ಕ್ರಿಮಿನಲ್ ಪ್ರಕರಣ ದಾಖಲಿಸಿ
ಕನ್ನಡಪ್ರಭ ವಾರ್ತೆ ಯಾದಗಿರಿ ಜು. 22
ಸರ್ಕಾರಿ ಜಮೀನು ಹಾಗೂ ರುದ್ರಭೂಮಿಗಳನ್ನು ಒತ್ತುವರಿ ಮಾಡಿಕೊಳ್ಳುವವರ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸಬೇಕೆಂದು ಜಿಲ್ಲಾಧಿಕಾರಿ ಎಫ್.ಆರ್. ಜಮಾದಾರ್ ಜಿಲ್ಲೆಯ ಎಲ್ಲ ತಹಸೀಲ್ದಾರರಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.
ನಗರದಲ್ಲಿ ಸೋಮವಾರ ಕಂದಾಯ ಇಲಾಖೆ ಅಧಿಕಾರಿಗಳೊಂದಿಗೆ ನಡೆಸಿದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ಜಿಲ್ಲೆಯಲ್ಲಿ ಸರ್ಕಾರಿ ಜಮೀನು, ರುದ್ರಭೂಮಿ ಒತ್ತುವರಿ ಮಾಡಿಕೊಳ್ಳುವವರ ವಿರುದ್ಧ ಎಫ್ಐಆರ್ ಮತ್ತು ಕ್ರಿಮಿನಲ್ ಪ್ರಕರಣಗಳನ್ನು ದಾಖಲಿಸಬೇಕು. ಉಪ ಆಯುಕ್ತರನ್ನು ಇಂತಹ ಒತ್ತುವರಿ ಪ್ರಕರಣಗಳ ಬಗ್ಗೆ ನಿಗಾ ವಹಿಸಲು ನೋಡಲ್ ಅಧಿಕಾರಿಯಾಗಿ ನೇಮಿಸಲಾಗಿದೆ ಎಂದು ಹೇಳಿದರು.
ನ್ಯಾಯಾಲಯ ಅಧಿಕಾರಿ ನೇಮಿಸಿ: ಅದರಂತೆ ಅರಣ್ಯ ಭೂಮಿ ಒತ್ತುವರಿ ಬಗ್ಗೆಯೂ ಹೆಚ್ಚಿನ ನಿಗಾ ವಹಿಸಬೇಕು. ಈ ಪ್ರಕರಣಗಳ ಇತ್ಯರ್ಥಕ್ಕಾಗಿ ಅನುಪಾಲನೆ ಮಾಡಲು ಒಬ್ಬರನ್ನು ನ್ಯಾಯಾಲಯ ಅಧಿಕಾರಿಯಾಗಿ ನೇಮಿಸಿಕೊಳ್ಳುವಂತೆ ತಹಸೀಲ್ದಾರರು ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳಿಗೆ ಸೂಚಿಸಿದರು. ಆರೋಗ್ಯ ಇಲಾಖೆ ಮತ್ತು ಜಿಲ್ಲಾ ಆಸ್ಪತ್ರೆಗೆ ಸಂಬಂಧಿಸಿದ ನ್ಯಾಯಾಲಯಗಳ ಪ್ರಕರಣಗಳ ಬಗ್ಗೆ ನಿಗಾವಹಿಸಲು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ನೋಡಲ್ ಅಧಿಕಾರಿಯಾಗಿ ಕಾರ್ಯನಿರ್ವಹಿಸಲು ಸೂಚನೆ ನೀಡಿದರು.
ಜಿಲ್ಲೆಯಲ್ಲಿ ಸಕಾಲ ಯೋಜನೆಗೆ ಸಂಬಂಧಪಟ್ಟಂತೆ ಗ್ರಾಪಂ, ತಾಪಂ ಮತ್ತು ಜಿಪಂ ವ್ಯಾಪ್ತಿಯಲ್ಲಿ ಸಕಾಲ ಅರ್ಜಿಗಳಿಗೆ ಆಯಾ ಗ್ರಾಪಂ ಪಿಡಿಒಗಳು ಅಥವಾ ತಾಪಂ ಅಧಿಕಾರಿಗಳು ಸೂಕ್ತ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಬೇಕೆಂದು ಸಿಇಒಗೆ ತಿಳಿಸಿದರು.
