಿವೃದ್ಧಿಗೆ ವಿಶೇಷ ಅನುದಾನವನ್ನು ಬಿಡುಗಡೆ ಮಾಡುವಂತೆ ನಂಜುಂಡಪ್ಪ ಅವರು ಸರ್ಕಾರಕ್ಕೆ ಸಲಹೆ ನೀಡಿದ್ದರು.
ಅನುದಾನ: ಈ ಹಿನ್ನೆಲೆಯಲ್ಲಿ 2007-08ರಿಂದ ಹಿಂದುಳಿದ ಭಾಗಗಳ ಅಭಿವೃದ್ಧಿಗೊಳಿಸುವ ನಿಟ್ಟಿನಲ್ಲಿ ವಿಶೇಷ ಅಭಿವೃದ್ಧಿ ಯೋಜನೆಗಳ ಅನುಷ್ಠಾನಕ್ಕೆ ಸರ್ಕಾರ ಅನುದಾನ ನೀಡಿದೆ. ಈ ಹಣ ವ್ಯಯವಾಗದೆ ಅದನ್ನು ಅಭಿವೃದ್ಧಿಪರ ಕಾಮಗಾರಿಗಳಿಗೆ ಬಳಕೆ ಮಾಡಿಕೊಳ್ಳಬೇಕು ಹಾಗೂ ವಿಶೇಷ ಅಭಿವೃದ್ಧಿ ಯೋಜನೆಯಡಿ ನಡೆಸಲಾಗುವ ಯಾವುದೇ ಕಾಮಗಾರಿಗಳಿಗೆ ಡಾ. ಡಿ.ಎಂ. ನಂಜುಂಡಪ್ಪ ವರದಿಯ ವಿಶೇಷ ಅಭಿವೃದ್ಧಿ ಯೋಜನೆ ಎಂಬ ನಾಮಫಲಕವನ್ನು ಕಾಮಗಾರಿಯ ಹೆಸರು, ಪೂರ್ಣಗೊಂಡ ವರ್ಷ ಹಾಗೂ ಅದಕ್ಕೆ ನೀಡಲಾದ ಅನುದಾನದ ವಿವರದ ಫಲಕವನ್ನು ಅಳವಡಿಸಬೇಕು. ಇದೇ ರೀತಿ ಮಾಡುವಂತೆ ಸಂಬಂಧಪಟ್ಟ ಎಲ್ಲ ಕಾರ್ಯದರ್ಶಿಗಳಿಗೆ ಸೂಚಿಸಲಾಗಿದೆ. ಎಲ್ಲಕ್ಕಿಂತ ಮುಖ್ಯವಾಗಿ ಅದು ಜನಸಾಮಾನ್ಯರಿಗೆ ತಿಳಿಯಬೇಕೆಂದು ಅವರು ಹೇಳಿದರು.
ಪ್ರಗತಿ ಪರಿಶೀಲನೆ: ಈ ಸಂದರ್ಭದಲ್ಲಿ ಕೃಷಿ, ಪಶುಸಂಗೋಪನೆ, ಶಿಕ್ಷಣ, ಆರೋಗ್ಯ, ತೋಟಗಾರಿಕೆ, ವಸತಿ, ನೀರಾವರಿ, ಲೋಕೋಪಯೋಗಿ, ಗ್ರಾಮೀಣಾಭಿವೃದ್ಧಿ, ಪ್ರವಾಸೋದ್ಯಮ, ರಸ್ತೆ ಸಾರಿಗೆ, ಜಲಾನಯನ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಲ್ಲಿ ವಿಶೇಷ ಅಭಿವೃದ್ಧಿ ಯೋಜನೆಯಡಿಯಲ್ಲಿ ಕೈಗೊಳ್ಳಲಾದ ಕಾಮಗಾರಿಗಳ ಪ್ರಗತಿ ಪರಿಶೀಲನೆಯನ್ನು ತ್ರಿವಿಕ್ರಮ ಜೋಷಿ ಅವರು ನಡೆಸಿದರು.
ಕೃಷಿ ಇಲಾಖೆಗೆ ಸಂಬಂಧಪಟ್ಟಂತೆ ಮಾತನಾಡಿದ ಜೋಶಿಯವರು ಗುಲ್ಬರ್ಗ, ಜೇವರ್ಗಿ ಹಾಗೂ ಚಿಂಚೋಳಿಯಲ್ಲಿ ನಿರ್ಮಿಸಬೇಕಿರುವ ರೈತ ಸಂಪರ್ಕ ಕೇಂದ್ರ ಕಟ್ಟಡಗಳಿಗೆ ಸಾಧ್ಯವಾದಷ್ಟು ಬೇಗ ಅನುಮತಿ ನೀಡುವಂತೆ ಕೃಷಿ ಇಲಾಖೆಯ ಪ್ರಧಾನ ಕಾರ್ಯದರ್ಶಿ ಅವರಿಗೆ ತಿಳಿಸಲಾಗಿದೆ.
ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಈ ಬಗ್ಗೆ ಕ್ರಮ ವಹಿಸಬೇಕು. ಕೂಡಲೇ ಅನುಮತಿ ಪಡೆಯುವಂತೆ ಅವರು ಸೂಚಿಸಿದರು.ಸೌಲಭ್ಯ: ಶಿಕ್ಷಣ ಇಲಾಖೆಗೆ ಸಂಬಂಧಪಟ್ಟಂತೆ ಮಾತನಾಡಿದ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಜಯರಾಮ ಜಿಲ್ಲೆಗೆ 24163 ಸೈಕಲ್ಗಳನ್ನು ವಿದ್ಯಾರ್ಥಿಗಳಿಗೆ ವಿತರಿಸಲು ನೀಡಲಾಗಿತ್ತು. ಗುರಿ ಸಾಧಿಸಲಾಗಿದ್ದು, ಪಂಚ ಸೌಲಭ್ಯ ಯೋಜನೆಯಡಿ ಪ್ರತಿ ಶಾಲೆಗೆ ಕುಡಿವ ನೀರು, ಶೌಚಾಲಯ, ಆಟದ ಮೈದಾನ, ಕಂಪೌಂಡ್ ಮುಖ್ಯವಾಗಿ ಪೀಠೋಪಕರಣಗಳನ್ನು ಒದಗಿಸಲಾಗುತ್ತಿದೆ. ಪ್ರಥಮಾಧ್ಯತೆಗಾಗಿ ಎಸ್ಎಸ್ಎಲ್ಸಿ ವಿದ್ಯಾರ್ಥಿಗಳಿಗೆ ಅಗತ್ಯವಿರುವ ಎಲ್ಲ ಪೀಠೋಪಕರಣಗಳನ್ನು ಒದಗಿಸಲಾಗಿದೆ ಎಂದರು.
ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಎನ್.ಎಸ್. ಪ್ರಸನ್ನಕುಮಾರ್, ಜಿಪಂ ಕಾರ್ಯನಿರ್ವಹಣಾಧಿಕಾರಿ ಪಲ್ಲವಿ ಆಕುರಾತಿ, ಎಚ್ಕೆಡಿಬಿ ಅಧ್ಯಕ್ಷ ಮಹಾಂತಗೌಡ ಉಪಸ್ಥಿತರಿದ್ದರು. ಸಂಬಂಧಪಟ್ಟ ಎಲ್ಲ ಅಧಿಕಾರಿಗಳು ಹಾಜರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

