ಯಡಿಯೂರಪ್ಪ ಬಿಜೆಪಿ ಸೇರುವುದಿಲ್ಲ: ಗುರುಪಾಟೀಲ
ಕನ್ನಡಪ್ರಭ ವಾರ್ತೆ ಕೆಂಭಾವಿ ಜೂ.27
ಮಾಜಿ ಮುಖ್ಯಮಂತ್ರಿ ಹಾಗೂ ಕೆಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪನವರು ಯಾವುದೇ ಕಾರಣಕ್ಕೂ ಬಿಜೆಪಿಗೆ ಮರಳಿ ಹೋಗುವುದಿಲ್ಲ ಎಂದು ಶಾಸಕ ಗುರುಪಾಟೀಲ ಶಿರವಾಳ ತಿಳಿಸಿದರು.
ಪಟ್ಟಣಕ್ಕೆ ಆಗಮಿಸಿದ್ದ ಅವರು ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿ, ಕೆಜೆಪಿ ಪಕ್ಷವು ಬಿಜೆಪಿಯಲ್ಲಿ ವಿಲೀನವಾಗದೆ ಪಕ್ಷವನ್ನು ಬಲಪಡಿಸಿ ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಸಮಾನ ಮನಸ್ಕ ಪಕ್ಷಗಳೊಂದಿಗೆ ಹೊಂದಾಣಿಕೆ ಮಾಡಿಕೊಂಡು ಚುನಾವಣೆ ಎದಿರುಸುತ್ತೇವೆ. ಬಿಎಸ್ವೈ ಬಿಜೆಪಿಗೆ ಹೋಗುತ್ತಾರೆ ಎನ್ನುವುದು ಕೇವಲ ಊಹಾಪೋಹ ಎಂದು ಸ್ಪಷ್ಟಪಡಿಸಿದರು.
ರಾಜ್ಯದಲ್ಲೇ ಅತಿ ದೊಡ್ಡ ಹೋಬಳಿ ಕೇಂದ್ರ: ಕೆಂಭಾವಿಯನ್ನು ತಾಲೂಕು ಕೇಂದ್ರವನ್ನಾಗಿ ಮಾಡಲು ಅಗತ್ಯವಾದ ಸಂಪನ್ಮೂಲವನ್ನು ಕ್ರೋಢಿಕರಿಸಿ ಪಕ್ಷಭೇದ ಮರೆತು ಎಲ್ಲರನ್ನು ವಿಶ್ವಾಸಕ್ಕೆ ತೆಗೆದುಕೊಂಡು ತಾಲೂಕಿಗೆ ಬೇಕಾದ ಅಗತ್ಯ ದಾಖಲಾತಿಗಳನ್ನು ಸಿದ್ಧಪಡಿಸಿ ಮುಖ್ಯಮಂತ್ರಿಗಳ ಬಳಿಗೆ ನಿಯೋಗ ತೆಗೆದುಕೊಂಡು ಹೋಗುತ್ತೇನೆ. ಕೆಂಭಾವಿ ರಾಜ್ಯದಲ್ಲಿಯೇ ಅತಿದೊಡ್ಡ ಹೋಬಳಿ ಕೇಂದ್ರವಾಗಿದ್ದು, ತಾಲೂಕು ಕೇಂದ್ರ ಮಾಡಲು ಎಲ್ಲ ಅರ್ಹತೆಯನ್ನು ಹೊಂದಿದೆ ಎಂದು ಅವರು ಹೇಳಿದರು.
15 ಕೋಟಿ ವೆಚ್ಚದಲ್ಲಿ ಕೆರೆ ನಿರ್ಮಾಣ: ನೀರಿನಲ್ಲಿ ಆರ್ಸೆನಿಕ್ ಅಂಶ ಕಂಡುಬಂದಿರುವ ಪರಸನಹಳ್ಳಿ, ಕರಡಕಲ್, ಜೈನಾಪುರ, ಕಿರದಳ್ಳಿ, ಕಿರದಳ್ಳಿ ತಾಂಡಾ ಸೇರಿದಂತೆ ಸುಮಾರು 15 ಗ್ರಾಮಗಳಿಗೆ ಶುದ್ಧ ಕುಡಿಯುವ ನೀರು ಒದಗಿಸುವ ಸಲುವಾಗಿ 15 ಕೋಟಿ ವೆಚ್ಚದಲ್ಲಿ ಕೆಂಭಾವಿ ಸಮೀಪ ಕೃಷ್ಣಾ ಭಾಗ್ಯ ಜಲ ನಿಗಮದ ಸುಮಾರು 25 ಎಕರೆ ಪ್ರದೇಶದಲ್ಲಿ ಕೆರೆಯನ್ನು ನಿರ್ಮಿಸಲಾಗುವುದು. ನಾರಾಯಣಪುರ ಎಡದಂಡೆ ಕಾಲುವೆಯಿಂದ ನೀರನ್ನು ಲಿಫ್ಟ್ ಮಾಡಿ ಪೈಪ್ಲೈನ್ ಮುಖಾಂತರ ನೀರನ್ನು ಒದಗಿಸಲಾಗುವುದು. ಈ ಬಗ್ಗೆ ಕೆಬಿಜೆಎನ್ನೆಲ್ ಎಂಡಿ ಅವರಿಗೆ ಪ್ರಸ್ತಾವನೆ ಸಲ್ಲಿಸಲಾದ್ದು, ಶೀಘ್ರದಲ್ಲಿ ಕೆಲಸ ಪ್ರಾರಂಭಿಸಲಾಗುವುದು ಎಂದ ತಿಳಿಸಿದರು.
ಸುರಪುರ- ಹುನಗುಂದ ರಸ್ತೆ: ಸುರಪುರ- ಹುನಗುಂದ ರಸ್ತೆ ಕಾಮಗಾರಿಗೆ 46 ಕೋಟಿ ವೆಚ್ಚದ ಟೆಂಡರ್ ಪ್ರಕ್ರಿಯೆ ಪೂರ್ಣಗೊಂಡಿದ್ದು, 15 ದಿನಗಳಲ್ಲಿ ಕೆಲಸ ಪ್ರಾರಂಭವಾಗುತ್ತದೆ. ಕಿರದಳ್ಳಿ ತಾಂಡಾದಲ್ಲಿ ಶುದ್ಧ ಕುಡಿಯುವ ನೀರಿನ ಘಟಕದ ಕಾಮಗಾರಿ ಪ್ರಗತಿಯಲ್ಲಿದ್ದು, ಒಂದು ವಾರದಲ್ಲಿ ಕೆಲಸ ಮುಗಿದು ನೀರು ಸರಬರಾಜು ಮಾಡಲಾಗುತ್ತದೆ ಎಂದು ಹೇಳಿದರು. ಈ ಸಂದರ್ಭದಲ್ಲಿ ಸುರೇಶ ಸೊನ್ನದ, ರವಿ ಸೊನ್ನದ, ವಿಕಾಸ ಸೊನ್ನದ, ಸುಧಾಕರ ಡಿಗ್ಗಾವಿ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

