ಹೋಬಳಿವಾರು ಬಿತ್ತನೆ ಮಾಹಿತಿ: ಅಧಿಕಾರಿಗಳಿಗೆ ಸಿಇಒ ಸೂಚನೆ
ಕ.ಪ್ರ.ವಾರ್ತೆ,ಯಾದಗಿರಿ, ಜು.17
ಜಿಲ್ಲೆಯ ಪ್ರತಿ ಹೋಬಳಿ ಹಾಗೂ ತಾಲೂಕಾ ಮಟ್ಟದಲ್ಲಿ ಮೇ ತಿಂಗಳಿಂದ ಈವರೆಗೆ ಆಗಿರುವ ಮಳೆ ಪ್ರಮಾಣ ಹಾಗೂ ಬೆಳೆ ಬಿತ್ತನೆ ಬಗ್ಗೆ ವರದಿ ನೀಡುವಂತೆ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎಸ್.ಎ. ಜಿಲಾನಿ ಕೃಷಿ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ಮಾಹಿತಿ ಅಗತ್ಯ: ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಅಧ್ಯಕ್ಷೆ ಮರೆಮ್ಮ ಶ್ಯಾಣ್ಯಾನೋರ ಅಧ್ಯಕ್ಷತೆಯಲ್ಲಿ ಬುಧವಾರ ನಡೆದ ಮಾಸಿಕ ಕೆಡಿಪಿ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿದರು. ಮುಂಬರುವ ದಿನಗಳಲ್ಲಿ ಉತ್ತಮ ಮಳೆಯಾದಲ್ಲಿ ಜಿಲ್ಲೆಗೆ ಅನುಕೂಲವಾಗಲಿದೆ. ಒಂದು ವೇಳೆ ಸಮರ್ಪಕವಾದ ಮಳೆಯಾಗದಿದ್ದಲ್ಲಿ ಬರಪೀಡಿತ ಜಿಲ್ಲೆಯೆಂದು ಪರಿಗಣಿಸಲು ಸರ್ಕಾರಕ್ಕೆ ಸೂಕ್ತ ಮಾಹಿತಿ ನೀಡಬೇಕಾಗುತ್ತದೆ. ಅದರಂತೆ ಅರ್ಹ ರೈತ ಫಲಾನುಭವಿಗಳಿಗೆ ಬೆಳೆ ಪರಿಹಾರ ನೀಡುವಂತಹ ಪರಿಸ್ಥಿತಿ ಸಹ ಬರಬಹುದು. ಈ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಈವರೆಗೆ ಆಗಿರುವ ಮಳೆ ಪ್ರಮಾಣ ಹಾಗೂ ಬಿತ್ತನೆ ಪ್ರಮಾಣಗಳ ಬಗ್ಗೆ ಹೋಬಳಿವಾರು ಹಾಗೂ ತಾಲೂಕಾವಾರು ಪರಿಶೀಲನೆ ನಡೆಸಿ ಅವಶ್ಯಕ ವರದಿ ನೀಡುವಂತೆ ಕೃಷಿ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.
ಜಿಲ್ಲೆಯಲ್ಲಿ ಸರಾಸರಿ 836 ಮಿಮೀ ಮಳೆಯಾಗಬೇಕಾಗಿದೆ. ಈವರೆಗೆ ಒಟ್ಟು 203 ಮಿಮೀ ಮಾತ್ರ ಮಳೆಯಾಗಿದ್ದು, ಶಹಾಪುರ ತಾಲೂಕಿನಲ್ಲಿ 75 ಮಿಮೀ, ಸುರಪುರದಲ್ಲಿ 104 ಮಿಮೀ ಹಾಗೂ ಯಾದಗಿರಿಯಲ್ಲಿ 88 ಮಿಮೀ ಮಳೆಯಾಗಿದೆ. ಜುಲೈ ಅಂತ್ಯದವರೆಗೆ ಮಳೆ ಪರಿಸ್ಥಿತಿ ಹಾಗೂ ಬೆಳೆ ಪರಿಸ್ಥಿತಿಗಳ ಬಗ್ಗೆ ಅವಲೋಕನ ನಡೆಸಿ ನಂತರ ಕೃಷಿ ಇಲಾಖೆ ಅಧಿಕಾರಿಗಳಿಂದ ನೀಡಲಾಗುವ ವರದಿ ಆಧಾರದ ಮೇಲೆ ಸರ್ಕಾರಕ್ಕೆ ಈ ಕುರಿತು ಸೂಕ್ತ ಮಾಹಿತಿ ಒಳಗೊಂಡ ವರದಿಯನ್ನು ಸಲ್ಲಿಸಲಾಗುವುದೆಂದರು.
