ಗುಲ್ಬರ್ಗಾ

ಇ- ಪಡಿತರ ಯಂತ್ರ ಸ್ಥಾಪನೆ: ಸಚಿವ

Published On :

ಗುಲ್ಬರ್ಗ: ಪಡಿತರ ವಿತರಣಾ ವ್ಯವಸ್ಥೆ ಬಲಗೊಳಿಸಲು ಗುಲ್ಬರ್ಗ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಇ- ಪಡಿತರ ಯಂತ್ರ ಸ್ಥಾಪನೆ ಮಾಡಲಾಗುತ್ತಿದೆ ಎಂದು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ರಾಜ್ಯ ಸಚಿವ ದಿನೇಶ ಗುಂಡೂರಾವ ಹೇಳಿದರು.
ಬಜೆಟ್ ಅಧಿವೇಶನದಲ್ಲಿ ವಿಧಾನ ಪರಿಷತ್‌ನಲ್ಲಿ ನಡೆದ ಕಲಾಪ ವೇಳೆ ಸದಸ್ಯ ಅಲ್ಲಮಪ್ರಭು ಪಾಟೀಲ್ ಪ್ರಶ್ನೆಗೆ ಉತ್ತರಿಸಿ, ಗುಲ್ಬರ್ಗ ಜಿಲ್ಲೆಯ ಎಲ್ಲ ನ್ಯಾಯಬೆಲೆ ಅಂಗಡಿಗಳಲ್ಲಿ ವಿಶೇಷ ಸಾಮರ್ಥ್ಯ ಹೊಂದಿದ ಇ- ಪಡಿತರ ಯಂತ್ರ ಸ್ಥಾಪನೆ ಮಾಡುವ ಕೆಲಸ ಪ್ರಗತಿಯಲ್ಲಿದೆ. ಶೀಘ್ರದಲ್ಲಿ ಯಾದಗಿರಿ ಜಿಲ್ಲೆಯಲ್ಲೂ ಈ ವ್ಯವಸ್ಥೆ ಮಾಡಲಾಗುವುದು ಎಂದರು.
ಗುಲ್ಬರ್ಗ ಜಿಲ್ಲೆಯಲ್ಲಿ ಸುಮಾರು 4.04 ಲಕ್ಷ ಮತ್ತು ಯಾದಗಿರಿ ಜಿಲ್ಲೆಯಲ್ಲಿ 1.66 ಲಕ್ಷ ಬಿಪಿಎಲ್ ಕುಟುಂಬಗಳಿವೆ. ಪಡಿತರ ಅಸಮರ್ಪಕ ವಿತರಣೆಯಿಂದಾಗಿ ಬಡವರು ತೊಂದರೆಗೆ ಒಳಗಾಗಿರುವುದು ಗಮನಕ್ಕೆ ಬಂದಿದೆ ಎಂದು ಅವರು ಮತ್ತೊಂದು ಪ್ರಶ್ನೆಗೆ ಉತ್ತರಿಸಿದರು. ಜಿಲ್ಲೆಗೊಂದು ಸರ್ಕಾರಿ ವೈದ್ಯಕೀಯ ಕಾಲೇಜು ಪ್ರಾರಂಭಿಸಲು ಉದ್ದೇಶಿಸಲಾಗಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣಪ್ರಕಾಶ ಪಾಟೀಲ್ ಹೇಳಿದರು. ಸದಸ್ಯ ಅಲ್ಲಂಪ್ರಭು ಪಾಟೀಲ್ ಪ್ರಶ್ನೆಗೆ ಉತ್ತರಿಸಿದ ಅವರು, ಈ ಪೈಕಿ ಪ್ರಸಕ್ತ ಸಾಲಿನಲ್ಲಿ ಕೆಲವು ಮತ್ತು ಉಳಿದವುಗಳನ್ನು ಹಂತ ಹಂತವಾಗಿ ಪ್ರಾರಂಭಿಸಲಾಗುವುದು ಎಂದರು. 2013-14ನೇ ಸಾಲಿನ ಪರಿಷ್ಕೃತ ಅಯವ್ಯಯದಲ್ಲಿ ಕಾರವಾರ, ಕೊಡಗು, ಕೊಪ್ಪಳ ಮತ್ತು ಚಾಮರಾಜನಗರದಲ್ಲಿ ಸರ್ಕಾರಿ ವೈದ್ಯಕೀಯ ಕಾಲೇಜು ಪ್ರಾರಂಭಿಸಲಾಗುತ್ತಿದೆ ಎಂದರು.
ಮತ್ತೊಂದು ಪ್ರಶ್ನೆಗೆ ಉತ್ತರಿಸಿ ಸಚಿವ ಡಾ. ಶರಣಪ್ರಕಾಶ, ಕೇಂದ್ರ ಸರ್ಕಾರದ ಇಎಸ್‌ಐ ವತಿಯಿಂದ ಗುಲ್ಬರ್ಗ ನಗರದಲ್ಲಿ ವೈದ್ಯಕೀಯ ಕಾಲೇಜು ಹೊಸದಾಗಿ ಪ್ರಾರಂಭಿಸಲಾಗುತ್ತಿದೆ. ಈ ಕಾಲೇಜಿನ ವಿದ್ಯಾರ್ಥಿಗಳ ಕ್ಲಿನಿಕಲ್ ಸೌಲಭ್ಯಕ್ಕಾಗಿ ಗಲ್ಬರ್ಗ ಜಿಲ್ಲಾಸ್ಪತ್ರೆಯೊಂದಿಗೆ ಒಡಂಬಡಿಕೆ ಮಾಡಿಕೊಳ್ಳಲಾಗಿದೆ ಎಂದು ಹೇಳಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.