ಸಕಾಲ ಅರ್ಜಿ ಇತ್ಯರ್ಥಕ್ಕೆ ಸೂಚನೆ: ಸಕಾಲ ಯೋಜನೆಯಡಿ ಬರುವ ಅರ್ಜಿಗಳನ್ನು ತ್ವರಿತವಾಗಿ ಇತ್ಯರ್ಥಪಡಿಸಲು ಮತ್ತು ಜನರ ಸಮಸ್ಯೆಗಳಿಗೆ ಸ್ಪಂದಿಸಲು ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳಿಗೆ ಸೂಚಿಸಿದರು.
ಜಿಲ್ಲೆಯಲ್ಲಿ ಬಿಪಿಎಲ್ ರೈತ ಫಲಾನುಭಿಗಳಿಗೆ ನೀಡಬಹುದಾದ ಇನ್ಪುಟ್ ಸಬ್ಸಿಡಿ ಹಣ ಅರ್ಹ ಫಲಾನುಭವಿಗಳಿಗೆ ತಲುಪಬೇಕು. ಈವರೆಗೆ ಇಂತಹ ಹಣ ಸಂದಾಯ ಮಾಡಿರುವ ಬಗ್ಗೆ ಕೃಷಿ ಇಲಾಖೆ ಜಂಟಿ ನಿರ್ದೇಶಕರು ಸೂಕ್ತ ಪರಿಶೀಲನೆ ನಡೆಸಿ ವರದಿಯನ್ನು ನೀಡಬೇಕು. ಕಂದಾಯ ಇಲಾಖೆ ಅಧಿಕಾರಿಗಳು ಸಾಮಾಜಿಕ ಭದ್ರತಾ ಯೋಜನೆಯಡಿ, ಅಂತ್ಯಸಂಸ್ಕಾರ, ವಿಧವಾ ವೇತನ, ಹಿರಿಯ ನಾಗರಿಕರಿಗೆ ವೃದ್ಧಾಪ್ಯ ವೇತನಗಳನ್ನು ಸಕಾಲಕ್ಕೆ ಅರ್ಹರಿಗೆ ತಲುಪಿಸಬೇಕು. ಅರ್ಹ ಅಂಗವಿಕಲರಿಗೆ ಪ್ರಮಾಣ ಪತ್ರಗಳನ್ನು ಸಹ ಪರಿಶೀಲಿಸಿ ನೀಡುವಂತೆ ಸೂಚನೆ ನೀಡಿದರು.
ಬಿಸಿಯೂಟ- ನಿಗಾ ಇರಲಿ: ಜಿಲ್ಲೆಯಲ್ಲಿ ಶಾಲಾ ಮಕ್ಕಳ ಬಿಸಿಯೂಟದ ಬಗ್ಗೆ ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳು ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳಿಗೆ ಬಿಸಿಯೂಟ ನೀಡುವ ಮುಂಚೆ ಆಯಾ ಶಾಲೆಯ ಶಿಕ್ಷಕರು, ಮುಖ್ಯೋಪಾದ್ಯಾಯರು ಮತ್ತು ಅಡುಗೆ ಮಾಡುವವರು ಕಡ್ಡಾಯವಾಗಿ ಆಹಾರವನ್ನು ಸೇವಿಸಿ ಪರೀಕ್ಷಿಸಿ ಮಕ್ಕಳಿಗೆ ನೀಡಬೇಕು. ಗುಣಮಟ್ಟದ ಆಹಾರ ನೀಡುತ್ತಿರುವ ಮತ್ತು ನಿರ್ವಹಣೆಯ ಬಗ್ಗೆ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕರು ಕೂಡ ಪ್ರತಿವಾರ ವರದಿ ನೀಡಬೇಕೆಂದು ಜಿಲ್ಲಾಧಿಕಾರಿಗಳು ಕಟ್ಟುನಿಟ್ಟಿನ ಸೂಚನೆ ನೀಡಿದರು. ಅಪರ ಜಿಲ್ಲಾಧಿಕಾರಿ ಜಹೀರಾ ನಸೀಮ್ ಇತರರು ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

