ಗುಲ್ಬರ್ಗಾ

ಕೃಷಿಯಲ್ಲಿ ಆಧುನಿಕತೆ ಅಳವಡಿಸಿಕೊಳ್ಳಿ

Published On :

ಯಾದಗಿರಿ: ಕೃಷಿ ಮಹಾವಿದ್ಯಾಲಯದ ವಿದ್ಯಾರ್ಥಿಗಳು ವಾಸ್ತವಿಕ ಅಧ್ಯಯನಕ್ಕಾಗಿ ಗ್ರಾಮಕ್ಕೆ ಆಗಮಿಸಿದ್ದು, ರೈತರೊಂದಿಗೆ ಉತ್ತಮ ಸಂಪರ್ಕ ಸಾಧಿಸಿ ಆಧುನಿಕ ಕೃಷಿ ತಂತ್ರಜ್ಞಾನ ಬಳಕೆ ಕುರಿತು ಮಾಹಿತಿ ನೀಡಲಿದ್ದಾರೆ. ಅವರ ಅನುಭವ ಪಡೆದು ಕೃಷಿಯಲ್ಲಿ ಆಧುನಿಕತೆ ಅಳವಡಿಸಿಕೊಳ್ಳಬೇಕು ಎಂದು ಕೃಷಿ ಅಧಿಕಾರಿ ವಿಶ್ವನಾಥ ಹೇಳಿದರು. ಕೃಷಿ ವಿಶ್ವವಿದ್ಯಾನಿಲಯ ರಾಯಚೂರು ಹಾಗೂ ಕೃಷಿ ಮಹಾವಿದ್ಯಾಲಯ ಭೀಮರಾಯನಗುಡಿ ಅಂತಿಮ ವರ್ಷದ ವಿದ್ಯಾರ್ಥಿಗಳು ತಾಲೂಕಿನ ಹತ್ತಿಕುಣಿ ರೈತ ಸಂಪರ್ಕ ಕೇಂದ್ರದ ಆವರಣದಲ್ಲಿ ಬುಧವಾರ ರೈತರೊಂದಿಗೆ ಗ್ರಾಮೀಣ ಕೃಷಿ ಕಾರ್ಯಾನುಭವ ಯೋಜನೆಯಡಿ ನಡೆದ ಸಾಮಾನ್ಯ ಸಭೆಯಲ್ಲಿ ಅವರು ಮಾತನಾಡಿದರು. ಕೃಷಿ ಕಾಲೇಜಿನ ವಿದ್ಯಾರ್ಥಿ ಗಿರೀಶ ಇರಾವಟ್ಟಿ ಹಾಗೂ ಇನ್ನಿತರ ವಿದ್ಯಾರ್ಥಿಗಳು ಮಾತನಾಡಿ, ನಾವು ಗ್ರಾಮದಲ್ಲಿ 3 ತಿಂಗಳ ಕಾಲ ವಾಸ ಮಾಡಿ ರೈತರ ಬದುಕು ಮತ್ತು ಅವರ ಕೃಷಿ ಕಾರ್ಯದ ಕುರಿತು ಅಧ್ಯಯನ ಮಾಡಲಿದ್ದೇವೆ. ಮಣ್ಣು, ಬೀಜ, ಬೀಜೋಪಚಾರ, ಗೊಬ್ಬರ, ಕೀಟನಾಶಕಗಳ ಬಳಕೆ, ಸಾವಯವ ಕೃಷಿ ಪದ್ಧತಿ ಅಳವಡಿಕೆ ಹಾಗೂ ಆಧುನಿಕ ಕೃಷಿ ತಂತ್ರಜ್ಞಾನದ ಕುರಿತು ರೈತರೊಂದಿಗೆ ಚರ್ಚಿಸಿ ಅಗತ್ಯ ಮಾಹಿತಿ ನೀಡುತ್ತೇವೆ ಎಂದು ತಿಳಿಸಿದರು. ರೈತರಾದ ಬಸವರಾಜಪ್ಪ ಪ್ಯಾಟಿ ಮಾತನಾಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಗ್ರಾಪಂ ಅಧ್ಯಕ್ಷ ಲಕ್ಷ್ಮೀಕಾಂತ ತಮ್ಮಣೋರ ವಹಿಸಿದ್ದರು. ಸಭೆಯಲ್ಲಿ ಗ್ರಾಮದ ರೈತರು ಭಾಗವಹಿಸಿದ್ದರು.
ಪ್ರಮಾಣ ಪತ್ರ ಕಲ್ಪಿಸಲು
ಕುಂಬಾರರ ಒತ್ತಾಯ
ಯಾದಗಿರಿ: ರೈತರಿಗೆ ಹಾಗೂ ವಿದ್ಯಾರ್ಥಿಗಳಿಗೆ ಸಂಬಂಧಪಟ್ಟ ಪ್ರಮಾಣ ಪತ್ರಗಳು ಶೀಘ್ರವಾಗಿ ಲಭಿಸುವಂತೆ ಕ್ರಮ ಕೈಗೊಳ್ಳಬೇಕೆಂದು ಸರ್ಕಾರಕ್ಕೆ ಕುಂಬಾರ ಸಮಾಜದ ಜಿಲ್ಲಾಧ್ಯಕ್ಷ ಶೇಖರಪ್ಪ ಅರ್ಜುಣಿಗಿ ಅಗ್ರಹಿಸಿದ್ದಾರೆ. ರೈತರು ಮುಂಗಾರು ಬಿತ್ತನೆಯ ತಯಾರಿಯಲ್ಲಿದ್ದು, ಸರ್ಕಾರದ ಹಲವಾರು ಯೋಜನೆಗಳಿಂದ ರಿಯಾಯಿತಿ ದರದಲ್ಲಿ ಬಿತ್ತನೆಯ ಬೀಜ, ಗೊಬ್ಬರ, ಕೃಷಿ ಉಪಕರಣ ಹಾಗೂ ಕ್ರಿಮಿನಾಶಕಗಳನ್ನು ಒದಗಿಸಲಾಗುತ್ತದೆ. ರೈತರು ರಿಯಾಯಿತಿ ದರದಲ್ಲಿ ಸೌಲಭ್ಯ ಪಡೆಯಲು ಪಹಣಿ ಪತ್ರದ ಅವಶ್ಯಕತೆ ಇದ್ದು, ಒಂದೇ ದಿನದಲ್ಲಿ ದೊರೆಯುವಂತೆ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದ್ದಾರೆ. ವಿದ್ಯಾರ್ಥಿಗಳ ತರಗತಿ ಪ್ರವೇಶಕ್ಕೆ ಜಾತಿ, ಆದಾಯ ಪ್ರಮಾಣ ಪತ್ರ ಅಗತ್ಯವಿದ್ದು, ಕೂಡಲೇ ದೊರೆಯುವಂತೆ  ಸಮಾಜದ ಮುಖಂಡರು ಮನವಿ ಮಾಡಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.