ಗುಲ್ಬರ್ಗಾ

ಆತ್ಮವಿಶ್ವಾಸದ ಬದುಕು ರೂಪಿತವಾಗಲಿ

Published On :

ಕನ್ನಡಪ್ರಭ ವಾರ್ತೆ, ಯಾದಗಿರಿ, ಜೂ.9
ನೂತನ ಜಿಲ್ಲೆಯ ಯುವಕರಲ್ಲಿ ಹಾಗೂ ನಾಗರಿಕರಲ್ಲಿ ಆತ್ಮವಿಶ್ವಾಸದ ಬದುಕು ರೂಪಿತವಾದಲ್ಲಿ ಮಾತ್ರ ಬದಲಾವಣೆ ಕಾಣಲು ಸಾಧ್ಯ ಎಂದು ವಿಕಾಸ ಅಕಾಡೆಮಿಯ ಮುಖ್ಯಸ್ಥ, ರಾಜ್ಯಸಭಾ ಸದಸ್ಯ ಬಸವರಾಜ ಪಾಟೀಲ್ ಸೇಡಂ ಅಭಿಪ್ರಾಯಪಟ್ಟರು.
ನಗರದ ವೀರಶೈವ ಕಲ್ಯಾಣ ಮಂಟಪದಲ್ಲಿ ಭಾನುವಾರ ನಡೆದ ಜಿಲ್ಲೆಯ ಅಭಿವೃದ್ಧಿ ಕುರಿತು ಚಿಂತನ ಸಭೆಯಲ್ಲಿ ಮಾತನಾಡಿದ ಪಾಟೀಲ್, ಯುವಕರು ಹಾಗೂ ಹಿರಿಯರು ಒಂದಾಗಿ ಕೆಲಸ ಮಾಡಿ ಜಿಲ್ಲೆಯ ಪ್ರಗತಿಗೆ ತಮ್ಮದೇ ಆದ ಕೊಡುಗೆ ನೀಡಬೇಕೆಂದು ಕರೆ ನೀಡಿದರು.
ಇತರರಿಗೆ ಮಾದರಿಯಾಗಿ..: 1974ರಲ್ಲಿ ಸೇಡಂನಲ್ಲಿ ಕೊತ್ತಲ ಬಸವೇಶ್ವರ ಶಿಕ್ಷಣ ಸಮಿತಿಯಿಂದ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ಸೇವೆ ಹಾಗೂ ಸಾಮಾಜಿಕ ಕಾಳಜಿ ಹಿನ್ನೆಲೆಯಲ್ಲಿ ಆರಂಭಗೊಂಡಿತು. ನಂತರ ಹೈದರಾಬಾದ್ ಕರ್ನಾಟಕ ಅಭಿವೃದ್ಧಿ ವಿಭಾಗ ಹಾಗೂ ವಿಕಾಸ ಅಕಾಡಮಿ ಪ್ರಾರಂಭಿಸಿ ಈ ಭಾಗದ ಸರ್ವಾಂಗೀಣ ಪ್ರಗತಿಗಾಗಿ 26 ಇಲಾಖೆಗಳ ಮೂಲಕ ಶ್ರಮಿಸಲಾಗುತ್ತಿದೆ. ಯುವಕರು ಆತ್ಮವಿಶ್ವಾಸ ಹಾಗೂ ಸ್ವಾವಲಂಬಿ ಬದುಕು ನಡೆಸುವ ಮೂಲಕ ಇತರರಿಗೆ ಮಾದರಿಯಾಗಬೇಕು ಎಂದು ಸಲಹೆ ನೀಡಿದರು.
371ನೇ ಕಲಂ ತಿದ್ದುಪಡಿಯಿಂದ ನಿರೀಕ್ಷಿತ ಪ್ರಮಾಣದಲ್ಲಿ ಪ್ರಗತಿ ಸಾಧಿಸಲು ಸಾಧ್ಯವಿಲ್ಲ. ನೆರೆಯ ಆಂಧ್ರಪ್ರದೇಶದಲ್ಲಿ 371ನೇ ಕಲಂಗೆ ಎರಡು ಬಾರಿ ತಿದ್ದುಪಡಿ ತಂದರೂ ಅಭಿವೃದ್ಧಿ ಸಾಧಿಸಲು ಸಾಧ್ಯವಾಗಿಲ್ಲ. ಪರಿಣಾಮ ಅಲ್ಲಿನ ಜನತೆ ಪ್ರತ್ಯೇಕ ರಾಜ್ಯಕ್ಕಾಗಿ ಬೇಡಿಕೆ ಇಟ್ಟು ಹೋರಾಟ ಮಾಡುತ್ತಿದ್ದಾರೆ ಎಂದು ವಿಷಾದ ವ್ಯಕ್ತಪಡಿಸಿದರು.
ಸಾಧಕರಿಗೆ ಪ್ರೋತ್ಸಾಹ: ವಿಕಾಸ ಅಕಾಡೆಮಿಯು ಕಳೆದ ಕೆಲವು ವರ್ಷಗಳಿಂದ ಸಾವಿರಾರು ಕಾರ್ಯಕ್ರಮಗಳ ಮೂಲಕ ಜನರಲ್ಲಿ ಜಾಗೃತಿ ಮೂಡಿಸುತ್ತಿದೆ. ಬರುವ ದಿನಗಳಲ್ಲಿ ಆಯಾ ತಾಲೂಕಗಳ ಸಾಮಾಜಿಕ ಕಳಕಳಿಯುಳ್ಳ ಯುವಕರ ತಂಡ ರಚನೆ ಮಾಡಿ ಅವರಿಗೆ ಸೂಕ್ತ ತರಬೇತಿ ನೀಡಲಾಗುವುದು. ಆಯಾ ಕ್ಷೇತ್ರಗಳಲ್ಲಿ ಸಾಧನೆಗೈದ ಸಾಧಕರನ್ನು ಎಲ್ಲ ಭಾಗಕ್ಕೂ ಕರೆಯಿಸಿ ಅವರಿಂದ ಮಾರ್ಗದರ್ಶನ ನೀಡಿ ಪ್ರೇರಣಾ ವಾತಾವರಣ ನಿರ್ಮಾಣ ಮಾಡಲು ಒತ್ತು ನೀಡಲಾಗುವುದು ಎಂದು ತಿಳಿಸಿದರು.
ವಿಕಾಸ ಅಕಾಡಮಿ ಜಿಲ್ಲಾ ಸಂಚಾಲಕ ನೀಲಕಂಠರಾಯ ಯಲ್ಹೇರಿ ಪ್ರಾಸ್ತವಿಕವಾಗಿ ಮಾತನಾಡಿ, ಅಕಾಡಮಿ ಚಟುವಟಿಗಳನ್ನು ವಿವರಿಸಿದರು. ವೇದಿಕೆ ಕೃಷಿ ವಿಭಾಗದ ಮುಖ್ಯಸ್ಥ ಶಾಂತರೆಡ್ಡಿ ವನಕೇರಿ, ಸಂಯೋಜಕ ಮಾರ್ಥಂಡ ಶಾಸ್ತ್ರೀ, ವಿಶ್ವ ಸೇವಾ ಮಿಷನ್ ಅಧ್ಯಕ್ಷ ವಿಶ್ವನಾಥ ಸ್ವಾಮಿ ಇದ್ದರು.
---

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.