ಶುದ್ಧ ನೀರು ಪೂರೈಕೆ: ಜಿಲ್ಲೆಯಲ್ಲಿ ಆರ್ಸೆನಿಕ್ ನೀರಿನ ಸಮಸ್ಯೆಗಳನ್ನು ಎದುರಿಸುತ್ತಿರುವ 19 ಗ್ರಾಮಗಳ ಪೈಕಿ 7 ಗ್ರಾಮಗಳಲ್ಲಿ ಶುದ್ಧ ನೀರು ಪೂರೈಸುವ ಕ್ರಮ ಕೈಗೊಳ್ಳಲಾಗಿದೆ. ಸುಮಾರು 52 ಕೊಳವೆ ಬಾವಿ ನೀರು ಕುಡಿಯಲು ಯೋಗ್ಯವಿಲ್ಲದ್ದರಿಂದ ತಕ್ಷಣ ಅವುಗಳನ್ನು ಸ್ಥಗಿತಗೊಳಿಸಬೇಕು. ಸಂಬಂಧಪಟ್ಟ ಗ್ರಾಮಗಳಿಗೆ ಟ್ಯಾಂಕರ್ ಮೂಲಕ ನೀರಿನ ಸರಬರಾಜು ಮಾಡಬೇಕು. ಆರ್ಸೆನಿಕ್ ಸಮಸ್ಯೆ ಎದುರಿಸುತ್ತಿರುವ ಇತರೆ ಗ್ರಾಮಗಳಲ್ಲಿ ಜಿಪಂ ಸದಸ್ಯರ ಸಹಕಾರ ಪಡೆದು ಆರ್ಸೆನಿಕ್ ನೀರಿನ ಸಮಸ್ಯೆ ಪರಿಹರಿಸಲು ಸಂಬಂಧಪಟ್ಟ ಅಧಿಕಾರಿಗಳು ಕ್ರಮಕೈಗೊಳ್ಳಬೇಕು. ನೀರು ಶುದ್ಧೀಕರಣ ಘಟಕ ಸ್ಥಾಪನೆಗೆ ಸಂಬಂಧಪಟ್ಟಂತೆ ಸ್ಥಳವನ್ನು ಪರಿಶೀಲಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.
ಸೌಲಭ್ಯದ ವಿವರ ನೀಡಿ: ಗ್ರಾಮೀಣ ನೀರು ಸರಬರಾಜು ಯೋಜನೆ ಹಾಗೂ ಜಲ ಮರುಪೂರಣ ಯೋಜನೆಗಳ ವ್ಯಾಪ್ತಿಯಲ್ಲಿ ಕಾಮಗಾರಿ ಚುರುಕುಗೊಳಿಸಬೇಕು.
ಗ್ರಾಮೀಣ ಸರ್ಕಾರಿ ಶಾಲೆಗಳಿಗೆ ಮತ್ತು ಅಂಗನವಾಡಿಗಳಿಗೆ ಕುಡಿಯುವ ನೀರಿನ ಸೌಲಭ್ಯ ಕಲ್ಪಿಸುವ ಕುರಿತಂತೆ ಸಾರ್ವಜನಿಕ ಶಿಕ್ಷಣ ಇಲಾಖೆ, ಪಂಚಾಯತ್ ರಾಜ್ ಎಂಜಿನಿಯರಿಂಗ್ ವಿಭಾಗದ ಅಧಿಕಾರಿಗಳು ಹಾಗೂ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ಜಂಟಿಯಾಗಿ ಪರಿಶೀಲನೆ ನಡೆಸಿ ವರದಿ ನೀಡಬೇಕು. ಕೆಲಸ ಆಗದಿದ್ದರೂ ಹಣ ಸಂದಾಯವಾಗಿರುವ ಬಗ್ಗೆ ಮಾಹಿತಿ ನೀಡುವಂತೆ ಸಿಇಒ ಜಿಲಾನಿ ಸೂಚಿಸಿದರು.
ಅಧ್ಯಕ್ಷೆ ಮರೆಮ್ಮ ಶಾಣ್ಯಾನೋರ್, ನೀರಿನ ಸಮಸ್ಯೆ ಎದುರಿಸುತ್ತಿರುವ ಗ್ರಾಮಗಳಿಗೆ ಕುಡಿಯುವ ನೀರಿನ ಸೌಲಭ್ಯ ಆದ್ಯತೆ ಮೇಲೆ ದೊರಕಿಸಿಕೊಡಬೇಕು ಎಂದು ತಿಳಿಸಿದರು. ಉಪಾಧ್ಯಕ್ಷ ಶರಣಿಕುಮಾರ ದೋಖಾ, ಅಧಿಕಾರಿಗಳು ಗ್ರಾಮಾಂತರ ಪ್ರದೇಶದ ಜನರಿಗೆ ನೀಡಬೇಕಾದ ಸವಲತ್ತುಗಳನ್ನು ಪ್ರಾಮಾಣಿಕವಾಗಿ ನೀಡುವಂತೆ ಸಲಹೆ ನೀಡಿದರು. ಸಭೆಯಲ್ಲಿ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನೆ ನಡೆಸಲಾಯಿತು. ಜಿಪಂ ಮುಖ್ಯ ಯೋಜನಾಧಿಕಾರಿ ಬಸವರಾಜ ಸ್ವಾಗತಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

