ಗುಲ್ಬರ್ಗಾ

ಆಲ್ದಾಳ ಶಾಲೆಯಲ್ಲಿ ಶಿಕ್ಷಕರ ಕೊರತೆ

Published On :

ಶಹಾಪುರ: ತಾಲೂಕಿನ ಆಲ್ದಾಳ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕಳೆದ ಮೂರು ವರ್ಷಗಳಿಂದ ಇಬ್ಬರೇ ಶಿಕ್ಷಕರು ಕಾರ್ಯನಿರ್ವಹಿಸುತ್ತಿದ್ದು, ವಿದ್ಯಾರ್ಥಿಗಳ ಅಭ್ಯಾಸಕ್ಕೆ ತೊಂದರೆಯಾಗಿದೆ ಎಂದು ಎಸ್‌ಡಿಎಂಸಿ ಅಧ್ಯಕ್ಷರು, ಸದಸ್ಯರು ಹಾಗೂ ಪಾಲಕರು ಆರೋಪಿಸಿದ್ದಾರೆ. ಈ ಶಾಲೆಯು ಹಿರಿಯ ಪ್ರಾಥಮಿಕ ಶಾಲೆಯಾಗಿರುವುದರಿಂದ 197 ಮಕ್ಕಳು ಅಭ್ಯಾಸ ಮಾಡುತ್ತಿದ್ದಾರೆ. ಆದರೆ ಶಿಕ್ಷಕರ ಕೊರತೆಯಿಂದ ಕಲಿಕೆಗೆ ತೊಂದರೆಯಾಗುತ್ತಿದೆ. ಸುಮಾರು 100 ವಿದ್ಯಾರ್ಥಿಗಳಿಗೆ ಒಬ್ಬ ಶಿಕ್ಷಕರು ಕಲಿಸುವಂತಾಗಿದೆ. ಪಾಲಕರು ತಮ್ಮ ಮಕ್ಕಳನ್ನು ಬೇರೆ ಶಾಲೆಗೆ ಬಿಡುವಂತಹ ಪರಸ್ಥಿತಿ ನಿರ್ಮಾಣವಾಗಿದೆ. ಆದರೂ ಸಮಸ್ಯೆ ಪರಿಹರಿಸುವ ನಿಟ್ಟಿನಲ್ಲಿ ಇಲಾಖೆ ಅಧಿಕಾರಿಗಳು ಗಮನ ಹರಿಸಿಲ್ಲ. ವಾರದೊಳಗೆ ಶಿಕ್ಷಕರನ್ನು ನೇಮಿಸದಿದ್ದಲ್ಲಿ ಶಾಲೆಗೆ ಬೀಗ ಹಾಕಿ ಪ್ರತಿಭಟಿಸಲಾಗುವುದು ಎಂದು ನಾಗಪ್ಪಗೌಡ ಮಾಲಿಪಾಟೀಲ ಇತರರು ಎಚ್ಚರಿಸಿದ್ದಾರೆ.
ಬಾಲಕಿ ಮೇಲೆ ವೃದ್ಧ ಅತ್ಯಾಚಾರ
ಶಹಾಪುರ: ತಾಲೂಕಿನ ಇಬ್ರಾಹಿಂ ಪುರ ಗ್ರಾಮದಲ್ಲಿ ಮೂರು ವರ್ಷದ ಬಾಲಕಿ ಮೇಲೆ 60 ವರ್ಷದ ವೃದ್ಧನೊಬ್ಬ ಅತ್ಯಾಚಾರ ನಡೆಸಿದ ಘಟನೆ ಜರುಗಿದೆ. ಗ್ರಾಮದ ದೌಲಸಾಬ್ ಎಂಬಾತ ಬಾಲಕಿ ಮೇಲೆ ಅತ್ಯಾಚಾರ ಎಸಗಿದ್ದಾನೆ ಎಂದು ಬಾಲಕಿಯ ತಾಯಿ ಶಹಾಪುರ ಠಾಣೆಯಲ್ಲಿ ದೂರು ನೀಡಿದ್ದಾರೆ. ಮೂರು ದಿನಗಳ ಹಿಂದೆಯೇ ಅತ್ಯಾಚಾರ ನಡೆಸಿದ್ದು, ಸೋಮವಾರ ಆಸ್ಪತ್ರೆಗೆ ಬಂದಾಗ ವಿಷಯ ಬೆಳಕಿಗೆ ಬಂದಿದೆ. ಇಬ್ರಾಂಹಿಪುರ ಗ್ರಾಮದಲ್ಲಿ ಬಾಡಿಗೆ ಮನೆಯಲ್ಲಿ ನಾವು ವಾಸಿಸುತ್ತಿದ್ದು, ತಮ್ಮ 3 ವರ್ಷದ ಬಾಲಕಿ ಮೇಲೆ ಪಕ್ಕದ ಮನೆಯ 60 ವರ್ಷದ ದೌಲಸಾಬ ಎಂಬಾತ ಅತ್ಯಾಚಾರ ಎಸಗಿದ್ದಾನೆ ಎಂದು ಬಾಲಕಿಯ ತಾಯಿ ಠಾಣೆಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾಳೆ. ಸೋಮವಾರ ಬಾಲಕಿಗೆ ವಿಪರೀತ ಜ್ವರದಿಂದ ಬಳಲುತ್ತಿದ್ದುದರಿಂದ ಆಸ್ಪತ್ರೆಗೆ ಚಿಕಿತ್ಸೆಗೆ ಬಂದಾಗ ವೈದ್ಯರು ಈ ಕುರಿತು ಸಂಶಯ ವ್ಯಕ್ತಪಡಿಸಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಗುಲ್ಬರ್ಗ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ. ಡಿವೈಎಸ್ಪಿ ಎಸ್.ಡಿ. ಕಟ್ಟಿಮನಿ ಹಾಗೂ ಪೊಲೀಸ್ ಅಧಿಕಾರಿಗಳು ಇಬ್ರಾಹಿಂ ಪುರ ಗ್ರಾಮಕ್ಕೆ ಭೇಟಿ ನೀಡಿದ್ದಾರೆ.
ಮೂರು ದಿನ ನೀರಿಲ್ಲ
ಸುರಪುರ: ಕುಂಬಾರಪೇಟೆಯ ನೀರು ಶುದ್ಧೀಕರಣ ಘಟಕದ 215 ಎಚ್‌ಪಿ ಮೋಟಾರ್‌ನಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡಿದ್ದರಿಂದ ನೀರು ಪೂರೈಕೆ ಸ್ಥಗಿತಗೊಳಿಸಲಾಗಿದೆ. 2-3 ದಿನಗಳಲ್ಲಿ ಮೋಟಾರ್ ದುರಸ್ತಿ ಮಾಡಿಸಿ ಎಂದಿನಂತೆ ನೀರು ಪೂರೈಸಲಾಗುವುದು. ಕಾರಣ ಪಟ್ಟಣದಲ್ಲಿ ಮೂರು ದಿನ ನೀರು ಪೂರೈಕೆಯಾಗುವುದಿಲ್ಲ. ನಿಟ್ಟಿನಲ್ಲಿ ನಾಗರಿಕರು ಸಹಕರಿಸಬೇಕು. ಅವಶ್ಯಕತೆ ಇರುವ ಕಡೆ ಟ್ಯಾಂಕರ್ ಮೂಲಕ ನೀರು ಪೂರೈಸಲಾಗುವುದು ಎಂದು ಪುರಸಭೆ ಮುಖ್ಯಾಧಿಕಾರಿ ಶಿವಕುಮಾರ ಹಿರೇಮಠ ತಿಳಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.